

ವಿಜಯಪುರ: ಸಾರ್ವಜನಿಕರು ರಸ್ತೆ ದಾಟುವಾಗ ಹಾಗೂ ವಾಹನ ಚಾಲನೆ ಮಾಡುವಾಗ ರಸ್ತೆ ಸುರಕ್ಷತಾ ನಿಯಮ ಪಾಲಿಸಬೇಕು ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ ಹೇಳಿದರು.
ರಾಜ್ಯ ಸಾರಿಗೆ ಇಲಾಖೆ ವತಿಯಿಂದ ರಸ್ತೆ ಸುರಕ್ಷತಾ ಮಾಸಾಚರಣೆ ಹಿನ್ನೆಲೆಯಲ್ಲಿ ಸಡಕ್ ಸುರಕ್ಷಾ ಜೀವನ ರಕ್ಷಾ ಘೋಷ ವಾಕ್ಯದಡಿ ನಗರದ ಸಿದ್ಧೇಶ್ವರ ದೇವಸ್ಥಾನ ಬಳಿ ಗುರುವಾರ ಹಮ್ಮಿಕೊಂಡಿದ್ದ ಕಾಲ್ನಡಿಗೆ ಜಾಥಾಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ಸಾರಿಗೆ ಹಾಗೂ ಪೊಲೀಸ್ ಇಲಾಖೆ ಈಗಾಗಲೇ ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ಹಲವು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವ ಜತೆಗೆ ಸಾರ್ವಜನಿಕರಿಗೆ ಮನವರಿಕೆ ಮಾಡಿಕೊಡಲಾಗುತ್ತಿದೆ. ವಾಹನ ಚಾಲನೆ ಮಾಡುವಾಗ ಮೊಬೈಲ್ ಫೋನ್ ಬಳಕೆ ಮಾಡಬಾರದು. ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ವಿದ್ಯಾರ್ಥಿಗಳು ರಸ್ತೆ ಸುರಕ್ಷತೆ ಬಗ್ಗೆ ಜನರಿಗೆ ತಿಳಿ ಹೇಳಬೇಕು. ವಾಹನವನ್ನು ನಿಗದಿತ ವೇಗದಲ್ಲಿ ಮಾತ್ರ ಚಲಾಯಿಸಬೇಕು ಎಂದು ಅವರು ಸಲಹೆ ನೀಡಿದರು.
ಸಿದ್ಧೇಶ್ವರ ದೇವಸ್ಥಾನದಿಂದ ಆರಂಭಗೊಂಡ ಕಾಲ್ನಡಿಗೆ ಜಾಥಾ ಗಾಂಧಿ ಚೌಕ ಮೂಲಕ ಸಂಚರಿಸಿ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದವರೆಗೆ ನಡೆಯಿತು. ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿ ವಸೀಮ್‌ಬಾಬಾ ಮುದ್ದೇಬಿಹಾಳ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಎಸ್.ಬಿ. ಕುರುಬರ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಪಿ.ಎಸ್. ಕೋಲಾರ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಎಸ್.ಜೆ. ಬಿರಾದಾರ, ಮೋಟಾರ್ ವಾಹನ ನಿರೀಕ್ಷಕ ರವಿ ಭಿಸೆ, ಸಂತೋಷ ಪಾಟೀಲ, ಜಿ.ಎಸ್. ರಾಕೇಶ, ಮಹಮ್ಮದ್ ಹುಸೇನ್ , ವಿವಿಧ ಶಾಲಾ ವಿದ್ಯಾರ್ಥಿಗಳು ಮತ್ತಿತರರಿದ್ದರು.