23 ಆಹಾರ ಉದ್ದಿಮೆಗಳಿಗೆ ನೋಟಿಸ್

food
ಜಿಲ್ಲೆಯಲ್ಲಿ ಶನಿವಾರ ವಿವಿಧ ಆಹಾರ ಉದ್ದಿಮೆಗಳಿಗೆ ಭೇಟಿ ನೀಡಿದ ಅಧಿಕಾರಿಗಳು ಆಹಾರದ ಗುಣಮಟ್ಟ ಹಾಗೂ ಶುಚಿತ್ವವನ್ನು ತಪಾಸಣೆ ನಡೆಸಿದರು.
Published on

ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅನುಷ್ಠಾನ ಆಂದೋಲನದ ಭಾಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಎಲ್ಲಾ ಆಹಾರ ಸುರಕ್ಷತಾಧಿಕಾರಿಗಳು ತಮ್ಮ ತಾಲೂಕು ವ್ಯಾಪ್ತಿಯಲ್ಲಿ ನಡೆಸಿದ ತಪಾಸಣೆಯಲ್ಲಿ 23 ವ್ಯಾಪಾರಿಗಳಿಗೆ ನೋಟಿಸ್ ಜಾರಿಗೊಳಿಸಿ 20 ರೂ.ದಂಡ ವಸೂಲಿ ಮಾಡಿದ್ದಾರೆ.
ಶನಿವಾರ ಜಿಲ್ಲೆಯ ನಾಲ್ಕೂ ತಾಲೂಕು ವ್ಯಾಪ್ತಿಯಲ್ಲಿ ಅಧಿಕಾರಿಗಳ ತಂಡ ತಪಾಸಣಾ ಕಾರ್ಯ ಆರಂಭಿಸಿತ್ತು ಈ ವೇಳೆ ವಿವಿಧ ಅಂಗಡಿ, ಹೋಟೆಲ್, ರೆಸ್ಟೋರೆಂಟ್, ಬೇಕರಿ, ಬೀದಿಬದಿ ವ್ಯಾಪಾರಸ್ಥರು ಮತ್ತು ಇತರೆ ಆಹಾರ ವ್ಯಾಪಾರಗಳು ಸೇರಿ 63 ಕಡೆಗಳಲ್ಲಿ ಭೇಟಿ ನೀಡಿ ಆಹಾರ ಉದ್ದಿಮೆಗಳನ್ನು ಪರಿಶೀಲಿಸಿತು. ಈ ವೇಳೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಪಾಡದ ವ್ಯಾಪಾರಿಗಳಿಗೆ ನೋಟಿಸ್ ನೀಡಿ ದಂಡ ವಸೂಲಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅನುಷ್ಠಾನ ಆಂದೋಲನದ ಅಂಗವಾಗಿ ಕಾರ್ಯಾಚರಣೆ ಹಮ್ಮಿಕೊಂಡಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಆಯುಕ್ತರ ಸೂಚನೆಯಂತೆ ಆ. 30 ಮತ್ತು 31 ರಂದು ಎರಡು ದಿನಗಳ ಕಾಲ ಜಿಲ್ಲೆಯಲ್ಲಿ ಆಂದೋಲನ ಹಮ್ಮಿಕೊಳ್ಳಲಾಗಿತ್ತು.
ಅಧಿಕಾರಿಗಳಿಂದ ಜಾಗೃತಿ: ಆಹಾರ ಸಿದ್ಧಪಡಿಸುವ ಸ್ಥಳ, ವ್ಯಾಪಾರದ ಸ್ಥಳಗಳಲ್ಲಿ ಶುಚಿತ್ವ ಕಾಪಾಡಿಕೊಳ್ಳಬೇಕು, ಉತ್ಪಾದಕರ ಆರೋಗ್ಯವು ಉತ್ತಮವಾಗಿರಬೇಕು ಎಂದು ಆಹಾರ ವ್ಯಾಪಾರಿಗಳಿಗೆ ಆಹಾರ ಸುರಕ್ಷತಾಧಿಕಾರಿಗಳು ಜಾಗೃತಿ ಮೂಡಿಸಿದರು. ಆಹಾರ ಪದಾರ್ಥಗಳ ತಯಾರಕರು, ಮಾರಾಟಗಾರರು, ದಾಸ್ತಾನುದಾರರು ಶುಚಿತ್ವಕ್ಕೆ ಒತ್ತು ನೀಡಬೇಕು. ಗ್ರಾಹಕರಿಗೆ ಶುದ್ಧವಾದ ಆಹಾರ ಮತ್ತು ನೀರನ್ನು ಪೂರೈಸಬೇಕು, ಆಹಾರ ಉದ್ದಿಮೆಗಳಲ್ಲಿ ಕೆಲಸ ಮಾಡುವ ಎಲ್ಲ ಕಾರ್ಮಿಕರು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಅಧಿಕಾರಿಗಳು ಸೂಚನೆ ನೀಡಿದರು.
ಕೃತಕ ಬಣ್ಣ ನಿಷೇಧ: ಆಹಾರಕ್ಕೆ ಕೃತಕ ಬಣ್ಣಗಳನ್ನು ಬಳಸಬಾರದು. ಮೊಟ್ಟೆ, ಮೀನು, ಮಾಂಸದ ಪದಾರ್ಥಗಳನ್ನು ಸೂಕ್ತ ತಾಪಮಾನದಲ್ಲಿ ಸಂಗ್ರಹಿಸಿ ಬಳಕೆ ಮಾಡುವಂತಾಗಬೇಕು ಎಂದು ಅಧಿಕಾರಿಗಳು ಆಹಾರ ಉದ್ದಿಮೆದಾರರಿಗೆ ತಿಳಿಸಿದರು. ಎಲ್ಲಿಯಾದರೂ ನಿಯಮ ಮೀರಿದರೆ ಅಂಥವರಿಗೆ ನೋಟಿಸ್ ಜಾರಿಗೊಳಿಸಿ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net