ಚಿಕನ್ ಕಬಾಬ್, ಫಿಶ್ ಆಹಾರದಲ್ಲಿ ಕೃತಕ ಬಣ್ಣ ಬಳಕೆ ನಿಷೇಧ

kabab
Published on

ಬೆಂಗಳೂರು: ಈ ಹಿಂದೆ ಕಾಟನ್ ಕ್ಯಾಂಡಿ ಹಾಗೂ ಗೋಬಿ ಮಂಚೂರಿ ತಯಾರಿಕೆಯಲ್ಲಿ ಕೃತಕ ಬಣ್ಣ ಬಳಕೆ ನಿಷೇಧಿಸಿದ್ದ ರಾಜ್ಯ ಸರ್ಕಾರ, ಇದೀಗ ಫಿಶ್, ಕಬಾಬ್‌ನಂತಹ ಆಹಾರಗಳಲ್ಲಿ ಕೃತಕ ಬಣ್ಣ ಬಳಕೆ ನಿರ್ಬಂಧಿಸಿ ನಿಯಮ ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಿದೆ.

ರಾಜ್ಯಾದ್ಯಂತ ಮಾರಾಟವಾಗುತ್ತಿರುವ ವೆಜ್/ಚಿಕನ್/ಫಿಶ್ ಇತರೆ ಆಹಾರ ಪದಾರ್ಥಗಳಲ್ಲಿ ಕೃತಕ ಬಣ್ಣದ ಬೆರೆಸುವಿಕೆಯಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಈ ರೀತಿಯ ಆಹಾರ ತಯಾರಿಕೆಯಲ್ಲಿ ಕೃತಕ ಬಣ್ಣಗಳನ್ನು ಬೆರೆಸುವುದಕ್ಕೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ನಿಷೇಧ ಹೇರಿದೆ.

ಈ ಸಂಬಂಧ ಇಲಾಖೆಯು ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ 39 ಕಬಾಬ್‌ಗಳ ಮಾದರಿಗಳನ್ನು ಸಂಗ್ರಹಿಸಿ ರಾಜ್ಯ ಪ್ರಯೋಗಾಲಯಗಳಲ್ಲಿ ಪರೀಕ್ಷೆಗೆ ಒಳಪಡಿಸಿದಾಗ, ಅದರಲ್ಲಿ 8 ಕಬಾಬ್‌ನ ಮಾದರಿಗಳು ಕೃತಕ ಬಣ್ಣದಿಂದ (ಸನ್‌ಸೆಟ್ ಯೆಲ್ಲೋ - 7 ಮಾದರಿಗಳು ಹಾಗೂ ಸನ್‌ಸೆಟ್ ಯೆಲ್ಲೋ ಮತ್ತು ಕಾರ್ಮೋಸಿನ್ ಹೊಂದಿರುವ 1 ಮಾದರಿ) ಕೂಡಿರುವುದು ಕಂಡು ಬಂದಿದೆ. ಹೀಗಾಗಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006ರ ನಿಯಮ 3(1), (zz) (viii) ಅನ್ವಯ ಅಸುರಕ್ಷಿತ ಎಂದು ವರದಿ ತಿಳಿಸಿದೆ.

ಕೃತಕ ಬಣ್ಣಗಳು ಬಳಕೆದಾರರ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರಲಿದೆ. ಅಲ್ಲದೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ 2011ರ ನಿಯಮ 16.0 ಅನ್ವಯ ಕಬಾಬ್‌ನ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣಗಳನ್ನು ಬಳಕೆ ಮಾಡುವಂತಿಲ್ಲ. ಹಾಗಾಗಿ ಇಲಾಖೆಯು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006ರ ನಿಯಮ 30(2)(3)ಅಡಿ ಪ್ರದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ ವೆಜ್/ಚಿಕನ್/ಫಿಶ್ ಇತರೆ ಕಬಾಬ್‌ಗಳ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣಗಳನ್ನು ಬಳಸುವುದನ್ನು ನಿರ್ಬಂಧಿಸಿದ ಆದೇಶಿಸಿದೆ.

ಉಲ್ಲಂಘನೆ ಪ್ರಕರಣಗಳು ಕಂಡು ಬಂದಲ್ಲಿ ತಯಾರಿಸುವವರ ಮೇಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ - 2006ರ ನಿಯಮ 59ರ ಅಡಿ 7 ವರ್ಷಗಳಿಂದ ಜೀವಿತಾವಧಿವರೆಗೆ ಜೈಲು ಶಿಕ್ಷೆ ಮತ್ತು 10 ಲಕ್ಷಗಳವರೆಗೆ ದಂಡ ವಿಧಿಸಲು ನ್ಯಾಯಾಲಯದಲ್ಲಿ ಮೊಕದ್ದಮೆಗಳನ್ನು ದಾಖಲಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net