

ಗದಗ: ಅಂಗನವಾಡಿ ಕೇಂದ್ರಗಳಲ್ಲಿ ಪೌಷ್ಟಿಕ ಹಾಗೂ ಗುಣಮಟ್ಟದ ಆಹಾರ ವಿತರಣೆಯಲ್ಲಿ ಲೋಪದೋಷಗಳಾಗದಂತೆ ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರದಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಸಮಿತಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಸರ್ಕಾರದಿಂದ ಅನುಷ್ಟಾನಗೊಂಡ ವಿವಿಧ ಯೋಜನೆಗಳ ಸೌಲಭ್ಯ ಮಹಿಳೆಯರಿಗೆ ಮತ್ತು ಮಕ್ಕಳಿಗೆ ತಲುಪಿಸುವಲ್ಲಿ ವಿನಾಕಾರಣ ವಿಳಂಬವಾಗಬಾರದು ಎಂದರು.
ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಹಾಗೂ ಪೌಷ್ಟಿಕ ಆಹಾರ ಪೂರೈಕೆ, ಶುದ್ಧ ಕುಡಿಯುವ ನೀರು ಹಾಗೂ ಮೂಲಭೂತ ಸೌಕರ್ಯಗಳು ಇರುವಂತೆ ನೋಡಿಕೊಳ್ಳಬೇಕು. ಒಟ್ಟಾರೆಯಾಗಿ ಅಂಗನವಾಡಿ ಕೇಂದ್ರಗಳಲ್ಲಿನ ಮಕ್ಕಳ ಸಮಗ್ರ ಬೆಳವಣಿಗೆಗೆ ಸಮರ್ಪಕ ವಾತಾವರಣ ಕಲ್ಪಿಸುವುದು ಮುಖ್ಯ ಗುರಿಯಾಗಿದ್ದು ಈ ನಿಟ್ಟಿನಲ್ಲಿ ಸಂಬಂಧಿತ ಅಧಿಕಾರಿಗಳು ಹೆಚ್ಚಿನ ಗಮನ ಹರಿಸಬೇಕು. ಇಲ್ಲದಿದ್ದಲ್ಲಿ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಅಧಿಕಾರಿಗಳಿಗೆ ಎಚ್ಚರಿಸಿದರು.
ಸ್ವಂತ ಕಟ್ಟಡ ಇಲ್ಲದ ಅಂಗನವಾಡಿ ಕೇಂದ್ರಗಳಿಗೆ ಸ್ಥಳೀಯ ಸಂಸ್ಥೆಗಳ ಆಡಳಿತ ಸಂಸ್ಥೆಗಳೊಂದಿಗೆ ಸಮನ್ವಯ ಸಾಧಿಸಿ ನಿವೇಶನ ಆಯ್ಕೆಗೆ ಕ್ರಮ ವಹಿಸಬೇಕು. ಬಾಲ್ಯ ವಿವಾಹ ಪ್ರಕರಣಗಳು ಕಂಡು ಬಂದಲ್ಲಿ ಪ್ರಕರಣ ದಾಖಲಿಸಲು ವಿಳಂಬ ಮಾಡಬಾರದು. ಬಾಕಿ ಉಳಿದಿರುವ ದೌರ್ಜನ್ಯ ಪ್ರಕರಣಗಳ ಇತ್ಯರ್ಥಕ್ಕೆ ಶೀಘ್ರ ಕ್ರಮ ವಹಿಸಬೇಕೆಂದು ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಸೂಚಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪಿ.ವೈ.ಶೆಟ್ಟೆಪ್ಪನವರ ಅವರು ಮಾತನಾಡಿ ಮಹಿಳೆಯ ಮತ್ತು ಮಕ್ಕಳ ದೌರ್ಜನ್ಯ ತಡೆ ಕಾಯ್ದೆಯಡಿ ತಾಲೂಕಾ ಮಟ್ಟದಲ್ಲಿ ಹಾಗೂ ಗ್ರಾಮ ಮಟ್ಟದಲ್ಲಿ ಸಮಿತಿಗಳನ್ನು ರಚಿಸಲಾಗಿದ್ದು ತಾಲೂಕಾ ಮಟ್ಟದಲ್ಲಿ 5 ಸಭೆಗಳನ್ನು ಹಾಗೂ ಗ್ರಾಮ ಪಂಚಾಯತ್ ಮಟ್ಟದಲ್ಲಿ 104 ಸಭೆಗಳನ್ನು ಆಯೋಜಿಸಲಾಗಿದೆ ಎಂದು ಮಾಹಿತಿ ಒದಗಿಸಿದರು.
ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ ಯೋಜನೆಯಡಿ ಜುಲೈ ರಿಂದ ಸೆಪ್ಟೆಂಬರ್ 23 ರವರೆಗೆ ಒಟ್ಟು 91 ಪ್ರಕರಣಗಳು ದಾಖಲಾಗಿದ್ದು ಆ ಪೈಕಿ 27 ಪ್ರಕರಣಗಳು ಇತ್ಯರ್ಥಗೊಂಡಿವೆ. 26 ಪ್ರಕರಣಗಳು ನ್ಯಾಯಾಲಯದ ವಿಚಾರಣಾ ಹಂತದಲ್ಲಿವೆ. ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯಡಿ ಗ್ರಾಮ ಪಂಚಾಯತ್ ವಾರು ಲಿಂಗಾನುಪಾತ ಮಾಹಿತಿಯನ್ನು ಪಡೆಯಲಾಗುತ್ತಿದ್ದು ಕಡಿಮೆ ಲಿಂಗಾನುಪಾತ ಇರುವ ಗ್ರಾಮ ಪಂಚಾಯತ್‍ಗಳಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಜಿಲ್ಲೆಯಲ್ಲಿ 5 ಸಾಂತ್ವನ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ ಎಂದು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ,s ಸ್ವಾಧಾರ ಯೋಜನೆ, ದಮನಿತ ಮಹಿಳೆಯರಿಗೆ ವಿವಿಧ ತರಬೇತಿ, ಗೃಹ ಲಕ್ಷ್ಮೀ ಯೋಜನೆ ಸೇರಿದಂತೆ ವಿವಿಧ ಯೋಜನೆಗಳ ಪ್ರಗತಿ ಕುರಿತು ಚರ್ಚಿಸಲಾಯಿತು.
ಸಭೆಯಲ್ಲಿ ಜಿಲ್ಲಾ ಕಾನೂನು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಗುರುಪ್ರಸಾದ, ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ, ಆರ್.ಸಿ.ಎಚ್. ಅಧಿಕಾರಿ ಡಾ. ಬಿ.ಎಂ.ಗೊಜನೂರ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಮಕ್ಕಳ ರಕ್ಷಣಾಧಿಕಾರಿ ರಾಧಾ ಮಣ್ಣೂರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು