

ಶಿವಮೊಗ್ಗ: ಬಜೆಟ್‌ನಲ್ಲಿ ಪ್ರಸ್ತಾಪಿಸಿದಂತೆ ಶಿವಮೊಗ್ಗ ಹೊರವಲಯ ಸೋಗಾನೆಯಲ್ಲಿ 98 ಎಕರೆ ಪ್ರದೇಶದಲ್ಲಿ ಫುಡ್‌ಪಾರ್ಕ್ ಹಾಗೂ ಆನವಟ್ಟಿಯಲ್ಲಿ ಬೃಹತ್ ಪ್ರಮಾಣದ ಶೀತಲೀಕರಣ ಘಟಕ ಆರಂಭಿಸಲು ಕ್ರಮ ವಹಿಸಲಾಗಿದೆ. ಚಂದ್ರಗುತ್ತಿಯನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.
ನಗರದ ಡಿಎಆರ್ ಮೈದಾನದಲ್ಲಿ ಜಿಲ್ಲಾಡಳಿತದಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಜಿಲ್ಲೆಯ ಜನರ ಆರೋಗ್ಯದ ದೃಷ್ಟಿಯಿಂದ ನಗರದಲ್ಲಿ ಕಿದ್ವಾಯಿ ಮಾದರಿ ಕ್ಯಾನ್ಸರ್ ಆಸ್ಪತ್ರೆ ಕಟ್ಟಡ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ನವಜಾತ ಶಿಶುಗಳ ಆರೈಕೆಗಾಗಿ ಮಾನವ ತಾಯಿಹಾಲು ಸಂಸ್ಕರಣೆ ಹಾಗೂ ವಿತರಣಾ ಕೇಂದ್ರವನ್ನು ಈಗಾಗಲೇ ಶಿವಮೊಗ್ಗದಲ್ಲಿ ಆರಂಭಿಸಲಾಗಿದೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ಮಿದುಳು ರೋಗಗಳ ತಪಾಸಣೆ ಮತ್ತು ಚಿಕಿತ್ಸೆಗೆ ಸಂಬಂಧಿಸಿದಂತೆ ಪ್ರತ್ಯೇಕ ಘಟಕ ಜನವರಿಯಿಂದ ಕಾರ್ಯ ಆರಂಭಗೊಂಡಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ 41 ಕೆಪಿಎಸ್ ಶಾಲೆಗಳನ್ನು ಆರಂಭಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು. ಹಾನಿಗೊಳಗಾದ 294 ಶಾಲೆಗಳು, ಅಂಗನವಾಡಿಗಳು, ಇತರೆ ಕಟ್ಟಡಗಳು, ರಸ್ತೆ, ಸೇತುವೆಗಳ ದುರಸ್ತಿಗೂ ಅಗತ್ಯ ಕ್ರಮ ವಹಿಸಲಾಗುತ್ತಿದೆ. 2023-24ನೇ ಸಾಲಿನಿಂದ ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಮತ್ತು ಶುದ್ಧ ಕುಡಿಯುವ ನೀರಿನ ಸೌಲಭ್ಯ ಒದಗಿಸಲಾಗುತ್ತಿದೆ ಎಂದರು.