ಅ. 21 ರಿಂದ ಕಾಲುಬಾಯಿ ಲಸಿಕೆ ಅಭಿಯಾನ

udp-16-lasike
Published on

ಉಡುಪಿ: ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಆರನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮ ಜಿಲ್ಲೆಯಾದ್ಯಂತ ಅಕ್ಟೋಬರ್​ 21 ರಿಂದ ನವೆಂಬರ್​ 20 ರ ವರೆಗೆ ಹಮ್ಮಿಕೊಳ್ಳಲಾಗುತ್ತಿದ್ದು, ಎಲ್ಲಾ ಜಾನುವಾರುಗಳಿಗೆ ಲಸಿಕೆ ಹಾಕುವ ಮೂಲಕ ಪ್ರತಿಶತ@ ನೂರರಷ್ಟು ಪ್ರಗತಿ ಸಾಧಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ತಿಳಿಸಿದರು.

ಬುಧವಾರ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಾನುವಾರು ಕಾಲುಬಾಯಿ ಜ್ವರ ರೋಗ ಲಸಿಕಾ ಕಾರ್ಯಕ್ರಮದ ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಾನುವಾರುಗಳಲ್ಲಿ ಕಂಡುಬರುವ ಕಾಲುಬಾಯಿ ಜ್ವರ ರೋಗ ನಿಯಂತ್ರಣಕ್ಕೆ ಕಾಲುಬಾಯಿ ಲಸಿಕಾ ಕಾರ್ಯಕ್ರಮ ನಡೆಯುತ್ತಿದ್ದು, ಯಾವುದೇ ಜಾನುವಾರುಗಳು ಲಸಿಕೆಯಿಂದ ಬಿಟ್ಟುಹೋಗದಂತೆ ನೋಡಿಕೊಳ್ಳಬೇಕು ಎಂದರು. ಕಾಲುಬಾಯಿ ಲಸಿಕಾ ಕಾರ್ಯಕ್ರಮದ ಬಗ್ಗೆ ನಗರ, ಸ್ಥಳಿಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್​ ವ್ಯಾಪ್ತಿಯ ಕಸ ವಿಲೇವಾರಿ ವಾಹನಗಳಲ್ಲಿ ಪ್ರಚಾರ ಕೈಗೊಂಡು, ಸಾರ್ವಜನಿಕರಿಗೆ ಲಸಿಕಾ ಕಾರ್ಯಕ್ರಮದ ಕುರಿತು ಅರಿವು ಮೂಡಿಸಬೇಕು ಎಂದರು.

ಐದನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮದಲ್ಲಿ ಜಿಲ್ಲೆಯ 2,15,401 ಜಾನುವಾರುಗಳ ಗುರಿ ನಿಗಧಿಪಡಿಸಿ, 2,08,558 ಜಾನುವಾರುಗಳಿಗೆ ಲಸಿಕೆ ಹಾಕಿಸಿ, ಶೇ. 96.82 ರಷ್ಟು ಪ್ರಗತಿ ಸಾಧಿಸಿದ್ದು, ಆರನೇ ಸುತ್ತಿನಲ್ಲಿಯೂ ಸಹ ಹೆಚ್ಚಿನ ಸಂಖ್ಯೆಯ ಜಾನುವಾರುಗಳಿಗೆ ಲಸಿಕೆ ಹಾಕಿಸುವ ಮೂಲಕ ಅವುಗಳ ಆರೋಗ್ಯ ರಕ್ಷಣೆಗೆ ಮುಂದಾಗಬೇಕು ಎಂದರು.

ಈ ಸಂದರ್ಭದಲ್ಲಿ ಕಾಲುಬಾಯಿ ರೋಗದ ಕುರಿತ ಮಾಹಿತಿಯುಳ್ಳ ಭಿತ್ತಿಪತ್ರವನ್ನು ಬಿಡುಗಡೆ ಮಾಡಲಾಯಿತು. ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತಿಕ್​ ಬಾಯಲ್​, ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ.ಎಂ.ಸಿ.ರೆಡ್ಡಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ, ಮಹಿಳಾ ಮತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ. ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net