ಪಾದಚಾರಿ ಮಾರ್ಗ ಒತ್ತುವರಿ ತೆರವು

08-GPT-1
Published on

ಗುಂಡ್ಲುಪೇಟೆ: ಪುರಸಭೆ ಅಧಿಕಾರಿಗಳು ಅಂಗಡಿ ಬೀದಿಯಲ್ಲಿ ಗುರುವಾರ ಪಾದಚಾರಿ ಮಾರ್ಗವನ್ನು ಒತ್ತುವರಿ ಮಾಡಿಕೊಂಡಿದ್ದ ಅಂಗಡಿಗಳ ಸಾಮಗ್ರಿಗಳನ್ನು ತೆರವುಗೊಳಿಸಿದರು.


ಪಟ್ಟಣದಲ್ಲಿ ಇತ್ತೀಚೆಗೆ ವಾಹನ ದಟ್ಟಣೆ ಹೆಚ್ಚಾಗುತ್ತಿದ್ದು, ಅಪಘಾತಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪುರಸಭೆ ಅಧಿಕಾರಿಗಳು ಪೊಲೀಸರ ನೆರವಿನಿಂದ ತೆರವು ಕಾರ್ಯಾಚರಣೆ ಆರಂಭಿಸಿದರು. ಪಟ್ಟಣದ ಪ್ರಮುಖ ವಾಣಿಜ್ಯ ರಸ್ತೆಯಾದ ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯಲ್ಲಿ ಪಾದಚಾರಿ ಮಾರ್ಗ ಅತಿಕ್ರಮಣದಿಂದ ರಸ್ತೆ ತೀರಾ ಇಕ್ಕಟ್ಟಾಗುತ್ತಿತ್ತು. ವ್ಯಾಪಾರಿಗಳು ತಮ್ಮ ಅಂಗಡಿಗಳಿಗಿಂತಲೂ ಹೆಚ್ಚಿನ ಪ್ರದೇಶವನ್ನು ಅತಿಕ್ರಮಿಸಿಕೊಂಡು ತಮ್ಮ ಉತ್ಪನ್ನಗಳನ್ನು ಇಟ್ಟುಕೊಳ್ಳುತ್ತಿದ್ದರು. ಇದರಿಂದ ಇಕ್ಕಟ್ಟಾದ ರಸ್ತೆಯಲ್ಲಿ ಸಂಚಾರ ದಟ್ಟಣೆ ಆಗುತ್ತಿತ್ತು. ಅಲ್ಲದೆ ಅಪಘಾತಗಳೂ ಸಂಭವಿಸುತ್ತಿದ್ದವು.


ಈ ಹಿನ್ನೆಲೆಯಲ್ಲಿ ಗುರುವಾರ ಪುರಸಭೆ ಮುಖ್ಯಾಧಿಕಾರಿ ವಸಂತ ಕುಮಾರಿ, ಪಟ್ಟಣ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಸಾಹೇಬಗೌಡ ನೇತೃತ್ವದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ನೆಹರೂ ಪಾರ್ಕ್‌ನಿಂದ ಚಾಮರಾಜನಗರ ರಸ್ತೆಯ ಕೊತ್ವಾಲ್ ಚಾವಡಿವರೆಗೆ ಪಾದಚಾರಿ ಮಾರ್ಗ ತೆರವುಗೊಳಿಸಿದರು. ಶುಕ್ರವಾರವೂ ಪುರಸಭೆಯಿಂದ ಎಲ್ಲ ರಸ್ತೆಗಳಲ್ಲಿಯೂ ಕಾರ್ಯಾಚರಣೆ ಮುಂದುವರಿಸಲಾಗುವುದು. ಪಾದಚಾರಿ ಮಾರ್ಗವನ್ನು ಅತಿಕ್ರಮಿಸಿರುವ ಪದಾರ್ಥಗಳನ್ನು ವಶಕ್ಕೆ ಪಡೆದು ಅಂಗಡಿ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ವಸಂತ ಕುಮಾರಿ ಎಚ್ಚರಿಕೆ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net