

ಬೆಳಗಾವಿ: ಸದೃಢ ಆರೋಗ್ಯ ಹೊಂದಿದವರು ರಕ್ತದಾನ ಮಾಡುವ ಮೂಲಕ ಇನ್ನೊಬ್ಬರ ಜೀವ ಉಳಿಸಲು ಮುಂದಾಗಬೇಕು. ಈ ನಿಟ್ಟಿನಲ್ಲಿ ಸಾಮಾಜಿಕ ಜಾಗೃತಿ
ಮೂಡಿಸುವ ಅಗತ್ಯತೆ ಇದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ.ವಿ. ರಾಜೇಂದ್ರ ಹೇಳಿದ್ದಾರೆ.
ನಗರದ ತಾಲೂಕು ಆರೋಗ್ಯಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಜ್ಯ ಏಡ್ಸ್ ನಿರೋಧಕ ಮತ್ತು ನಿಯಂತ್ರಣ ಘಟಕ, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಬಿಮ್ಸ್, ರೆಡ್‌ಕ್ರಾಸ್ ಸಂಸ್ಥೆ, ವಾರ್ತಾ ಮತ್ತು ಪ್ರಚಾರ ಇಲಾಖೆ ಸಹಯೋಗದಲ್ಲಿ ಭಾನುವಾರ ಆಯೋಜಿಸಿದ್ದ ವಿಶ್ವ ರಕ್ತದಾನಿಗಳ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ರಕ್ತದಾನ ಮಾಡುವುದರಿಂದ ನಮ್ಮ ಆರೋಗ್ಯವೂ ಸುಧಾರಿಸುತ್ತದೆ. ತುರ್ತು ವೈದ್ಯಕೀಯ ಚಿಕಿತ್ಸೆ ಸಂದರ್ಭ ರೋಗಿಗೂ ಅನುಕೂಲವಾಗುತ್ತದೆ. ಹಾಗಾಗಿ, ಪ್ರತಿವರ್ಷ ಕನಿಷ್ಠ ಒಂದು ಬಾರಿಯಾದರೂ ರಕ್ತದಾನ ಮಾಡುವ ಹವ್ಯಾಸ ಬೆಳೆಸಿಕೊಳ್ಳಬೇಕು. ಆರೋಗ್ಯ ಇಲಾಖೆ ಈ ವಿಚಾರವಾಗಿ ಸಾರ್ವಜನಿಕರಲ್ಲಿ ಜಾಗೃತಿ
ಮೂಡಿಸಬೇಕು ಎಂದು ಸಲಹೆ ನೀಡಿದರು.
ಹಲವು ಬಾರಿ ರಕ್ತದಾನ ಮಾಡಿದ ತಾಲೂಕು ಆರೋಗ್ಯಾಧಿಕಾರಿ ಡಾ. ಸಂಜಯ ಡುಮ್ಮಗೋಳ, ಖಾನಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಲಕ್ಷ್ಮಣರಾವ್ ಯಕ್ಕುಂಡಿ, ಮಹೇಶ ಢವಳೆ, ಕೆ.ಶೀತಲ, ಅರುಣ ಪಾಟೀಲ ಅವರನ್ನು ಸನ್ಮಾನಿಸಲಾಯಿತು. ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶಶಿಕಾಂತ ಮುನ್ಯಾಳ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ. ಚಾಂದನಿ ದೇವಡಿ, ಡಾ. ಬಿ.ಎನ್. ತುಕ್ಕಾರ, ಡಾ. ಶ್ರೀದೇವಿ ಬೊಬಾಟೆ ಉಪಸ್ಥಿತರಿದ್ದರು.
ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಅನಿಲ ಕೊರಬು ಪ್ರಾಸ್ತಾವಿಕವಾಗಿ ಮಾತನಾಡಿದರು. ಸಿ.ಜಿ. ಅಗ್ನಿಹೋತ್ರಿ ನಿರೂಪಿಸಿದರು. ಶಿಬಿರದಲ್ಲಿ ಡಾ. ಕೆ.ವಿ. ರಾಜೇಂದ್ರ ಸೇರಿ 26 ಜನರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದರು.