

ಅಳವಂಡಿ: ಸಮಾಜದಲ್ಲಿ ಹೆಣ್ಣು ಮಕ್ಕಳು ಎದುರಿಸುತ್ತಿರುವ ಅಸಮಾನತೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಆಗಬೇಕು. ಸರ್ವರು ಒಂದೇ ಎಂಬ ಭಾವನೆ ಮೂಡಬೇಕು ಎಂದು ಎಸಿಡಿಪಿಒ ರೂಪಾ ಗಂಧದ ತಿಳಿಸಿದರು.
ಗ್ರಾಮದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಶ್ರೀ ಬಾಂಧವ್ಯ ಸಂಜೀವಿನಿ ಗ್ರಾಪಂ ಮಟ್ಟದ ಮಹಿಳಾ ಒಕ್ಕೂಟದ ವತಿಯಿಂದ ಆಯೋಜಿಸಿದ್ದ ಅಂತಾರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ಬೇಟಿ ಬಚಾವೋ, ಬೇಟಿ ಪಢಾವೋ ಕಾರ್ಯಕ್ರಮ ಉದ್ದೇಶಿಸಿ ಶನಿವಾರ ಮಾತನಾಡಿದರು.
ಹೆಣ್ಣು ಮಕ್ಕಳು ಬದಲಾಗುತ್ತಿರುವ ಜಗತ್ತಿನ ವೇಗಕ್ಕೆ ತಕ್ಕಂತೆ ಮಾನಸಿಕವಾಗಿ ಬದಲಾಗಿ ಮುನ್ನಡೆಯಬೇಕು. ಹೆಣ್ಣು ಮಕ್ಕಳಿಗೆ ಶಿಕ್ಷಣ ಅತಿ ಅವಶ್ಯ. ಸ್ತ್ರೀಶಿಕ್ಷಣ, ಆರೋಗ್ಯ, ಪೋಷಣೆಯ ಬಗ್ಗೆ ಜಾಗೃತಿ ಮೂಡಿಸಬೇಕು. ಜೊತೆಗೆ ಹೆಣ್ಣುಮಕ್ಕಳಿಗೆ ಇರುವ ಸರ್ಕಾರದ ಯೋಜನೆಗಳ ಸದ್ಭಳಕೆ ಮಾಡಿಕೊಳ್ಳಬೇಕು ಎಂದರು.