ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನ

forest
Published on

ಮಡಿಕೇರಿ:

ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವುದು ಇಂದಿನ ಅಗತ್ಯ ಎಂದು ಏರ್ ಮಾರ್ಷಲ್ (ನಿವೃತ್ತ) ಕೆ.ಸಿ.ಕಾರ್ಯಪ್ಪ ಅಭಿಪ್ರಾಯಪಟ್ಟರು. ನಗರದ ಅರಣ್ಯ ಭವನದಲ್ಲಿ ಸೋಮವಾರ ನಡೆದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಅರಣ್ಯ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುವುದು ಸವಾಲಿನ ಕೆಲಸ. ಅರಣ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುವವರಿಗೆ ಆರೋಗ್ಯ ಸೇವೆ ಸೇರಿದಂತೆ ಕಲ್ಯಾಣ ಸೇವೆಗಳು ತಲುಪಬೇಕು. ಅರಣ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವುದು ಕಠಿಣವಾಗಿದ್ದು, ಎಲ್ಲಾ ಹಂತದ ಸಿಬ್ಬಂದಿ ತಮ್ಮ ಹಾಗೂ ಸಾರ್ವಜನಿಕರ ಸುರಕ್ಷತೆ ಕಡೆಗೂ ಗಮನಹರಿಸಬೇಕಿದೆ ಎಂದರು.

ಜಿಲ್ಲಾ ಪಂಚಾಯಿತಿ ಸಿಇಒ ವರ್ಣಿತ್ ನೇಗಿ ಮಾತನಾಡಿ ಅರಣ್ಯವಿದ್ದಲ್ಲಿ ಉತ್ತಮ ಪರಿಸರ ಉಳಿಯಲು ಸಾಧ್ಯ. ಒಳ್ಳೆಯ ಪರಿಸರ ಇದ್ದರೆ ಮಳೆ-ಬೆಳೆ ಕಾಣಬಹುದು. ಅರಣ್ಯ ಇಲಾಖೆಯ ಸಿಬ್ಬಂದಿ ದೇಶದ ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗಾಗಿ ಮಾಡಿದ ತ್ಯಾಗ ಮತ್ತು ಬಲಿದಾನಗಳ ಸ್ಮರಣೆಗಾಗಿ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನವನ್ನು ದೇಶಾದ್ಯಂತ ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಅರಣ್ಯ ಹುತಾತ್ಮರ ದಿನದ ಬಗ್ಗೆ ಮಾಹಿತಿ ನೀಡಿದ ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎ.ಟಿ. ಪೂವಯ್ಯ, ಜೋಧುಪುರ್‌ನ ಮಹಾರಾಜ ಅಭಯ್‌ಸಿಂಗ್‌ನ ಸೈನಿಕರು ಕೇಜರ್ಲಿ ಪ್ರಾಂತ್ಯದಲ್ಲಿ ಬೆಳೆದಿದ್ದ ಮರಗಳನ್ನು ರಾಜನ ಹೊಸ ಅರಮನೆಗೆ ಅವಶ್ಯವಿದ್ದ ಕಾರಣ ಕಡಿಯಲು ಮುಂದಾದಾಗ ವಿರೋಧಿಸಿದ ಬಿಷ್ಣೋಯಿ ಸಮುದಾಯದ ಒಟ್ಟು ೩೬೩ ಸಂಖ್ಯೆಯ ಪುರುಷ, ಮಹಿಳೆ ಮತ್ತು ಮಕ್ಕಳನ್ನು ೧೭೩೦ ರ ಸೆಪ್ಟೆಂಬರ್ ೧೧ ರಂದು ಕೊಲ್ಲಲಾಯಿತು. ಮರಗಳ ಸಂರಕ್ಷಣೆಗಾಗಿ ಬಲಿದಾನ ಹೊಂದಿದ ಬಿಷ್ಣೋಯಿಗಳ ತ್ಯಾಗ ಮತ್ತು ಬಲಿದಾನವನ್ನು ಸ್ಮರಿಸಲು ಭಾರತ ಸರ್ಕಾರ ಈ ದಿನವನ್ನು ’ರಾಷ್ಟ್ರೀಯ ಅರಣ್ಯ ಹುತಾತ್ಮ ದಿನ’ ಎಂದು ಘೋಷಿಸಿದೆ.

ಅರಣ್ಯ ಸಂಪತ್ತು ಮತ್ತು ವನ್ಯಜೀವಿಗಳ ಸಂರಕ್ಷಣೆಗಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿ ಸರ್ವೋಚ್ಛ ತ್ಯಾಗವನ್ನು ಮಾಡಿ ಸಮರ್ಪಣಾ ಮನೋಭಾವದ ಹಲವಾರು ಅರಣ್ಯ ಅಧಿಕಾರಿಗಳ ಹೆಸರುಗಳು ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಇಂದಿಗೂ ಹಚ್ಚ ಹಸಿರಾಗಿದೆ. ಉಪ ಅರಣ್ಯ ಸಂರಕ್ಷಣಾಧಿಕಾರಿ ಪಿ.ಶ್ರೀನಿವಾಸ್ ಇವರಲ್ಲಿ ಒಬ್ಬರು ಎಂದರು.

ಇದಕ್ಕೂ ಮೊದಲು ನಾಡಿನ ಅರಣ್ಯ ಮತ್ತು ವನ್ಯಜೀವಿ ಸಂಪತ್ತು ಸಂರಕ್ಷಿಸುವ ಸಂದರ್ಭದಲ್ಲಿ ಪ್ರಾಣತ್ಯಾಗ ಮಾಡಿದ ಅರಣ್ಯ ಇಲಾಖೆಯ ಹುತಾತ್ಮರಿಗೆ ಶ್ರದ್ದಾಂಜಲಿ ಸಲ್ಲಿಸಲಾಯಿತು. ಅರಣ್ಯ ಇಲಾಖೆಯ ಸಿದ್ದಲಿಂಗಪ್ಪ ಪರೇಡ್ ನಡೆಸಿಕೊಟ್ಟರು. ಪೊಲೀಸ್ ಇಲಾಖೆಯ ಸಿದ್ದೇಶ್ ಮತ್ತು ತಂಡದವರು ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆಯಲ್ಲಿ ಪಾಲ್ಗೊಂಡು ಗೌರವ ಸಲ್ಲಿಸಿದರು.

ಕೊಡಗು ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್ ಕುಮಾರ್ ತ್ರಿಪಾಠಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವರಾಮ್ ಬಾಬು, ವಿರಾಜಪೇಟೆ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಬಿ.ಎಂ. ಶರಣಬಸಪ್ಪ, ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ಎಸ್.ಚಂಗಪ್ಪ ಇತರರು ಅರಣ್ಯ ಹುತಾತ್ಮ ಸ್ಮಾರಕಕ್ಕೆ ಹೂಗುಚ್ಛ ಸಮರ್ಪಿಸಿ ಗೌರವ ಸಲ್ಲಿಸಿದರು. ವಲಯ ಅರಣ್ಯ ಸಂರಕ್ಷಣಾಧಿಕಾರಿ ಗಾನಶ್ರೀ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗೋಪಾಲ್ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net