

ಹಾಸನ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲು ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭಿನ್ನಾಭಿಪ್ರಾಯ ಮರೆತು ಎಲ್ಲರೂ ಒಂದಾಗಬೇಕು ಎಂದು ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷರೂ ಆದ ಶಾಸಕ ಕೆ.ಎಂ ಶಿವಲಿಂಗೇಗೌಡ ಮನವಿ ಮಾಡಿದರು.
ಅರಕಲಗೂಡು ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ರಾತ್ರಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಅರಕಲಗೂಡು ಕಾಂಗ್ರೆಸ್ ಪಕ್ಷದಲ್ಲಿ ಗುಂಪುಗಾರಿಕೆ ಹುಟ್ಟಿಗೆ ಪಕ್ಷದ ರಾಜ್ಯ ಮಟ್ಟದ ನಾಯಕರೇ ಕಾರಣರಾಗಿದ್ದಾರೆ. ಮುಂದೆ ಪಕ್ಷದಲ್ಲಿ ಗುಂಪುಗಾರಿಕೆ ಬೇಡ. ಸದ್ಯದಲ್ಲೇ ಸಿಹಿ ಸುದ್ದಿ ಸಿಗಲಿದೆ. ಕಾರ್ಯಕರ್ತರು ಭಿನ್ನಾಭಿಪ್ರಾಯ ಮರೆತು ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕು ಎಂದರು.
ಗೊಂದಲ: ಸಿದ್ದರಾಮಯ್ಯ ಕಪ್ ಕ್ರಿಕೆಟ್ ಪಂದ್ಯಾವಳಿ ಚಾಲನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮುಖಂಡ ಎಚ್.ಪಿ.ಶ್ರೀಧರ್‌ಗೌಡ ಅವರ ನಡೆ ಖಂಡಿಸಿ ಸಭೆಯಲ್ಲಿ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದರು.
ಇದಕ್ಕೂ ಮುನ್ನ ಪಟ್ಟಣದ ಸಂಗೊಳ್ಳಿರಾಯಣ್ಣ ಕ್ರೀಡಾಂಗಣದಲ್ಲಿ ನಡೆದ ಸಿದ್ದರಾಮಯ್ಯ ಕಪ್ ಕ್ರಿಕೆಟ್ ಪಂದ್ಯಾವಳಿಗೆ ಶಿವಲಿಂಗೇಗೌಡ ಚಾಲನೆ ನೀಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಕುಮಾರ್, ಮುಖಂಡರಾದ ಎಂ.ಎ. ಗೋಪಾಲಸ್ವಾಮಿ, ಸಿ.ಡಿ. ದಿವಾಕರ್‌ಗೌಡ, ಎಚ್.ಪಿ.ಶ್ರೀಧರ್‌ಗೌಡ ಇತರರಿದ್ದರು.