ನಂಜನಗೂಡಿನಲ್ಲಿ ಕಬ್ಬು ಬೆಳೆಗಾರರಿಂದ ಪ್ರತಿಭಟನೆ

15NGD2
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಂಜನಗೂಡಿನ ಬಸವೇಶ್ವರ ವೃತ್ತದಲ್ಲಿ ಕರ್ನಾಟಕ ಕಬ್ಬು ಬೆಳೆಗಾರರ ಸಂಘಟನೆಯಿಂದ ಹೆದ್ದಾರಿ ಸಂಚಾರ ತಡೆದು ಪ್ರತಿಭಟನೆ ನಡೆಸಲಾಯಿತು.
Published on

ನಂಜನಗೂಡು: ಬಿರುಗಾಳಿಯಿಂದ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯಲ್ಲಿ 2 ಸಾವಿರ ಎಕರೆಗೂ ಹೆಚ್ಚು ಪ್ರದೇಶದಲ್ಲಿ ಬಾಳೆ ಬೆಳೆ ನಾಶವಾಗಿದ್ದು, ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಘೋಷಿಸಿ ನೆರವು ನೀಡುವಂತೆ ಒತ್ತಾಯಿಸಿ ಕರ್ನಾಟಕ ಕಬ್ಬು ಬೆಳೆಗಾರರ ಸಂಘಟನೆಯಿಂದ ಬುಧವಾರ ನಂಜನಗೂಡಿನಲ್ಲಿ ಪ್ರತಿಭಟನೆ ನಡೆಸಲಾಯಿತು.

ನಗರದ ದೇವೀರಮ್ಮನಹಳ್ಳಿ ಬಸವೇಶ್ವರ ವೃತ್ತದ ಬಳಿ ಸಂಘಟಿತರಾದ ರೈತರು, ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿ ಸಂಚಾರ ಬಂದ್ ಮಾಡಿ, ಘೋಷಣೆಗಳನ್ನು ಕೂಗಿದರು.

ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಮಾತನಾಡಿ, ಒಂದು ವಾರದಲ್ಲಿ ಮೈಸೂರು, ಚಾಮರಾಜನಗರ ಜಿಲ್ಲಾ ವ್ಯಾಪ್ತಿಯಲ್ಲಿ ಬಿರುಗಾಳಿ-ಮಳೆಯಿಂದ ಸುಮಾರು 2 ಸಾವಿರ ಎಕರೆ ಪ್ರದೇಶದಲ್ಲಿ ಬಾಳೆ ಬೆಳೆ ಸಂಪೂರ್ಣ ನಾಶವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಚುನಾವಣೆ ನೀತಿ ಸಂಹಿತೆಯ ನೆಪ ಹೇಳಿಕೊಂಡು ಅಧಿಕಾರಿಗಳು ಗ್ರಾಮೀಣ ಭಾಗದ ರೈತರ ಸಮಸ್ಯೆ ಆಲಿಸುತ್ತಿಲ್ಲ. ಇನ್ನು ಜನಪ್ರತಿನಿಧಿಗಳು ಜಿಲ್ಲೆಯಲ್ಲಿ ರೈತರ ಪರವಾಗಿ ಮಾತನಾಡುತ್ತಿಲ್ಲ. ಇದರಿಂದಾಗಿ ರೈತರು ಆತಂಕಕ್ಕೊಳಗಾಗಿದ್ದಾರೆ. ತಕ್ಷಣ ರೈತರ ಜಮೀನಿನಲ್ಲಿ ನಷ್ಟವಾಗಿರುವ ಬೆಳೆಯ ಸಮೀಕ್ಷೆ ನಡೆಸಬೇಕು ಹಾಗೂ ಜಿಲ್ಲಾಡಳಿತ ವರದಿ ತಯಾರಿಸಿ ವಿಶೇಷ ಪ್ಯಾಕೇಜ್‌ಗೆ ಸರ್ಕಾರಕ್ಕೆ ವರದಿ ಸಲ್ಲಿಸಬೇಕು. ಜಿಲ್ಲಾ ಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಂಬಂಧಪಟ್ಟ ಸಚಿವರು, ಮುಖ್ಯಮಂತ್ರಿಗಳ ಜತೆ ಚರ್ಚಿಸಿ ರೈತರಿಗೆ ನ್ಯಾಯ ಕೊಡಿಸಬೇಕು. ಬೆಳೆ ಹಾನಿಯಾದ ರೈತರಿಗೆ ಪ್ರತಿ ಎಕರೆಗೆ ಸುಮಾರು ಲಕ್ಷ ರೂ. ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಕಬ್ಬು ಬೆಳೆಗಾರರ ಸಂಘದ ಉಪಾಧ್ಯಕ್ಷ ಕೆರೆಹುಂಡಿ ರಾಜಣ್ಣ, ಹನುಮಯ್ಯ, ಜಿಲ್ಲಾಧ್ಯಕ್ಷ ಹಾಡ್ಯ ರವಿ, ನಾಗರಾಜ್, ಬನ್ನಹಳ್ಳಿಹುಂಡಿ ರಾಜೇಂದ್ರ, ಕಸುವಿನಹಳ್ಳಿ ಮಂಜೇಶ್, ಮುದ್ದಳ್ಳಿ ಚಿಕ್ಕಸ್ವಾಮಿ, ಕೋಣನೂರು ವಿಶ್ವನಾಥ್, ದೇವನೂರು ನಾಗೇಂದ್ರ, ತಾಲೂಕು ಅಧ್ಯಕ್ಷ ಮಹೇಶ್, ಮಹದೇವಸ್ವಾಮಿ, ಅಂಡುವಿನಹಳ್ಳಿ ರವಿ, ಮಹೇಶ್, ಸಿದ್ದಲಿಂಗ, ಶ್ರೀಕಂಠಮೂರ್ತಿ, ಬಸವರಾಜ್, ಪ್ರಧಾನ ಕಾರ್ಯದರ್ಶಿ ಕುಮಾರ್, ಸಂಚಾಲಕ ಮಹದೇವಸ್ವಾಮಿ ಸಂಘಟನಾ ಕಾರ್ಯದರ್ಶಿ ಶಿವಮೂರ್ತಿ, ಖಚಾಂಚಿ ಮಹದೇವಸ್ವಾಮಿ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net