

ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಹಮ್ಮಿಕೊಂಡಿದ್ದ ನಾಗರಿಕ ಸನ್ಮಾನ ಹಾಗೂ ಮತದಾರರಿಗೆ ಕೃತಜ್ಞತಾ ಸಮಾವೇಶವನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ. ಆದರೆ ಜೂ.15ರಂದು ಮಧ್ಯಾಹ್ನ 3ಗಂಟೆಗೆ ನಗರಕ್ಕೆ ಎಚ್‌ಡಿಕೆ ಆಗಮಿಸಲಿದ್ದಾರೆಂದು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಹೇಳಿದರು.
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಎದುರಾಗಿರುವ ಕಾನೂನಾತ್ಮಕ ಸಮಸ್ಯೆ ಹಿನ್ನೆಲೆಯಲ್ಲಿ ಸಮಾವೇಶ ಮಾಡುವುದು ಬೇಡವೆಂದು ಎಚ್.ಡಿ.ಕುಮಾರಸ್ವಾಮಿ ಅವರು ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಜೂ.16ರಂದು ಸಂಜೆ 5 ಗಂಟೆಗೆ ನಗರದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಸಮಾವೇಶ ರದ್ದುಪಡಿಸಲಾಗಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಬಂದಿರುವ ಕಾನೂನು ತೊಡಕು ಬಗೆಹರಿದ ನಂತರ ಕಾರ್ಯಕ್ರಮ ಆಯೋಜನೆ ಮಾಡಲು ಎಚ್.ಡಿ.ಕುಮಾರಸ್ವಾಮಿ ಅವರು ಸೂಚಿಸಿದ್ದಾರೆ. ಇನ್ನು ಕೇಂದ್ರ ಸಚಿವರಾದ ನಂತರ ಪ್ರಥಮ ಬಾರಿಗೆ ಎಚ್.ಡಿ.ಕುಮಾರಸ್ವಾಮಿ ಅವರು ಮಧ್ಯಾಹ್ನ 3ಗಂಟೆಗೆ ನಗರಕ್ಕೆ ಆಗಮಿಸಲಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ಥಾಪಿಸಿರುವ ಸಂಸದರ ಕಚೇರಿ ಉದ್ಘಾಟಿಸಲಿದ್ದಾರೆ. ನಂತರ ಅಧಿಕಾರಿಗಳೊಂದಿಗೆ ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಭೆ ನಡೆಸಲಿದ್ದಾರೆ. ಬಳಿಕ ಸಾರ್ವಜನಿಕರ ಸಮಸ್ಯೆ ಆಲಿಸಲಿದ್ದಾರೆ ಎಂದು ತಿಳಿಸಿದರು.
ಜಿಲ್ಲೆಯ ಗಡಿಭಾಗ ಮದ್ದೂರು ತಾಲೂಕಿನ ನಿಡಘಟ್ಟ ಸಮೀಪ ಜೆಡಿಎಸ್ ಮಾಜಿ ಶಾಸಕ ಡಿ.ಸಿ ತಮ್ಮಣ್ಣ ಹಾಗೂ ಕಾರ್ಯಕರ್ತರು ಎಚ್.ಡಿ.ಕುಮಾರಸ್ವಾಮಿ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲಿದ್ದಾರೆ. ಮಂಡ್ಯ ಕ್ಷೇತ್ರದ ಹನಕೆರೆ ಗ್ರಾಮದ ಸಮೀಪ ನಾನೂ ಸೇರಿದಂತೆ ಜಿಲ್ಲೆಯ ಹಾಲಿ, ಮಾಜಿ ಶಾಸಕರು ಹಾಗೂ ಕಾರ್ಯಕರ್ತರೊಂದಿಗೆ ಸ್ವಾಗತಿಸಿ ಮಂಡ್ಯ ನಗರಕ್ಕೆ ಕರೆತರಲಿದ್ದೇವೆ. ಅಂದು ರಾತ್ರಿ ಮಂಡ್ಯದಲ್ಲೇ ವಾಸ್ತವ್ಯ ಹೂಡಲಿರುವ ಕುಮಾರಸ್ವಾಮಿ ಅವರು, ಜೂ.16ರಂದು ಆದಿಚುಂಚನಗಿರಿ ಕ್ಷೇತ್ರಕ್ಕೆ ಭೇಟಿ ನೀಡಿ ಕಾಲಭೈರವೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಆಶೀರ್ವಾದ ಪಡೆಯಲಿದ್ದಾರೆ ಎಂದು ಹೇಳಿದರು.
ಮನ್‌ಮುಲ್ ಮಾಜಿ ಅಧ್ಯಕ್ಷ ಬಿ.ಆರ್.ರಾಮಚಂದ್ರು, ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೇಶ್, ಮಾಧ್ಯಮ ಕಾರ್ಯದರ್ಶಿ ನವೀನ್ ಕುಮಾರ್ ಹಾಜರಿದ್ದರು.