

ಮಂಗಳೂರು: ಅರಣ್ಯ ಇಲಾಖೆ ಮಂಗಳೂರು ವಿಭಾಗ ವತಿಯಿಂದ ಅರಣ್ಯ ಇಲಾಖಾ ಅಧಿಕಾರಿಗಳು ಮತ್ತು ಸಿಬ್ಬಂದಿಯವರ ವಸತಿ ಸಂಕೀರ್ಣಕ್ಕೆ ನಗರದ ಪಡೀಲ್‌ನ ಅರಣ್ಯ ಇಲಾಖಾ ಸಸ್ಯವನದ ಆವರಣದಲ್ಲಿ ಶಿಲಾನ್ಯಾಸ ನೆರವೇರಿತು.
ಶಿಲಾನ್ಯಾಸ ನೆರವೇರಿಸಿದ ಶಾಸಕ ವೇದವ್ಯಾಸ ಕಾಮತ್, ಅಪಾರ್ಟ್‌ಮೆಂಟ್ ಮಾದರಿಯಲ್ಲಿ ನಿರ್ಮಾಣವಾಗಲಿರುವ ವಸತಿ ಸಂಕೀರ್ಣಕ್ಕೆ ಪಾಲಿಕೆಯಿಂದ ಬೇಕಾದ ಎಲ್ಲ ರೀತಿಯ ಸೌಲಭ್ಯ ಒದಗಿಸಲಾಗುವುದು. ಅಧಿಕಾರಿಗಳು ನೆಮ್ಮದಿಯಿಂದ ಕೆಲಸ ನಿರ್ವಹಿಸಲು ಬೇಕಾದ ಸೌಲಭ್ಯ ಒದಗಿಸುವುದು ಸರ್ಕಾರದ ಕರ್ತವ್ಯ ಎಂದರು.
ಮೇಯರ್ ಪ್ರೇಮಾನಂದ ಶೆಟ್ಟಿ, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ ಎಸ್.ನಟಾಲ್ಕರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ದಿನೇಶ್ ಕುಮಾರ್, ಸಹಾಯಕ ವಲಯ ಅರಣ್ಯ ಅಧಿಕಾರಿ ಸುಬ್ರಹ್ಮಣ್ಯ ರಾವ್, ವಲಯ ಅರಣ್ಯಾಧಿಕಾರಿ ಶ್ರೀಧರ್, ಮಂಗಳೂರು ವಲಯ ಅರಣ್ಯಾಧಿಕಾರಿ ಪ್ರಶಾಂತ್ ಪೈ, ಪಾಲಿಕೆ ಸದಸ್ಯರಾದ ಶೋಭಾ ಪೂಜಾರಿ, ದಿವಾಕರ ಪಾಂಡೇಶ್ವರ, ನಾಮನಿರ್ದೇಶಿತ ಸದಸ್ಯ ಭಾಸ್ಕರಚಂದ್ರ ಶೆಟ್ಟಿ ಮೊದಲಾದವರಿದ್ದರು.