ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ನಾಲ್ವರ ಸೆರೆ

arrested
Published on

ಬೆಂಗಳೂರು: ಡ್ರಂಕ್ ಆ್ಯಂಡ್ ಡ್ರೈವ್ ತಪಾಸಣೆ ವೇಳೆ ಸಂಚಾರ ಪೊಲೀಸರೊಂದಿಗೆ ವಾಗ್ವಾದ ನಡೆಸಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದ ಆರೋಪದ ಮೇಲೆ ನಾಲ್ವರು ಆರೋಪಿಗಳನ್ನು ಕೊಡಿಗೇಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಹೆಬ್ಬಾಳ ಸಂಚಾರ ಠಾಣಾ ಪೊಲೀಸ್ ಸಿಬ್ಬಂದಿಗೆ ಅವಾಚ್ಯವಾಗಿ ನಿಂದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಆರೋಪದ ಮೇಲೆ ಆದೇಶ್, ಅಬ್ದುಲ್, ಕಿರಣ್ ಹಾಗೂ ನವೀನ್ ಕುಮಾರ್‌ನನ್ನು ಬಂಧಿಸಲಾಗಿದೆ.

ಶನಿವಾರ ರಾತ್ರಿ ೧೨ ಗಂಟೆ ಸುಮಾರಿಗೆ ಹೆಬ್ಬಾಳ ಸರ್ಕಲ್ ರಿಂಗ್ ರಸ್ತೆಯ ಬಳಿ ಡ್ರಂಕ್ ಆ್ಯಂಡ್ ಡ್ರೈವ್ ತಪಾಸಣೆ ನಡೆಸುತ್ತಿದ್ದ ಪೊಲೀಸರು ಕಾರಿನಲ್ಲಿ ಬಂದಿದ್ದ ಆರೋಪಿಗಳನ್ನು ತಡೆದಿದ್ದರು. ತಪಾಸಣೆ ಸಂದರ್ಭದಲ್ಲಿ ಕಾರಿನ ಚಾಲಕ ನವೀನ್ ಕುಮಾರ್ ಮದ್ಯಪಾನ ಮಾಡಿರುವುದು ದೃಢವಾಗಿತ್ತು. ಈ ವೇಳೆ ನವೀನ್ ಕುಮಾರ್ ಮತ್ತು ಆತನ ಸ್ನೇಹಿತರು ಸಂಚಾರ ಪೊಲೀಸರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರು. ಬಳಿಕ ಆರೋಪಿತರನ್ನು ವಶಕ್ಕೆ ಪಡೆದ ಹೆಬ್ಬಾಳ ಸಂಚಾರ ಠಾಣಾ ಪೊಲೀಸರು, ಕೊಡಿಗೇಹಳ್ಳಿ ಠಾಣಾ ಪೊಲೀಸರಿಗೊಪ್ಪಿಸಿದ್ದಾರೆ.

ಹೆಬ್ಬಾಳ ಸಂಚಾರ ಠಾಣೆ ಇನ್‌ಸ್ಪೆಕ್ಟರ್ ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡ ಕೊಡಿಗೇಹಳ್ಳಿ ಠಾಣಾ ಪೊಲೀಸರು ನಾಲ್ವರೂ ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net