

ಶಿವಮೊಗ್ಗ: ಅನಿಮಿಯ (ರಕ್ತಹೀನತೆ) ಮುಕ್ತ ಜಿಲ್ಲೆಯನ್ನಾಗಿ ರೂಪಿಸುವಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸಾರ್ವಜನಿಕರೂ ಸಹಕರಿಸುವಂತೆ ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಮನವಿ ಮಾಡಿದರು.
ಡಿಸಿ ಕಚೇರಿಯಲ್ಲಿ ಸೋಮವಾರ ಆರೋಗ್ಯ ಇಲಾಖೆಯಿಂದ ಅನಿಮಿಯ ಮುಕ್ತ ಪೌಷ್ಟಿಕ ಜಿಲ್ಲೆ, ರಾಷ್ಟ್ರೀಯ ನವಜಾತ ಶಿಶು ಸಪ್ತಾಹ ಆಚರಣೆ ಹಾಗೂ ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕದ ಅಂಗವಾಗಿ ಸಮಾಲೋಚನಾ ಸಭೆ ನಡೆಸಿ ಮಾತನಾಡಿ, ಮಹಿಳೆ ಮತ್ತು ಮಕ್ಕಳಿಗೆ ಸಕಾಲದಲ್ಲಿ ಅನಿಮಿಯ ತಪಾಸಣೆ ನಡೆಸಿ, ರಕ್ತಹೀನತೆಯಿಂದ ಬಳಲುತ್ತಿರುವವರನ್ನು ಗುರುತಿಸಬೇಕು. ಅದರ ವಿಧಗಳಲ್ಲಿ ಸಾಮಾನ್ಯದಿಂದ ಗಂಭೀರ ಸ್ವರೂಪದ ಕಾಯಿಲೆಗಳಿಗೆ ಜಿಲ್ಲೆಯ ಯಾವುದೇ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಈ ದಿಸೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು. ನಿರ್ಲಕ್ಷಿಸಿದಲ್ಲಿ ಫಲಿತಾಂಶ ನಿರಾಶಾದಾಯಕವಾಗಿರಲಿದೆ ಎಂದು ಎಚ್ಚರಿಕೆ ನೀಡಿದರು.
ಗರ್ಭಿಣಿಯರು, ಹದಿಹರೆಯದ ಗಂಡು ಅಥವಾ ಹೆಣ್ಣು ಮಕ್ಕಳು, ಎಲ್ಲ ಪುರುಷ ಅಥವಾ ಮಹಿಳೆಯರು, ಮಕ್ಕಳು ಮತ್ತು ವಿಶೇಷವಾಗಿ ಅಪೌಷ್ಟಿಕ ಮಕ್ಕಳು ತಮ್ಮ ಆರೋಗ್ಯವನ್ನು ತಪಾಸಿಸಿಕೊಂಡು ಸಕಾಲಿಕ ಚಿಕಿತ್ಸೆ ಪಡೆದು, ಉತ್ತಮ ಆರೋಗ್ಯ ಹೊಂದಬೇಕು. ರಕ್ತಹೀನತೆಯನ್ನು ನಿವಾರಿಸಲು ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ಗರ್ಭಿಣಿ ಸ್ತ್ರೀಯರಿಗೆ ಪ್ರತಿ ತಿಂಗಳು ರಕ್ತಪರೀಕ್ಷೆ ನಡೆಸಿ, ಸೂಕ್ತ ಚಿಕಿತ್ಸೆ ಮತ್ತು ಅಗತ್ಯವಿದ್ದಲ್ಲಿ ರಕ್ತ ಒದಗಿಸಲು ಕ್ರಮ ವಹಿಸಲಾಗುವುದು ಎಂದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಕೈಗೊಳ್ಳಲಾಗುವ ಆರೋಗ್ಯ ಸಂಬಂಧಿ ಕಾರ್ಯಕ್ರಮಗಳು, ಯೋಜನೆಗಳು, ಅರಿವು ಕಾರ್ಯಕ್ರಮಗಳ ಯಶಸ್ವಿ ಅನುಷ್ಠಾನಗೊಳಿಸಲು ಆರೋಗ್ಯ ಇಲಾಖಾ ಸಿಬ್ಬಂದಿಗೆ ಈಗಾಗಲೇ ತರಬೇತಿ ನೀಡಿ ಸಜ್ಜುಗೊಳಿಸಲಾಗಿದೆ ಎಂದರು.
ಡಿಎಚ್‌ಒ ಡಾ. ರಾಜೇಶ್ ಸುರಗಿಹಳ್ಳಿ, ಡಿಡಿಪಿಐ ಸಿ.ಆರ್.ಪರಮೇಶ್ವರಪ್ಪ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿ ಇದ್ದರು. ಇದೇ ಸಂದರ್ಭದಲ್ಲಿ ಮಕ್ಕಳು ಕೈತೊಳೆಯುವ ಕ್ರಮದ ಭಿತ್ತಿಪತ್ರ ಬಿಡುಗಡೆಗೊಳಿಸಲಾಯಿತು.