

ಹಾಸನ: ಕರೊನಾ ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ನಿಗದಿಪಡಿಸಿರುವ ದುಬಾರಿ ದರವನ್ನು ಕೂಡಲೇ ರದ್ದುಗೊಳಿಸಿ, ಎಲ್ಲ ಸೋಂಕಿತರಿಗೂ ಉಚಿತ ಚಿಕಿತ್ಸೆ ನೀಡುವ ವ್ಯವಸ್ಥೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಡಿವೈಎಫ್‌ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಸಾರ್ವಜನಿಕ ಆಸ್ಪತ್ರೆಗಳು ಸರ್ಕಾರದ ನಿರ್ಲಕ್ಷೃದಿಂದ ವೈದ್ಯರು, ಸಿಬ್ಬಂದಿ ಹಾಗೂ ಸೌಲಭ್ಯಗಳ ಕೊರತೆಯಿಂದ ಬಳಲುತ್ತಿವೆ. ಇದರಿಂದಾಗಿ ಜನಸಾಮಾನ್ಯರಿಗೆ ಉತ್ತಮ ಆರೋಗ್ಯ ಸೇವೆ ದೊರಕದೆ ಖಾಸಗಿ ಆಸ್ಪತ್ರೆಗಳ ಧನದಾಹಿತ್ವಕ್ಕೆ ಬಲಿಯಾಗುತ್ತಿದ್ದಾರೆ. ಇಂತಹ ಸ್ಥಿತಿಯಲ್ಲಿ ಕರೊನಾ ಸೋಂಕು ಜನರಿಗೆ ಕಂಟಕವಾಗಿ ಪರಿಣಮಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಎಲ್ಲರಿಗೂ ಸೂಕ್ತ ಚಿಕಿತ್ಸೆ ಒದಗಿಸಲು ಮೂಲಸೌಕರ್ಯವಿಲ್ಲದೆ ಸರ್ಕಾರ ಖಾಸಗಿ ಆಸ್ಪತ್ರೆಗಳಿಗೆ ದುಬಾರಿ ದರ ನಿಗದಿಪಡಿಸಿ ಕರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಸೂಚಿಸಿದೆ. ಆದರೆ, ಸರ್ಕಾರ ನಿಗದಿಪಡಿಸಿರುವ ಮೊತ್ತದಲ್ಲಿ ಜನಸಾಮಾನ್ಯರು ಚಿಕಿತ್ಸೆ ಪಡೆಯುವುದು ಸಾಧ್ಯವೇ ಇಲ್ಲದ ಸ್ಥಿತಿ ಇದೆ. ಎಲ್ಲರಿಗೂ ಉತ್ತಮ ಆರೋಗ್ಯ ಸೇವೆ ನೀಡುವುದು ಸರ್ಕಾರದ ಜವಾಬ್ದಾರಿಯಾಗಿದ್ದು, ತಕ್ಷಣ ಸರ್ಕಾರ ದರಪಟ್ಟಿಯನ್ನು ರದ್ದುಪಡಿಸಿ ಎಲ್ಲ ರೋಗಿಗಳಿಗೂ ಉಚಿತ ಚಿಕಿತ್ಸೆ ನೀಡುವ ವ್ಯವಸ್ಥೆ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.
ನಂತರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಡಿವೈಎಫ್‌ಐ ಜಿಲ್ಲಾ ಕಾರ್ಯದರ್ಶಿ ಎಂ.ಜಿ.ಪೃಥ್ವಿ, ಡಿ.ಎಚ್.ಎಸ್.ಮುಖಂಡರಾದ ಮಂಜುನಾಥ್, ಶಶಿ, ಎಂ.ಎನ್.ಮಧುಸೂದನ್ ಇತರರು ಪಾಲ್ಗೊಂಡಿದ್ದರು.