15ರಿಂದ ಕಬ್ಬು ಅರೆಯುವ ಕಾರ್ಯ ಆರಂಭ

4Manju4
Published on

ಬೆಳಗಾವಿ: ಉತ್ತರ ಕರ್ನಾಟಕ ಭಾಗದ ಸಕ್ಕರೆ ಕಾರ್ಖಾನೆಗಳು ನ.15ರಿಂದ ಕಬ್ಬು ಅರೆಯುವ ಕಾರ್ಯ ಆರಂಭಿಸಲಿವೆ ಎಂದು ಎಂಆರ್‌ಎನ್ ಸಮೂಹ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಮುರಗೇಶ ನಿರಾಣಿ ತಿಳಿಸಿದರು.

ನಗರದ ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸಕ್ಕರೆ ಕಾರ್ಖಾನೆಗಳ ಮಾಲೀಕರ ಸಭೆ ನಡೆಸಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಕರ್ನಾಟಕ ಮತ್ತು ಮಹಾರಾಷ್ಟ್ರ ಸರ್ಕಾರವು ನವೆಂಬರ್ 15 ನಂತರ ಕ್ರಷಿಂಗ್ ಕಾರ್ಯಾಚರಣೆ ಆರಂಭಿಸಲು ಸೂಚಿಸಿವೆ. ಈ ಹಿನ್ನೆಲೆ ಸಕ್ಕರೆ ಕಾರ್ಖಾನೆಗಳನ್ನು ಆರಂಭಿಸುವ ಕುರಿತು ಸಭೆಯಲ್ಲಿ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಪ್ರಸ್ತುತ ದಿನಗಳಲ್ಲಿ ಸಕ್ಕರೆ ಕಾರ್ಖಾನೆಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕಾರ್ಖಾನೆಗಳ ಮಾಲೀಕರ ನಿಯೋಗದ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರದ ಗಮನಕ್ಕೆ ತರಲಾಗಿದೆ. ನಾನಾ ರೀತಿಯ ಸಮಸ್ಯೆಗಳಿಂದ ತತ್ತರಿಸಿರುವ ಸಕ್ಕರೆ ಕಾರ್ಖಾನೆಗಳು ಉಳಿಯಬೇಕು ಮತ್ತು ಸಂಕಷ್ಟದಲ್ಲಿರುವ ರೈತರು ಬದುಕುಬೇಕು ಎಂಬುವುದು ನಮ್ಮೆಲ್ಲರ ಆಶಯ. ಸರ್ಕಾರವು ಎಲ್ಲರಿಗೂ ನ್ಯಾಯ ಕಲ್ಪಿಸಿಕೊಡುವ ಕೆಲಸ ಮಾಡಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪ್ರಸಕ್ತ ಕಬ್ಬು ಅರೆಯುವ ಹಂಗಾಮಿನಲ್ಲಿಯೇ ನೆರೆಯ ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿರುವ ಕಾರಣ ಮತದಾನ ಮುಗಿದ ಬಳಿಕವೇ ಮಹಾರಾಷ್ಟ್ರದ ಕಬ್ಬು ಕಟಾವು ಕಾರ್ಮಿಕರು(ಗ್ಯಾಂಗ್) ಕರ್ನಾಟಕಕ್ಕೆ ಬರಲಿವೆ. ಬಾಗಲಕೋಟೆ, ಬೆಳಗಾವಿ, ವಿಜಯಪುರ ಜಿಲ್ಲೆಗಳಿಗೆ ಅಧಿಕ ಸಂಖ್ಯೆಯಲ್ಲಿ ಕಾರ್ಮಿಕರು ಬರುತ್ತಾರೆ. ನಮ್ಮ ಕಾರ್ಖಾನೆಗಳಿಗೆ ಅಂದಾಜು 30 ಸಾವಿರಕ್ಕೂ ಕಾರ್ಮಿಕರು ಬರುತ್ತಾರೆ. ಅವರು ಬರುವವರೆಗೆ ಸ್ಥಳೀಯ ಗ್ಯಾಂಗ್‌ಗಳ ಬಳಸಿಕೊಂಡು ಕಾರ್ಖಾನೆಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ನಾವೆಲ್ಲ ಒಗ್ಗಟ್ಟಿನಿಂದ ಪಕ್ಷ ಸಂಘಟಿಸುತ್ತೇವೆ

ರಾಜ್ಯದಲ್ಲಿ ಕಾಂಗ್ರೆಸ್ ದುರಾಡಳಿತದಿಂದ ಜನತೆ ಬೇಸತ್ತಿದ್ದು, ಶಿಗ್ಗಾಂವಿ, ಚನ್ನಪಟ್ಟಣ, ಸಂಡೂರ ವಿಧಾನಸಭೆಯ ಉಪ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಕಾಂಗ್ರೆಸ್ ಶಾಸಕರೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ಗೆಲುವಿನ ವಾತಾವರಣ ಸೃಷ್ಟಿಯಾಗಿದ್ದು, ಅಧಿಕ ಮತಗಳ ಅಂತರದಿಂದ ಜಯಗಳಿಸಲಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಧ್ಯಕ್ಷತೆಯಲ್ಲಿ ನಾವೆಲ್ಲ ಒಗ್ಗಟ್ಟಿನಿಂದ ಪಕ್ಷ ಸಂಘಟಿಸುತ್ತಿದ್ದೇವೆ. ಮುಂಬರುವ ದಿನಗಳಲ್ಲಿ ಪಕ್ಷದಲ್ಲಿನ ಸಣ್ಣಪುಟ್ಟ ಸಮಸ್ಯೆಗಳು ಇತ್ಯರ್ಥಗೊಳ್ಳಲಿವೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಮುರಗೇಶ ನಿರಾಣಿ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net