

ಮಡಿಕೇರಿ: ಕೇಂದ್ರ ಬಿಜೆಪಿ ಸರ್ಕಾರವು ಈ ಸಾಲಿನ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಖಾಲಿ ಚೊಂಬು ಹಾಗೂ ತೆಂಗಿನಕಾಯಿ ಚಿಪ್ಪು ನೀಡಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ಟೀಕಿಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರದಲ್ಲಿ ಸಚಿವರಾಗಿರುವವರು ಕರ್ನಾಟಕಕ್ಕೆ ಒಂದೇ ಒಂದು ಯೋಜನೆಯನ್ನೂ ತರಲು ಸಾಧ್ಯವಾಗಿಲ್ಲ. ಇವರು ದಿನ ಬೆಳಗಾದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನಿಂದಿಸುತ್ತಾ ಕಾಲಹರಣ ಮಾಡುತ್ತಿದ್ದಾರೆ. ರಾಜ್ಯದ ಅಭಿವೃದ್ಧಿಗೆ ಕೊಡುಗೆ ನೀಡುತ್ತಿಲ್ಲ ಎಂದು ಟೀಕಿಸಿದರು.
ಮನಮೋಹನ್ ಸಿಂಗ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ಇದ್ದಾಗ ಬಜೆಟ್ ಗಾತ್ರ ೧೪ ಲಕ್ಷ ಕೋಟಿ ಇತ್ತು. ಈ ಬಾರಿಯ ಬಜೆಟ್ ಗಾತ್ರ ೫೦ ಕೋಟಿ ದಾಟಿದೆ. ೧೬ ಕೋಟಿ ಸಾಲ ತೆಗೆದುಕೊಂಡಿದ್ದಾರೆ. ೧೯೪೭ರಿಂದ ೨೦೧೪ರವರೆಗೆ ನಮ್ಮ ದೇಶ ಮಾಡಿದ್ದ ಸಾಲ ೫೩ ಲಕ್ಷ ಕೋಟಿ ಇತ್ತು. ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅಂದರೆ ೧೦ ವರ್ಷಗಳಲ್ಲಿ ೨೦೫ ಲಕ್ಷ ಕೋಟಿಯಾಗಿದೆ. ಪ್ರತಿಯೊಬ್ಬರ ಮೇಲೆ ೩.೨೫ ಲಕ್ಷ ಸಾಲ ಇದೆ. ದೇಶವನ್ನು ಅಭಿವೃದ್ಧಿ ಪಥದತ್ತ ನಡೆಸುವ ಬದಲಿಗೆ ಸಾಲದ ಕೂಪಕ್ಕೆ ತಳ್ಳಿರುವಂತಹ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ ಎಂದು ಟೀಕಿಸಿದರು.
ಬಜೆಟ್‌ನಲ್ಲಿ ರಾಜ್ಯಕ್ಕೆ ಅನ್ಯಾಯ ಮಾಡುವುದನ್ನು ಮುಂದುವರಿಸಿದ್ದು, ಯಾವುದೇ ಹೊಸ ಯೋಜನೆಗಳನ್ನು ನೀಡಿಲ್ಲ. ಕೇಂದ್ರ ಸರ್ಕಾರವು ರೈತರು, ಯುವಕರು, ಪರಿಶಿಷ್ಟರು ಹಾಗೂ ಅಲ್ಪಸಂಖ್ಯಾತರ ವಿರೋಧಿಯಾಗಿದೆ. ಅಲ್ಲದೇ, ಕರ್ನಾಟಕ ಸೇರಿದಂತೆ ದಕ್ಷಿಣದ ರಾಜ್ಯಗಳನ್ನು ಸಂಪೂರ್ಣ ಕಡೆಗಣಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಬೇಡಿಕೆಗಳನ್ನು ಮಂಡಿಸಿದ್ದರು. ಆದರೆ, ಅದಕ್ಕೆ ಸ್ಪಂದನೆ ದೊರೆತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಮಾಜಿ ಅಧ್ಯಕ್ಷ ಕೆ.ಕೆ.ಮಂಜುನಾಥ್, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಂಸ, ಕಕ್ಕಬ್ಬೆ ಗ್ರಾಮ ಪಂಚಾಯಿತಿ ಸದಸ್ಯ ಕಲಿಯಂಡ ಸಂಪತ್, ವಕ್ತಾರ ತೆನ್ನಿರಾ ಮೈನಾ ಉಪಸ್ಥಿತರಿದ್ದರು.