ನ.8ರಿಂದ ಬಿಬಿಎಂಪಿ ‘ಮುಖ್ಯ ಆಯುಕ್ತರ ನಡೆ ವಲಯದ ಕಡೆ’ ಕಾರ್ಯಕ್ರಮ

Vijayavani-Featured-Image
Published on

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಸಾರ್ವಜನಿಕರ ಕುಂದುಕೊರತೆ ಪರಿಹರಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲು ಹಾಗೂ ವಲಯ ಮಟ್ಟದಲ್ಲಿ ನಡೆಯುತ್ತಿರುವ ಕಾರ್ಯಚಟುವಟಿಕೆಗಳನ್ನು ನಿಯಮಿತವಾಗಿ ಪರಿಶೀಲನೆ ನಡೆಸಲು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ‘ಮುಖ್ಯ ಆಯುಕ್ತರ ನಡೆ ವಲಯದ ಕಡೆ’ ಕಾರ್ಯಕ್ರಮ ನಡೆಸಲಿದ್ದಾರೆ.

ಪ್ರತಿ ತಿಂಗಳ ಮಂಗಳವಾರ ಹಾಗೂ ಶುಕ್ರವಾರದಂದು ಪಾಲಿಕೆಯ ಎಲ್ಲ 8 ವಲಯಗಳಿಗೆ ಭೇಟಿ ನೀಡಿ ಆಯಾ ದಿನ ಬೆಳಗ್ಗೆ 10.30ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಕ್ಷೇತ್ರ ಭೇಟಿ ಮತ್ತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ. ಜತೆಗೆ ಮಧ್ಯಾಹ್ನ 3ರಿಂದ ಸಂಜೆ 5ರವರೆಗೆ ಸಾರ್ವಜನಿಕರ ಕುಂದು-ಕೊರತೆ ಆಲಿಸಿ ಪರಿಹಾರ ಒದಗಿಸಲಿದ್ದಾರೆ.

ಮೊದಲ ಕಾರ್ಯಕ್ರಮ ಶುಕ್ರವಾರ (ನ.8) ಚಾಲನೆ ಸಿಗಲಿದೆ. ಅಂದು ಪಶ್ಚಿಮ ವಲಯದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಮುಖ್ಯ ಆಯುಕ್ತರ ಜತೆಗೆ, ವಿಶೇಷ ಆಯುಕ್ತರು ಹಾಗೂ ವಲಯ ಆಯುಕ್ತರ ಸಮ್ಮುಖದಲ್ಲಿ ಅಹವಾಲು ಆಲಿಸಲಾಗುತ್ತದೆ ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net