

ಬೆಳಗಾವಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೈತರು, ಮಹಿಳೆಯರು, ಸಾಮಾಜಿಕ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿದ ಕುಟುಂಬಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸೂಕ್ತ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)ದ ಜಿಲ್ಲಾ ಘಟಕದ ಕಾರ್ಯಕರ್ತರು ಧಾರಾಕಾರ ಸುರಿಯುತ್ತಿದ್ದ ಮಳೆಯನ್ನೂ ಲೆಕ್ಕಿಸದೆ ಪ್ರತಿಭಟಿಸಿದರು. ಕರೊನಾ ವೈರಸ್ ಹಾವಳಿ ಹಿನ್ನೆಲೆಯಲ್ಲಿ ಉದ್ಯೋಗ ಕಳೆದುಕೊಂಡು, ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವವರಿಗೆ ನೆರವಾಗಬೇಕು. ನರೇಗಾದಡಿ ಕೆಲಸ ಮಾಡುವವರಿಗೆ ನಿತ್ಯ 600 ರೂ. ವೇತನ ನೀಡಬೇಕು. ಪ್ರತಿ ಕಾರ್ಮಿಕರಿಗೆ ವಾರ್ಷಿಕ 200 ದಿನ ಕಾಲ ಉದ್ಯೋಗ ನೀಡಬೇಕು ಎಂದು ಆಗ್ರಹಿಸಿದರು. ಜಿ.ವಿ.ಕುಲಕರ್ಣಿ, ಮಂದಾ ನೇವಗಿ ಇತರರು ಇದ್ದರು.
ಎಸ್‌ಟಿ ಜಾತಿ ಪ್ರಮಾಣ ಪತ್ರ ನೀಡಲು ಆಗ್ರಹ: ಬೆಳಗಾವಿ ಜಿಲ್ಲೆಯಲ್ಲಿ ಬೇರಡ ಜಾತಿ ಪದವನ್ನು ಬೇಡರ ಎಂದು ಪರಿಗಣಿಸಿ, ಪರಿಶಿಷ್ಟ ಪಂಗಡದ ಜಾತಿ ಪ್ರಮಾಣಪತ್ರ ನೀಡಬೇಕು ಎಂದು ಒತ್ತಾಯಿಸಿ ರಾಜ್ಯ ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಸಂಘ ಮತ್ತು ವಿವಿಧ ವಾಲ್ಮೀಕಿ ಸಂಘಟನೆಗಳ ಪದಾಧಿಕಾರಿಗಳು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ರಾಜೇಂದ್ರ ಪಂಗಣ್ಣವರ, ರಾಜಶೇಖರ ತಳವಾರ ಇತರರು ಇದ್ದರು.