ತಪ್ಪಿತಸ್ಥರಿಂದಲೇ ನಷ್ಟ ವಸೂಲಿ

29Khanapur1-Web
ನಂದಗಡದಲ್ಲಿರುವ ರಾಯಣ್ಣನ ಸಮಾಧಿ ಸ್ಥಳಕ್ಕೆ ಶನಿವಾರ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಜಾರಕಿಹೊಳಿ ಭೇಟಿ ನೀಡಿ ಸಮಾಧಿಗೆ ಗೌರವ ಸಲ್ಲಿಸಿದರು. ಪ್ರಮೋದ ಕೊಚೇರಿ, ರಾಜೇಂದ್ರ ರಾಯ್ಕ, ಬಾಬುರಾವ ದೇಸಾಯಿ, ಗಜಾನನ, ಅಧಿಕಾರಿಗಳು ಇತರರಿದ್ದರು.
Published on

ಬೆಳಗಾವಿ: ವಿವಿಧ ಕಾರಣಗಳಿಂದ ಸ್ಥಗಿತಗೊಂಡಿರುವ ಗೋಕಾಕ ತಾಲೂಕಿನ ಕುಂದರಗಿ, ಇತರೆ 21 ಬಹುಗ್ರಾಮ ಯೋಜನೆಗಳ ಸ್ಥಿತಿಗತಿ ಕುರಿತು ತನಿಖೆ ನಡೆಸಿ ವರದಿ ನೀಡಬೇಕು. ಯೋಜನೆ ಸ್ಥಗಿತಕ್ಕೆ ಕಾರಣವಾಗಿರುವ ಅಧಿಕಾರಿಗಳಿಂದಲೇ ನಷ್ಟ ವಸೂಲಿ ಮಾಡಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಸೂಚಿಸಿದ್ದಾರೆ.

ನಗರದ ಜಿಪಂ ಸಭಾಂಗಣದಲ್ಲಿ ಶನಿವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, 2017ರಲ್ಲಿ ಕುಂದರಗಿ ಹಾಗೂ ಇತರೆ 21 ಬಹುಗ್ರಾಮ ಯೋಜನೆಗಳ ಕಾಮಗಾರಿಗೆ 9.85 ಕೋಟಿ ರೂ. ವೆಚ್ಚದ ವರದಿ ತಯಾರಿಸಿ ಕೇಂದ್ರ ಕಚೇರಿಗೆ ಸಲ್ಲಿಸಲಾಗಿದೆ ಎಂದು ಅಧಿಕಾರಿಗಳ ಹೇಳಿಕೆ ಸಚಿವರು ಸಭೆಯಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಅಧಿಕಾರಿಗಳ ಗೊಂದಲ ಹೇಳಿಕೆಗಳು ಅನುಮಾನ ಮೂಡಿಸುತ್ತಿವೆ. ಆದ್ದರಿಂದ ಜಿಪಂ ಸಿಇಒ ಹಾಗೂ ಇತರ ಅಧಿಕಾರಿಗಳು ಖುದ್ದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಒಂದು ವಾರದಲ್ಲಿ ವರದಿ ಸಲ್ಲಿಸಬೇಕು. ಈ ವಿಷಯದಲ್ಲಿ ನಿರ್ಲಕ್ಷೃಮಾಡಿರುವ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಸೂಚನೆ ನೀಡಿದರು.

ಕಮಿಷನ್‌ಗಾಗಿ ವಿಳಂಬ: ಬಹುಗ್ರಾಮ ಕುಡಿಯುವ ನೀರು ಯೋಜನೆಯಡಿ ಗೋಕಾಕ ತಾಲೂಕಿನ ಬಳೋಬಾಳ ಹಾಗೂ ಇತರೆ 3 ಗ್ರಾಮಗಳಿಗೆ ಶಾಶ್ವತ ಕುಡಿಯುವ ನೀರಿನ ಕಾಮಗಾರಿಗೆ 2017ರಲ್ಲಿ ಟೆಂಡರ್ ಕರೆಯಲಾಗಿದೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಆದರೆ, ಹಿರಿಯ ಅಧಿಕಾರಿಗಳು ಕಾಮಗಾರಿ ಆರಂಭವಾಗಿಲ್ಲ ಎಂದು ಹೇಳುತ್ತಿದ್ದಾರೆ. 3 ವರ್ಷಗಳಾದರೂ ಕಾಮಗಾರಿ ಆರಂಭವಾಗಿಲ್ಲ ಏಕೆ? ಕಮಿಷನ್ ಸಲುವಾಗಿ ಕಾಮಗಾರಿವಿಳಂಬ ಮಾಡುತ್ತಿದ್ದೀರಿ ಎಂದು ಅಧಿಕಾರಿಗಳನ್ನು ಈಶ್ವರಪ್ಪ ತರಾಟೆಗೆ ತೆಗೆದುಕೊಂಡರು.

ವಿಧಾನ ಪರಿಷತ್ ಆಡಳಿತ ಪಕ್ಷದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಆಶಾ ಐಹೊಳೆ, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಜಿ.ಜಯರಾಂ, ಜಿಪಂ ಸಿಇಒ ಎಚ್.ವಿ. ದರ್ಶನ, ವಿವಿಧ ಇಲಾಖೆಯ ಅಧಿಕಾರಿಗಳು, ಜನಪ್ರತಿನಿಧಿಗಳು ಮತ್ತಿತರರು ಉಪಸ್ಥಿತರಿದ್ದರು.

ನರೇಗಾ ಯೋಜನೆಯಡಿ 2021ರ ಮಾರ್ಚ್ ಒಳಗೆ ಎಲ್ಲ ಗ್ರಾಪಂಗಳಲ್ಲಿ ಘನತ್ಯಾಜ್ಯ ವಿಲೇವಾರಿ ನಿರ್ವಹಣಾ ಘಟಕ ಆರಂಭಿಸಬೇಕು. ಗ್ರಾಪಂ, ತಾಲೂಕು ಪಂಚಾಯಿತಿ ಕಚೇರಿಗಳಲ್ಲಿ ಸೋಲಾರ್ ವಿದ್ಯುತ್ ವ್ಯವಸ್ಥೆಯನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. ವರ್ಷದ ಒಳಗೆ ರಾಜ್ಯದ ಪ್ರತಿ ಮನೆಗೆ ನಲ್ಲಿ ಮೂಲಕ ನೀರು ಪೂರೈಸಬೇಕು. | ಕೆ.ಎಸ್.ಈಶ್ವರಪ್ಪ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net