

ಹರಿಹರ: ಇಂಧನ ಬೆಲೆ ಏರಿಕೆ ವಿರೋಧಿಸಿ ತಾಲೂಕು ಬಿಜೆಪಿ ವತಿಯಿಂದ ಶನಿವಾರ ನಗರದ ರಾಣಿ ಚನ್ನಮ್ಮ ವೃತ್ತದಲ್ಲಿ ರಸ್ತೆ ತಡೆ ಮಾಡುವ ಮೂಲಕ ಪ್ರತಿಭಟನೆ ನಡೆಸಲಾಯಿತು.
ನಗರದ ರಾಣಿ ಚನ್ನಮ್ಮ ವೃತ್ತದಲ್ಲಿ ಶಾಸಕ ಬಿ.ಪಿ. ಹರೀಶ್ ನೇತೃತ್ವದಲ್ಲಿ ಜಮಾವಣೆಗೊಂಡ ಬಿಜೆಪಿ ಕಾರ್ಯಕರ್ತರು ಕೆಲ ಸಮಯ ರಸ್ತೆ ತಡೆ ಮಾಡಿ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಇದರಿಂದ ನಗರದ ಮುಖ್ಯ ರಸ್ತೆಯಲ್ಲಿ ಕೆಲ ಸಮಯ ವಾಹನ ಸಾಲುಗಟ್ಟಿ ನಿಂತ ವಾಹನ ಸವಾರರು ಪ್ರತಿಭಟನೆಯ ಬಿಸಿ ಅನುಭವಿಸಿದರು.
ಶಾಸಕ ಬಿ.ಪಿ. ಹರೀಶ್ ಮಾತನಾಡಿ, ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ತುಂಬಿ ತುಳುಕುತ್ತಿದ್ದು ಆರ್ಥಿಕ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಗ್ಯಾರಂಟಿಗಳಿಗೆ ಹಣ ಜೋಡಿಸಲು ಬೆಲೆ ಏರಿಕೆಯಂತಹ ಕೃತ್ಯ ಮಾಡಿರುವುದು ಸರಿಯಾದ ಕ್ರಮವಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರದ ಈ ಕ್ರಮದಿಂದ ಜನಸಾಮಾನ್ಯರ ಬದುಕು ದುಸ್ತರವಾಗಿದೆ. ಬೆಲೆ ಏರಿಕೆ ಪರಿಣಾಮ ದಿನಬಳಕೆ ವಸ್ತುಗಳ ಬೆಲೆ ಗಗನಕ್ಕೇರುತ್ತಿದೆ. ಜನಸಾಮಾನ್ಯರು ಜೀವನ ಮಾಡುವುದೇ ಕಷ್ಟವಾಗುತ್ತಿದೆ. ಆದ್ದರಿಂದ ರಾಜ್ಯ ಸರ್ಕಾರ ಕೂಡಲೇ ಬೆಲೆ ಏರಿಕೆ ಹಿಂಪಡೆಯಬೇಕು. ಇಲ್ಲದ್ದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದೆಂದು ಎಚ್ಚರಿಕೆ ನೀಡಿದರು.
ಪ.ಜಾತಿ ಮತ್ತು ಪ.ಪಂ ಜಾತಿಗಳ ಅಭಿವೃದ್ಧಿಗೆ ಮೀಸಲಿಟ್ಟಿರುವ ಅನುದಾನವನ್ನು ಅನ್ಯ ಕಾರ್ಯಗಳಿಗೆ ಬಳಸುವ ಮೂಲಕ ಆ ವರ್ಗದ ಶ್ರೇಯೋಭಿವೃದ್ಧಿಗೆ ಧಕ್ಕೆ ತಂದಿದೆ ಎಂದು ಆರೋಪಿಸಿದರು.
ಜಿಲ್ಲಾ ಬಿಜೆಪಿ ಘಟಕದ ನಿಕಟಪೂರ್ವ ಅಧ್ಯಕ್ಷ ಹನಗವಾಡಿ ವೀರೇಶ್ ಮಾತನಾಡಿ, ಗ್ಯಾರಂಟಿಗಳ ಅಲೆಯಲ್ಲಿ ಅಧಿಕಾರಕ್ಕೆ ಬಂದಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ದೂರಿದರು.
ನಗರಸಭೆ ಸದಸ್ಯ ಆಟೋ ಹನುಮಂತಪ್ಪ, ಬಿಜೆಪಿ ಮುಖಂಡ ಚಂದ್ರಶೇಖರ ಪೂಜಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಣ್ಣೇಶ್ ಐರಣಿ, ನಗರ ಘಟಕದ ಅಧ್ಯಕ್ಷ ಅಜಿತ್ ಸಾವಂತ್, ಪ್ರಧಾನ ಕಾರ್ಯದರ್ಶಿಗಳಾದ ತುಳಜಪ್ಪ ಭೂತೆ, ವೀರೇಶ ಆದಾಪೂರ್, ಮುಖಂಡರಾದ ವಾಸು ಚಂದಾಪುರ, ಸಂತೋಷ ಗುಡಿಮನಿ ಪಕ್ಷದ ವಿವಿಧ ಮುಖಂಡರು, ಕಾರ್ಯಕರ್ತರು ಭಾಗಿಯಾಗಿದ್ದರು.