

ತಿ.ನರಸೀಪುರ: ಗ್ರಾಮ ಆಡಳಿತಾಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರದಿಂದ ಕಂದಾಯ ಇಲಾಖೆಯಲ್ಲಿ ಸಾರ್ವಜನಿಕ ಕೆಲಸ ಕಾರ್ಯಗಳಿಗೆ ತೀವ್ರ ತೊಂದರೆಯಾಗುತ್ತಿರುವುದರಿಂದ ಸಿಎಂ ಸಿದ್ದರಾಮಯ್ಯ ಹಾಗೂ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಕೂಡಲೇ ಗ್ರಾಮ ಲೆಕ್ಕಾಧಿಕಾರಿಗಳು ಹಾಗೂ ಕಂದಾಯ ಅಧಿಕಾರಿಗಳ ನ್ಯಾಯಯುತ ಬೇಡಿಕೆಗಳನ್ನ ಈಡೇರಿಸಬೇಕೆಂದು ಮಾಜಿ ಶಾಸಕ ಎಂ.ಅಶ್ವಿನ್ ಕುಮಾರ್ ಒತ್ತಾಯಿಸಿದರು.
ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ಕೇಂದ್ರ ಸಂಘದ ಕರೆಯಂತೆ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿರುವ ಗ್ರಾಮ ಆಡಳಿತ ಅಧಿಕಾರಿಗಳ ಪ್ರತಿಭಟನೆಯಲ್ಲಿ ಮಂಗಳವಾರ ಭಾಗವಹಿಸಿ, ಪ್ರತಿಭಟನಾ ನಿರತರ ಅಹವಾಲು ಆಲಿಸಿ ಮಾತನಾಡಿದರು.
ರಾಜ್ಯಾದ್ಯಂತ ಗ್ರಾಮ ಆಡಳಿತಾಧಿಕಾರಿಗಳು ತಮಗೆ ಅತ್ಯಾವಶ್ಯಕವಿರುವ ಮೂಲ ಸೌಕರ್ಯಗಳ ಬಗ್ಗೆ ಹೋರಾಟ ನಡೆಸುತ್ತಿದ್ದಾರೆ. ವೇತನ ಪರಿಷ್ಕರಣೆ, ಪ್ರತಿಯೊಂದು ಹಂತಗಳಲ್ಲೂ ನೌಕರರು ಎದುರಿಸುತ್ತಿರುವ ಸಮಸ್ಯೆಗಳ ಇತ್ಯರ್ಥ, ತಾಲೂಕು ಆಡಳಿತದ ಸುಜ್ಜಿತ ಕಾರ್ಯ ವ್ಯವಸ್ಥೆಗೆ ಅನುವು ಮಾಡಿಕೊಡುವಂತೆ ಆಗ್ರಹಿಸಿದರು.
ಮುಷ್ಕರ ನಿರತ ನೌಕರರ ಅಹವಾಲುಗಳನ್ನು ಸ್ವೀಕರಿಸಿ ನ್ಯಾಯ ಒದಗಿಸದಿದ್ದಲ್ಲಿ ಮುಂಬರುವ ಅಧಿವೇಶನದಲ್ಲಿ ಜೆಡಿಎಸ್ ಪಕ್ಷದ ಶಾಸಕಾಂಗ ನಾಯಕರ ಮೂಲಕ ಧ್ವನಿ ಎತ್ತುವ ಬಗ್ಗೆಯೂ ವಿಪಕ್ಷಗಳ ನಾಯಕರ ಗಮನಕ್ಕೆ ತರುತ್ತೇನೆ ಎಂದು ಎಂ.ಅಶ್ವಿನ್ ಕುಮಾರ್ ತಿಳಿಸಿದರು. ಪ್ರತಿಭಟನೆಯಲ್ಲಿ ಸಂಘದ ಅಧ್ಯಕ್ಷ ಎಂ.ಎಸ್. ಆನಂದ, ಕಾರ್ಯದರ್ಶಿ ಶಿವರಾಮ, ಉಪಾಧ್ಯಕ್ಷ ಶ್ರೀನಿವಾಸ್ ಮೂರ್ತಿ, ಕಂದಾಯ ಅಧಿಕಾರಿಗಳಾದ ಎಸ್. ಸಿದ್ದರಾಜು, ಶ್ಯಾಮ್, ಬಸವರಾಜು, ಮಹೇಂದ್ರ, ನಾಗೇಂದ್ರ, ಗ್ರಾಮ ಲೆಕ್ಕಾಧಿಕಾರಿಗಳಾದ ಸೋಮ, ಪ್ರಸನ್ನ, ನಯನ, ನಾಗೇರಪ್ಪ, ಶಿವರಾಂ, ಶ್ರೀನಿವಾಸ, ಸತೀಶ ಹಾಗೂ ಇತರರು ಇದ್ದರು.