

ನಂಜನಗೂಡು: ಪಟ್ಟಣದ ಶ್ರೀಕಂಠೇಶ್ವರ ದೇವಸ್ಥಾನಕ್ಕೆ ಹುಣ್ಣಿಮೆ ದಿನವಾದ ಭಾನುವಾರ ಭಕ್ತರ ದಂಡೇ ಹರಿದು ಬಂದಿತು. ವಿವಿಧೆಡೆಯಿಂದ ಆಗಮಿಸಿದ ಸಹಸ್ರಾರು ಭಕ್ತರು ಪೂಜೆ-ಪುನಸ್ಕಾರ ಸಲ್ಲಿಸಿದರು.
ಶ್ರೀಕಂಠೇಶ್ವರಸ್ವಾಮಿಗೆ ಬೆಳಗ್ಗೆಯಿಂದಲೇ ವಿವಿಧ ಧಾರ್ಮಿಕ ಕಾರ್ಯಗಳನ್ನು ನೆರವೇರಿಸಲಾಯಿತು. ಶನಿವಾರ ರಾತ್ರಿಯಿಂದಲೇ ದೇವಸ್ಥಾನಕ್ಕೆ ಆಗಮಿಸಿದ ಭಕ್ತರು ಕಪಿಲಾ ನದಿಯಲ್ಲಿ ಮಿಂದು, ಮುಡಿಸೇವೆ ಸೇರಿದಂತೆ ಹಲವಾರು ಸೇವೆಗಳನ್ನು ನೆರವೇರಿಸಿದರು.
ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿದ್ದರಿಂದ ಬೆಳಗ್ಗೆಯಿಂದಲೇ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು. ಸಾಲಿನಲ್ಲಿ ತೆರಳಲು ಆಗದ ಆಸ್ತಿಕರು ದೇವಸ್ಥಾನದ ಮುಂಭಾಗದಲ್ಲಿ ಪೂಜೆಯನ್ನು ಸಲ್ಲಿಸಿ ಪ್ರಸಾದ ಸ್ವೀಕರಿಸಿದರು.