ಜ.12ಕ್ಕೆ ಯುವನಿಧಿ ಬ್ಯಾಂಕ್ ಖಾತೆಗೆ ಹಣ ಬಿಡುಗಡೆ

meeting
ಮಧು ಬಂಗಾರಪ್ಪ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು. ಡಾ.ಆರ್.ಸೆಲ್ವಮಣಿ, ಸ್ನೇಹಲ್ ಲೋಖಂಡೆ, ಜಿ.ಕೆ.ಮಿಥುನ್‌ಕುಮಾರ್ ಉಪಸ್ಥಿತರಿದ್ದರು.
Published on

ಶಿವಮೊಗ್ಗ: ನಗರದ ಹಳೇಜೈಲು ಆವರಣದಲ್ಲಿ ಜ.12ರಂದು ನಡೆಯುವ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಯುವನಿಧಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಸಾಂಕೇತಿಕವಾಗಿ ಹಣ ಬಿಡುಗಡೆ ಮಾಡಲಿದ್ದಾರೆ. ಅಕ್ಕಪಕ್ಕದ ಜಿಲ್ಲೆಗಳಿಂದಲೂ ಫಲಾನುಭವಿಗಳು ಭಾಗವಹಿಸಲಿದ್ದಾರೆ. ಸುಮಾರು ಒಂದು ಲಕ್ಷ ಮಂದಿ ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಕುರಿತು ಬುಧವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಜ.12ರ ಕಾರ್ಯಕ್ರಮದಲ್ಲಿ ಸಿಎಂ ಜತೆಗೆ ಸಚಿವ ಸಂಪುಟದ ಅನೇಕ ಸದಸ್ಯರು ಭಾಗವಹಿಸಲಿದ್ದಾರೆ. ಕಾರ್ಯಕ್ರಮಕ್ಕೆ ಜನರು ಆಗಮಿಸುವ ಸಂದರ್ಭದಲ್ಲಿ ವಾಹನ ಸಂಚಾರ ದಟ್ಟಣೆಯ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.
ಅನ್ನಭಾಗ್ಯ ಮತ್ತು ಗೃಹಲಕ್ಷ್ಮೀ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ತಾಂತ್ರಿಕ ಕಾರಣಗಳಿಂದ ಕೆಲವು ದೂರುಗಳು ಕೇಳಿ ಬರುತ್ತಿವೆ. ಈ ಬಗ್ಗೆ ಜಿಲ್ಲಾಡಳಿತ ನಿಗಾ ವಹಿಸಬೇಕು. ಇದುವರೆಗೆ ಸೌಲಭ್ಯ ಪಡೆಯದ ಅರ್ಹರನ್ನು ಗುರುತಿಸಿ ಯೋಜನೆಯ ವ್ಯಾಪ್ತಿಗೆ ಒಳಪಡಿಸಬೇಕೆಂದು ಸೂಚಿಸಿದರು.
ಶಕ್ತಿ ಯೋಜನೆಯ ಪ್ರಯೋಜನ ಪಡೆಯಲು ಜಿಲ್ಲೆಯ ವಿವಿಧ ಭಾಗಗಳಿಂದ ಹೆಚ್ಚುವರಿಯಾಗಿ ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ಬೇಡಿಕೆಯಿದೆ. ಇದಕ್ಕಾಗಿ 250 ಮಾರ್ಗಗಳಲ್ಲಿ ಅರ್ಜಿ ಸಲ್ಲಿಕೆಯಾಗಿದೆ. ಹಂತಹಂತವಾಗಿ ಬಸ್ ಸೇವೆ ಒದಗಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು.
ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಎಸ್ಪಿ ಜಿ.ಕೆ.ಮಿಥುನ್‌ಕುಮಾರ್, ಜಿಪಂ ಸಿಇಒ ಸ್ನೇಹಲ್ ಲೋಖಂಡೆ, ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ಮುಂತಾದವರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net