

ಮಡಿಕೇರಿ: ಮುಂದಿನ ಪೀಳಿಗೆಗೆ ಉತ್ತಮ ಪರಿಸರ ಅಗತ್ಯ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯೂ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಕೊಡಗು ಪ್ರಾದೇಶಿಕ ಕಚೇರಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ವತಿಯಿಂದ ಶನಿವಾರ ನಗರದ ಎ.ಎಲ್.ಜಿ ಕ್ರೆಸೆಂಟ್ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ೨೦೨೪ ರ ಅಂಗವಾಗಿ ಜಿಲ್ಲೆಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆ ಕುರಿತು ಚಿತ್ರಕಲೆ ಹಾಗೂ ಪ್ರಬಂಧ ಸ್ಪರ್ಧಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ನಾವು ಪ್ರಾಕೃತಿಕ ಸಂಪನ್ಮೂಲಗಳನ್ನು ಸಂರಕ್ಷಣೆ ಮಾಡುವ ಮೂಲಕ ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ಕೊಡುಗೆಯಾಗಿ ನೀಡಬೇಕಿದೆ. ನಾವು ನೆಲ-ಜಲ, ಅರಣ್ಯ, ಪರಿಸರ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಪರಿಸರ ಮಾಲಿನ್ಯ ಉಂಟಾಗದ ರೀತಿಯಲ್ಲಿ ಎಚ್ಚರಿಕೆ ವಹಿಸುವುದು ಅಗತ್ಯ. ಪ್ರಾಕೃತಿಕ ಸಂಪನ್ಮೂಲ ಸಂರಕ್ಷಣೆಗೆ ಎಲ್ಲರೂ ಪಣ ತೊಡಬೇಕಿದೆ ಎಂದರು.
ಜಿಲ್ಲಾ ಪರಿಸರ ಅಧಿಕಾರಿ ಎಂ.ಜಿ.ರಘುರಾಮ್ ಮಾತನಾಡಿ, ವಿದ್ಯಾರ್ಥಿಗಳು ಶಾಲಾ ಹಂತದಲ್ಲಿಯೇ ಗಿಡಮರ, ನೆಲ-ಜಲ, ಪರಿಸರ, ಪ್ರಕೃತಿಯ ಮೇಲೆ ಪ್ರೇಮ ಮೂಡಿಸಿದರೆ ಭವಿಷ್ಯದಲ್ಲಿ ಪರಿಸರ ಸಂರಕ್ಷಣೆ ಸಾಧ್ಯವಾಗುತ್ತದೆ. ಜೂ.೫ ರಂದು ನಡೆಯಲಿರುವ ಪರಿಸರ ದಿನಾಚರಣೆಯ ರೂಪುರೇಷೆ ಕುರಿತು ಮಾಹಿತಿ ನೀಡಿದರು.
ಇಕೋ-ಕ್ಲಬ್‌ನ ಜಿಲ್ಲಾ ನೋಡಲ್ ಅಧಿಕಾರಿ ಟಿ.ಜಿ.ಪ್ರೇಮ ಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ಶಾಲಾ ಪರಿಸರದಲ್ಲಿ ಹೆಚ್ಚು ಸಸಿನೆಟ್ಟು ಬೆಳೆಸುವ ಮೂಲಕ ನೆಲ-ಜಲ ಸಂರಕ್ಷಣೆ, ಜೀವಿ-ವೈವಿಧ್ಯ ಹಾಗೂ ನೀರಿನ ಸಂರಕ್ಷಣೆಯಂತಹ ಪರಿಸರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಹಿನ್ನೆಲೆಯಲ್ಲಿ ಶಾಲೆಯಲ್ಲಿ ಪರಿಸರ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು ಎಂದರು.
ಪರಿಸರ ಸ್ಪರ್ಧೆಗಳಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸಿರುವ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ ಮಡಿಕೇರಿ ಕ್ಷೇತ್ರ ಶಿಕ್ಷಣಾಧಿಕಾರಿ ಡಾ ಬಿ.ಸಿ.ದೊಡ್ಡೇಗೌಡ ಮಾತನಾಡಿ, ವಿದ್ಯಾರ್ಥಿಗಳು ತಮ್ಮನ್ನು ಪರಿಸರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದರು.
ಕ್ರೆಸೆಂಟ್ ಶಾಲೆಯ ಪ್ರಭಾರ ಪ್ರಾಂಶುಪಾಲ ಸುಲ್ಹತ್, ಸ್ಕೌಟ್ಸ್-ಗೈಡ್ಸ್ ಸಂಸ್ಥೆಯ ಸಹ ಕಾರ್ಯದರ್ಶಿ ಬೊಳ್ಳಜಿರ ಬಿ.ಅಯ್ಯಪ್ಪ, ಸಂಸ್ಥೆಯ ಪ್ರಮುಖ ತರಬೇತುದಾರರಾದ ಕೆ.ಯು.ರಂಜಿತ್, ಮೈಥಿಲಿರಾವ್, ಸಂಸ್ಥೆಯ ಜಿಲ್ಲಾ ಸಂಘಟಕಿ ಯು.ಸಿ.ದಮಯಂತಿ, ಸಿ.ಆರ್.ಪಿ.ಗಳಾದ ಸಿ.ಡಿ.ಶೃತಿಶ್ರೀ, ಕಲ್ಪನ, ವಿವಿಧ ಶಾಲೆಗಳ ಶಿಕ್ಷಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.