ವನಮಹೋತ್ಸವ ಎಂದೂ ಕರೆಯುವ ವಿಶ್ವ ಪರಿಸರ ದಿನವನ್ನು ಪ್ರತಿ ವರ್ಷ ಜೂನ್ 5ರಂದು ವಿಶ್ವಾದ್ಯಂತ ಆಚರಿಸಲಾಗುತ್ತದೆ. 1974ರಿಂದ ಆಚರಿಸಲ್ಪಡುತ್ತಿರುವ ಪರಿಸರ ದಿನದಂದು ಪರಿಸರ ಕುರಿತು ಜಾಗೃತಿ ಮೂಡಿಸುವುದು, ಪರಿಸರವನ್ನು ಸಂರಕ್ಷಿಸುವ ಕಾರ್ಯಗಳಿಗೆ ಉತ್ತೇಜನ ನೀಡುವ ಉದ್ದೇಶವನ್ನು ವಿಶ್ವಸಂಸ್ಥೆ ಹೊಂದಿದೆ.ಜೂನ್ ತಿಂಗಳೆಂದರೆ ಅದಕ್ಕೆ ಒಂದು ವಿಶೇಷತೆ ಇದೆ. ಅದೇನೆಂದರೆ ವಿಶ್ವ ಪರಿಸರ ದಿನಾಚರಣೆ. ನಾವು ನಮ್ಮ ಪರಿಸರದ ಬಗ್ಗೆ ತಿಳಿಯುವ, ಅದರ ಮಹತ್ವ ಅರಿಯುವ ಹಾಗೂ ಇಂದು ಪರಿಸರಕ್ಕೆ ಆಗುತ್ತಿರುವ ಹಾನಿಯನ್ನು ಅರಿತು, ಅದರ ಸಂರಕ್ಷಣೆಯ ಬಗ್ಗೆಯೂ ಆಲೋಚಿಸಬೇಕಾದ ಮಹತ್ತರವಾದ ದಿನ. ಮಾನವ ಪರಿಸರದ ಶಿಶು, ಪರಿಸರವಿಲ್ಲದೆ ಮಾನವನ ಅಸ್ತಿತ್ವಕ್ಕೆ ಯಾವುದೇ ರೀತಿಯ ಬೆಲೆಯಿರುವುದಿಲ್ಲ. ಆದ್ದರಿಂದಲೇ ಪ್ರತಿಯೊಬ್ಬರೂ ಪರಿಸರದ ಬಗ್ಗೆ ಅರಿಯಬೇಕಾದ ಅವಶ್ಯಕತೆ, ಅನಿವಾರ್ಯತೆ ಎರಡೂ ಇದೆ.1972 ರಲ್ಲಿ ವಿಶ್ವಸಂಸ್ಥೆಯ ಘೋಷಣೆಯ ನಂತರ, 1973 ಜೂನ್ 5 ರಿಂದ ಪ್ರತಿವರ್ಷ ಈ ದಿನವನ್ನು ವಿಶ್ವ ಪರಿಸರ ದಿನವನ್ನಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ಈ ದಿನದ ವಿಶೇಷವೇನೆಂದರೆ ಎಲ್ಲರಿಗೂ ಪರಿಸರ ಸಂಬಂಧಿತ ವಿಷಯಗಳು ಪ್ರತಿಯೊಬ್ಬರಿಗೂ ತಿಳಿಯಬೇಕೆಂಬುದೇ ಆಗಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಪರಿಸರದ ಸ್ಥಿತಿ ಗತಿ ತಿಳಿಯುವುದು, ಸ್ವಚ್ಛ ಪರಿಸರದ ಅಗತ್ಯತೆಯನ್ನು ಅರಿಯುವುದು ಹಾಗೂ ಜನರಲ್ಲಿ ಪರಿಸರ ಸಂರಕ್ಷಣೆಯ ಜಾಗೃತಿಯನ್ನು ಜಾಗತಿಕ ಮಟ್ಟದಲ್ಲಿ ಮೂಡಿಸುವಂತಹ ಘನೋದ್ದೇಶಗಳು ಪರಿಸರ ಆಚರಣೆಯಲ್ಲಿ ಸೇರಿವೆ.