

ವಿಜಯವಾಣಿ ಸುದ್ದಿಜಾಲ ಗದಗ
ಕೇಂದ್ರ ಸರ್ಕಾರವು ನೀಡಿರುವ ರಸಗೊಬ್ಬರವನ್ನು ರೈತರಿಗೆ ಸರಿಯಾಗಿ ಹಂಚಿಕೆ ಮಾಡುತ್ತಿಲ್ಲ ಎಂದು ಆರೋಪಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಜಿಲ್ಲಾ ಟಕದ ವತಿಯಿಂದ ಗಾಂಧಿ ವೃತ್ತದಲ್ಲಿ ಗುರುವಾರ ಮಾನವ ಸರಪಳಿ ನಿಮಿರ್ಸಿ ಪ್ರತಿಭಟನೆ ನಡೆಸಲಾಯಿತು.
ರಾಜ್ಯದಲ್ಲಿ ರೈತರಿಗೆ ಕಳಪೆ ಬಿತ್ತನೆ ಬೀಜ ವಿತರಿಸಿರುವುದು ಮತ್ತು ರಸಗೊಬ್ಬರ ಕೊರತೆಗೆ ರಾಜ್ಯ ಸರ್ಕಾರವೇ ಹೊಣೆ ಎಂದು ಬಿಜೆಪಿ ಮುಖಂಡರು ಆರೋಪಿಸಿದರು. ಕಾಂಗ್ರೆಸ್ ಸರ್ಕಾರಕ್ಕೆ ಮತ್ತು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ನಾಡಿನ ರೈತರ ಬಗ್ಗೆ ಕಿಂಚಿತ್ತು ಕಾಳಜಿ ವಹಿಸುತ್ತಿಲ್ಲ. ರೈತರಿಗೆ ಒಳಿತಾಗುವಂತಹ ಯಾವುದೇ ಕ್ರಮವನ್ನು, ನಿರ್ಧಾರಗಳನ್ನು, ಯೋಜನೆಗಳನ್ನು ತೆಗೆದುಕೊಳ್ಳುತ್ತಿಲ್ಲ. ಕೃಷಿ ಸಚಿವ ಚೆಲುವನಾರಾಯಣ ಸ್ವಾಮಿ ನೈತಿಕ ಹೊಣೆ ಹೊತ್ತು ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ರಾಜ್ಯದಲ್ಲಿ ರಸಗೊಬ್ಬರ ಕಾಳದಂಧೆ ನಡೆಯುತ್ತಿದೆ. ರೈತರು ದುಪ್ಪಟ್ಟು ಹಣ ನೀಡಿ ಯುರಿಯಾ ಗೊಬ್ಬರವನ್ನು ಖರೀದಿ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ನೀಡದೆ ಕಳಪೆ ಬಿತ್ತನೆ ಬೀಜ ನೀಡಿದ್ದು, ರೈತರು ಕಂಗಾಲಾಗಿ ಪರದಾಡುತ್ತಿದ್ದಾರೆ. ಕೇಂದ್ರ ಸರ್ಕಾರ ಪೂರೈಕೆ ಮಾಡಿದ ಯೂರಿಯಾದಲ್ಲಿ 2 ಲಕ್ಷ ಟನ್ ಯೂರಿಯಾ ಕಾಳಸಂತೆಯಲ್ಲಿ ಮಾರಾಟ ಮಾಡಲಾಗಿದೆ. ಇದರಿಂದ ರೈತರಿಗೆ ಯೂರಿಯಾ ಕೊರತೆ ಕಾಡುತ್ತಿದೆ. ಕೇಂದ್ರದ ಪೂರೈಕೆಯನ್ನು ರಾಜ್ಯ ಸರ್ಕಾರ ಸಮಪರ್ಕವಾಗಿ ಬಳಸುತ್ತಿಲ್ಲ ಎಂದು ಬಿಜೆಪಿ ಮುಖಂಡರು ಆರೋಪಿಸಿದರು.
ಬಿ. ಎಸ್. ಯಡಿಯೂರಪ್ಪ ಅವರು ಸಿಎಂ ಆಗಿದ್ದ ಸಂದರ್ಭದಲ್ಲಿ ಬಫರ್ ಸ್ಟಾಕಿಗೆ 1000 ಕೋಟಿ ರೂ. ಗಳನ್ನು ನೀಡುತ್ತಿದ್ದರು. ಆದರೆ ಸಿದ್ದರಾಮಯ್ಯ ಅವರ ಸರ್ಕಾರ ಬಂದ ಮೇಲೆ ಬಫರ್ ಸ್ಟಾಕಿಗೆ ಮೀಸಲಿರಿಸಿರುವ ಹಣದ ಪ್ರಮಾಣವನ್ನು ಇಳಿಸಿ ಪ್ರಸ್ತುತ 400 ಕೋಟಿ ರೂ. ನೀಡಿದ್ದಾರೆ. ಸಂಗ್ರಹಕ್ಕೆ ನೀಡಬೇಕಿದ್ದ 600 ಕೊಟಿ ರೂ. ಗಳಷ್ಟು ಹಣವನ್ನು ಕಾಂಗ್ರೆಸ್ ಸರ್ಕಾರ ಕಡಿಮೆ ಮಾಡಿದೆ. ರಾಜ್ಯ ಸರ್ಕಾರ ಕೂಡಲೇ ಹಿಂದಿನಂತೆ ಹಣ ನೀಡಬೇಕೆಂದು ಆಗ್ರಹಿಸಿದರು.
ರೈತರು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಕೃಷಿ ಸಚಿವರು ತಕ್ಷಣ ಜಾಗೃತರಾಗಿ ಕಳಪೆ ಬಿತ್ತನೆ ಬೀಜ ಮತ್ತು ಕಲಬೆರಕೆ ಗೊಬ್ಬರ ನೀಡುವ ಏಜೆನ್ಸಿಗಳನ್ನು ಗುರುತಿಸಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಬೇಕು. ಯೂರಿಯಾ ಗೊಬ್ಬರ ಸಮಪರ್ಕವಾಗಿ ಪೂರೈಕೆ ಮಾಡಬೇಕು ಎಂದು ಆಗ್ರಹಿಸಿದರು.