

ವಿಜಯವಾಣಿ ಸುದ್ದಿಜಾಲ ಗದಗ
ಜಿಲ್ಲೆಯಲ್ಲಿ 2025 ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ- 2 ಪರೀಕ್ಷೆಗಳು ಮೇ 26 ರಿಂದ ಜೂನ್ 2 ರವರೆಗೆ ಬೆಳಗ್ಗೆ 10 ಗಂಟೆಯಿಂದದ ಮಧ್ಯಾಹ್ನ 1.45 ಗಂಟೆಯವರೆಗೆ ನಡೆಯಲ್ಲಿದ್ದು, ಪರೀಕ್ಷೆಗಳನ್ನು ವ್ಯವಸ್ಥಿತವಾಗಿ ಅಚ್ಚುಕಟ್ಟಾಗಿ ನಡೆಸಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ್ ಹೇಳಿದರು.
ಗದಗ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಎಸ್ಸೆಸ್ಸೆಲ್ಸಿ ಪರೀೆ ಕುರಿತು ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪರೀಕ್ಷೆಗಳಲ್ಲಿ ಯಾವುದೇ ಅಕ್ರಮಗಳು ಅವ್ಯವಹಾರಗಳು ನಡೆಯದಂತೆ ನೋಡಿಕೊಳ್ಳಬೇಕು. ಜಿಲ್ಲೆಯ ಒಟ್ಟು 20 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ. ಅಲ್ಲಿ ಕುಡಿಯುವ ನೀರು, ವಿದ್ಯುತ್ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಲಭ್ಯಗಳು ಇರುವಂತೆ ನೋಡಿಕೊಳ್ಳಬೇಕು. ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು ಪರೀಕ್ಷಾ ಅವಧಿಯಲ್ಲಿ ಯಾವುದೇ ಲೋಪ ದೋಷಗಳಾಗದಂತೆ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ್ ನಿರ್ದೇಶನ ನೀಡಿದರು.
ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್. ಎಸ್. ಬುರುಡಿ ಮಾತನಾಡಿ, ಒಟ್ಟು 5532 ಅಭ್ಯಥಿರ್ಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಕೇಂದ್ರಗಳಲ್ಲಿ ಮೂಲಭೂತ ಸೌಲಭ್ಯ ಒದಗಿಸಲು ಕ್ರಮ ವಹಿಸಲಾಗಿದೆ. ಪರೀಕ್ಷೆಗಳು ಸುಗಮವಾಗಿ ನಡೆಯಲು ಸಕಲ ಸಿದ್ಧತೆಗೆ ಕ್ರಮ ವಹಿಸಲಾಗಿದೆ ಎಂದು ಸಭೆಗೆ ತಿಳಿಸಿದರು.
ಸಭೆಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತ ಸೂಕ್ತ ಪೊಲೀಸ ಬಂದೋಬಸ್ತ, ಮಾರ್ಗಾಧಿಕಾರಿಗಳ ವಾಹನ ವ್ಯವಸ್ಥೆ , ಕುರಿತು ಚಚಿರ್ಸಲಾಯಿತು. ಸಭೆಯಲ್ಲಿ ಪರೀಕ್ಷಾ ಕೇಂದ್ರ ಮುಖ್ಯಸ್ಥರು, ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.