

ನರೇಗಾ ಹೊರಗುತ್ತಿಗೆ ಸಿಬ್ಬಂದಿಗಳ 6 ತಿಂಗಳ ಸಂಬಳ ಬಾಕಿ
ವಿಜಯವಾಣಿ ಸುದ್ದಿಜಾಲ ಗದಗ
ಕಳೆದ 6 ತಿಂಗಳಿಂದ ವೇತನ ಪಾವತಿಯಾಗದ ಹಿನ್ನೆಲೆ ಜು. 8 ರಿಂದ ಎಲ್ಲ ನರೇಗಾ ಕಾರ್ಯಗಳನ್ನು ಸ್ಥಗಿತಗೊಳಿಸಿ ಅಸಹಕಾರ ಚಳುವಳಿ ಮಾಡಲು ನಿರ್ಧರಿಸಲಾಗಿದೆ ಎಂದು ಗದಗ ತಾಲೂಕು ಐಇಸಿ ಸಿಬ್ಬಂದಿ ವಿರೇಶ ಬಸನಗೌಡ್ರ ಹೇಳಿದರು.
ವೇತನ ನಿಡುವಂತೆ ಒತ್ತಾಯಿಸಿ ಶನಿವಾರ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಯ್ಯ ಕೊರವನವರ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ಕೂಲಿಕಾರರಿಗೆ ನರೇಗಾ ಕೆಲಸ ಕೊಡಿಸುವುದು, ಯೋಜನೆಯಡಿ ಹಳ್ಳಿಗಳಲ್ಲಿ ಆಸ್ತಿ ಸೃಜನೆಗಳಲ್ಲಿ ನರೇಗಾ ನೌಕರರ ಪಾತ್ರ ಬಹುಮುಖ್ಯವಾಗಿದೆ. ಆದರೆ, ನೌಕರರಿಗೆ ಪ್ರತಿ ತಿಂಗಳು ವೇತನ ಸರಿಯಾಗಿ ಆಗದೆ ತುಂಬಾ ಸಮಸ್ಯೆ ಎದುರಿಸುತ್ತಿದ್ದಾರೆ. ಮಕ್ಕಳ ಶಾಲಾ ದಾಖಲಾತಿ, ಕುಟುಂಬದ ನಿರ್ವಹಣೆ, ಕೌಟುಂಬಿಕ ಆರೋಗ್ಯ ಸಮಸ್ಯೆಗೆ ವೇತನ ಪಾವತಿ ಅಗತ್ಯವಿದೆ. ಪಾವತಿಯಾಗದೆ ಇರುವುದು ನಾನಾ ಸಮಸ್ಯೆ ಕಾರಣವಾಗಿದೆ ಎಂದರು.
ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯಡಿ ತಾಲೂಕು ಹಂತದಲ್ಲಿ ಟಿಐಇಸಿ, ಟಿಸಿ, ಟಿಎಂಐಎಸ್, ಟಿಎಇ (ಸಿವಿಲ್, ತೋಟಗಾರಿಕೆ, ರೇಷ್ಮೆ, ಅರಣ್ಯ, ಕೃಷಿ) ವಿಭಾಗದಲ್ಲಿ ಹಾಗೂ ಬಿಎಫ್ಟಿ ಸೇರಿ ವಿವಿಧ ಹುದ್ದೆಗಳಲ್ಲಿ 25ಕ್ಕೂ ಹೆಚ್ಚು ಜನ ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ಎಲ್ಲ ನರೇಗಾ ಯೋಜನೆಯ ಸಿಬ್ಬಂದಿಗೆ ಕಳೆದ 6 ತಿಂಗಳಿಂದ ವೇತನ ಪಾವತಿಯಾಗಿಲ್ಲ. ಸರ್ಕಾರ ಕೂಡಲೇ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕು. ವೇತನ ಪಾವತಿ ವಿಳಂಬವಾಗದಂತೆ ನೋಡಿಕೊಳ್ಳಬೇಕು. ಈ ಹಿಂದೆಯೂ ಸರ್ಕಾರದ ಗಮನಕ್ಕೆ ತರಲು ಪ್ರತಿಭಟನೆ ಮಾಡಿದ್ದೇವೆ. ಈಗ ನರೇಗಾ ಕಾಮಗಾರಿಯನ್ನು ಸ್ಥಗಿತಗೊಳಿಸಿ ಅಸಹಕಾರ ಚಳುವಳಿ ಮಾಡಲು ನಿರ್ಧರಿಸಿದ್ದೇವೆ ಎಂದರು.
ಚಂದ್ರಶೇಖರ ಹಳ್ಳಿ, ನವೀನ ಬಸರಿ, ಪ್ರದಿಪ ನರೇಗಲ್ಲ, ಮಂಜುನಾಥ ಕುಲಕಣಿರ್, ಸೋಮಶೇಖರ ತುರಬಿನ, ಸಿದ್ದಪ್ಪ ಸೋಮನಕಟ್ಟಿ ಇತರರು ಇದ್ದರು.