ಜಿಲ್ಲಾ ನರೇಗಾ ನೌಕರರ ಸಂಘದ ಜಿಲ್ಲಾಧ್ಯಕ್ಷ ಸುರೇಶ ಬಾಳಿಕಾಯಿ ಮಾತನಾಡಿ, ಗ್ರಾಮೀಣಾಭಿವೃದ್ಧಿಯಲ್ಲಿ ಉದ್ಯೋಗ ಖಾತರಿ ಯೋಜನೆ ಮಹತ್ತರ ಪಾತ್ರ ವಹಿಸಿದೆ. ಕೂಲಿಕಾರರಿಗೆ ನರೇಗಾ ಕೆಲಸ ಕೊಡಿಸುವುದು, ಯೋಜನೆಯಡಿ ಹಳ್ಳಿಗಳಲ್ಲಿ ಆಸ್ತಿ ಸೃಜನೆಗಳಲ್ಲಿ ನರೇಗಾ ನೌಕರರ ಪಾತ್ರ ಬಹುಮುಖ್ಯವಾಗಿದೆ. ಆದರೆ, ನೌಕರರಿಗೆ ಪ್ರತಿ ತಿಂಗಳು ವೇತನ ಸರಿಯಾಗಿ ಆಗದೆ ತುಂಬಾ ಸಮಸ್ಯೆ ಎದುರಿಸುತ್ತಿದ್ದಾರೆ. ಮಕ್ಕಳ ಶಾಲಾ ದಾಖಲಾತಿ, ಕುಟುಂಬದ ನಿರ್ವಹಣೆ, ಕೌಟುಂಬಿಕ ಆರೋಗ್ಯ ಸಮಸ್ಯೆಗೆ ವೇತನ ಪಾವತಿಯಾಗದೆ ಇರುವುದು ನಾನಾ ಸಮಸ್ಯೆ ಕಾರಣವಾಗಿದೆ. ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯಡಿ ಜಿಲ್ಲಾ ಹಂತದಲ್ಲಿ ಎಡಿಪಿಸಿ, ಡಿಎಂಐಎಸ್, ಡಿಐಇಸಿ, ಡಿಎಎಂ ತಾಲೂಕು ಹಂತದಲ್ಲಿ ಟಿಐಇಸಿ, ಟಿಸಿ, ಟಿಎಂಐಎಸ್, ಟಿಎಇ (ಸಿವಿಲ್, ತೋಟಗಾರಿಕೆ, ರೇಷ್ಮೆ, ಅರಣ್ಯ, ಕೃಷಿ) ವಿಭಾಗದಲ್ಲಿ ಹಾಗೂ ಗ್ರಾಮ ಕಾಯಕ ಮಿತ್ರರು ಸೇರಿ ವಿವಿಧ ಹುದ್ದೆಗಳಲ್ಲಿ 130ಕ್ಕೂ ಹೆಚ್ಚು ಜನ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಎಲ್ಲ ನರೇಗಾ ಯೋಜನೆಯ ಸಿಬ್ಬಂದಿಗೆ ಕಳೆದ 5 ತಿಂಗಳಿಂದ ವೇತನ ಪಾವತಿಯಾಗಿಲ್ಲ ಎಂದು ತಿಳಿಸಿದರು.