

ಗದಗ: ಏಪ್ರಿಲ್ 19ರಂದು ಗದಗ ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿದಂತೆ ಮಲಗಿದ್ದಲ್ಲೇ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹತ್ವದ ಮಾಹಿತಿಯನ್ನು ನೀಡಿದ್ದಾರೆ.
ಈ ಕುರಿತು ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ, ಏಪ್ರಿಲ್ 19ರಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಐವರು ಆರೋಪಿಗಳು ಕರತ್ಯ ಎಸಗಿ ಪರಾರಿಯಾಗಿದ್ದಾರೆ. ಆರೋಪಿಗಳ ಚಲನವಲನ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಐದು ತಂಡ ರಚಿಸಿ ಹಂತಕರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.
ಕೌಟುಂಬಿಕ ಹಾಗೂ ವ್ಯವಹಾರಿಕ ಹಿನ್ನೆಲೆಯಲ್ಲಿ ಕೊಲೆ ನಡೆದಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಯುತ್ತಿದ್ದು, ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಿ ಮತ್ತಷ್ಟು ಮಾಹಿತಿಯನ್ನು ಹಂಚಿಕೊಳ್ಳುತ್ತೇವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ ತಿಳಿಸಿದ್ದಾರೆ.
ಗದಗ ಉರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರ ಮನೆಯಲ್ಲಿ ಏಪ್ರಿಲ್ 19ರಂದು ಮಲಗಿದ್ದಲ್ಲೇ ಅವರ ಪುತ್ರ ಕಾರ್ತಿಕ್ ಬಾಕಳೆ (27), ಪರಶುರಾಮ (55), ಪತ್ನಿ ಲಕ್ಷ್ಮೀ (45), ಪುತ್ರಿ ಆಕಾಂಕ್ಷಾ (16) ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಸುನಂದಾ ಅವರ ಪುತ್ರ ಕಾರ್ತಿಕ್ ಮದುವೆ ನಿಗದಿಪಡಿಸುವ ಸಂಬಂಧ ಕೊಪ್ಪಳದಿಂದ ಸಂಬಂಧಿಕರು ಆಗಮಿಸಿದ್ದ ವೇಳೆ ದುರ್ಘಟನೆ ನಡೆದಿತ್ತು.