

ಗದಗ: ಇದೇ ಮಾರ್ಚ್ 8 ಮತ್ತು 9 ರಂದು ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಅಚ್ಚುಕಟ್ಟಾಗಿ ನಡೆಯಲಿದ್ದು, ಇದನ್ನು ಯಶಸ್ವಿಯಾಗಿ ಆಯೋಜಿಸಲು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಅವರು ಸೂಚನೆ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಆಯೋಜನೆ ಕುರಿತಂತೆ ಜರುಗಿದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನೌಕರರೆಲ್ಲರೂ ಈ ಕ್ರೀಡಾಕೂಟದಲ್ಲಿ ಸಕ್ರಿಯವಾಗಿ ಭಾಗವಹಿಸಿ ತಮ್ಮ ಕ್ರೀಡಾ ಸ್ಪೂರ್ತಿಯನ್ನು ಮೆರೆಯಬೇಕು. ಈ ಮೂಲಕ ಆರೋಗ್ಯ ವೃದ್ಧಿಯಾಗುವುದಲ್ಲದೆ, ಸರ್ಕಾರೀ ನೌಕರರಲ್ಲಿ ಒಗ್ಗಟ್ಟಿನ ಮನೋಭಾವವೂ ಹೆಚ್ಚಳವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಕ್ರೀಡಾ ಸ್ಪರ್ಧೆಗಳನ್ನು ಹಮ್ಮಿಕೊಳ್ಳುವುದರ ಜೊತೆಗೆ, ಸಂಜೆ ವೇಳೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನೂ ಆಯೋಜಿಸಲಾಗಿದ್ದು, ಇದು ನೌಕರರ ಪ್ರತಿಭೆ ಪ್ರದರ್ಶಿಸಲು ಉತ್ತಮ ವೇದಿಕೆ ಒದಗಿಸಲಿ ಎಂದರು.
ಈ ಕ್ರೀಡಾಕೂಟ ಯಶಸ್ವಿಯಾಗಿ ನಡೆಯಲು ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳು ಸಹಕರಿಸಬೇಕೆಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ಕ್ರೀಡಾಕೂಟ ಆಯೋಜನೆ ಕುರಿತಂತೆ ಸಂಬಂಧಿಸಿದ ಇಲಾಖೆಗಳು ಅಗತ್ಯದ ಕ್ರಮಗಳನ್ನು ಕೈಗೊಳ್ಳುವ ಮೂಲಕ ಅಚ್ಚುಕಟ್ಟಾಗಿ ಕ್ರೀಡಾಕೂಟ ಜರಗುವಂತೆ ನಿಗಾ ವಹಿಸಲು ಸೂಚಿಸಿದರು.
ಮಾರ್ಚ್ 8 ಹಾಗೂ 9ರಂದು ಕ್ರೀಡಾಕೂಟ ಆಯೋಜಿಸಿ ಅಚ್ಚುಕಟ್ಟಾಗಿ ಅತಿಥಿಗಳಿಗೆ ಆಹ್ವಾನಿಸಿ ಕ್ರೀಡಾಪಟುಗಳು ಕ್ರೀಡಾ ಸ್ಪೂರ್ತಿ ಮೂಲಕ ಗಮನ ಸೆಳೆಯುವಂತಾಗಬೇಕು ಎಂದು ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ ಅವರು ಹೇಳಿದರು.
ರಾಜ್ಯ ಸರ್ಕಾರಿ ನೌಕರರ ಸಂಘದ ಹಿರಿಯ ಉಪಾಧ್ಯಕ್ಷ ರವಿ ಗುಂಜಿಕರ ಮಾತನಾಡಿ, ಗದಗ ಜಿಲ್ಲೆಯಲ್ಲಿ ಆಯೋಜಿಸುವ ನೌಕರರ ಕ್ರೀಡಾಕೂಟವು ಎಲ್ಲರಿಗೂ ನೆನಪಿಡುವಂತಾಗಬೇಕು. ಉತ್ತಮ ಆಯೋಜನೆಯ ಮೂಲಕ ನೌಕರರಲ್ಲಿ ಅಡಗಿರುವ ಪ್ರತಿಭೆಯ ಅನಾವರಣಕ್ಕೆ ವೇದಿಕೆಯಾಗಬೇಕು. ಆ ಮೂಲಕ ಗದಗ ಜಿಲ್ಲೆಯ ಸರ್ಕಾರಿ ನೌಕರರು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಲು ಈ ಕ್ರೀಡಾಕೂಟ ಸಹಕಾರಿಯಾಗಲಿ ಎಂದರು.
ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಶರಣು ಗೋಗೇರಿ ಮಾತನಾಡಿ ಪ್ರತಿವರ್ಷದಂತೆ ಈ ವರ್ಷವೂ ಸಹ ನೌಕರರು ಕ್ರೀಡಾಕೂಟದಲ್ಲಿ ಭಾಗವಹಿಸಲು ನಿಗದಿಪಡಿಸಿದ ವೆಬ್ಸೈಟ್ ಮೂಲಕ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂದರು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ ಬಿ ಸಂಕದ, ಉಪ ವಿಭಾಗಾಧಿಕಾರಿ ಗಂಗಪ್ಪ ಸೇರಿದಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು, ಜಿಲ್ಲಾ ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಸಿಬ್ಬಂದಿಗಳು ಉಪಸ್ಥಿತರಿದ್ದರು