

ಗದಗ: ಮತದಾನದ ಮಹತ್ವ , ಮತದಾನದ ಮೌಲ್ಯ ಹಾಗೂ ನೈತಿಕ ಮತದಾನದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವಲ್ಲಿ ಗದಗ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಈಗಾಗಲೇ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಆ ದಿಸೆಯಲ್ಲಿ ಏಪ್ರಿಲ್ 28 ರಂದು “ ನಮ್ಮ ನಡೆ ಮತಗಟ್ಟೆ ಕಡೆಗೆ “ಕಾರ್ಯಕ್ರಮವನ್ನು ರಾಷ್ಟ್ರೀಯ ಹಬ್ಬದ ಮಾದರಿಯಲ್ಲಿ ಹಮ್ಮಿಕೊಳ್ಳಲು ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾದ ಎಸ್. ಭರತ್ ಅವರು ಸೂಚಿಸಿದ್ದಾರೆ.
ನಗರದ ಕೇಸ್ವಾನ್ ಸಭಾಂಗಣದಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಸ್ವೀಪ್ ಸಮಿತಿಯ ಅಧಿಕಾರಿಗಳ ಜೊತೆ ಸಂವಾದ ನಡೆಸಿದ ಜಿ.ಪಂ.ಸಿಇಒ ಅವರು ಏಪ್ರಿಲ್ 28 ರಂದು ನಮ್ಮ ನಡೆ ಮತಗಟ್ಟೆ ಕಡೆಗೆ ಕಾರ್ಯಕ್ರಮದ ಸಂದರ್ಭದಲ್ಲಿ ತಮ್ಮ ತಮ್ಮ ವ್ಯಾಪ್ತಿಯಲ್ಲಿ ಮತಗಟ್ಟೆಗಳನ್ನು ಪರಿಚಯಿಸುವ ಕೆಲಸ ಆಗಬೇಕು ಎಂದು ಅವರು ಎಸ್. ಭರತ್ ಅವರು ಸಲಹೆ ಮಾಡಿದರು.
ಜಿಲ್ಲೆಯಲ್ಲಿ 961 ಮತಗಟ್ಟೆ ಕೇಂದ್ರಗಳು ಇದ್ದು ಅಗತ್ಯ ಮೂಲಸೌಲಭ್ಯಗಳ ಬಗ್ಗೆ ಮತ್ತೊಮ್ಮೆ ಖಾತರಿ ಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಲೋಕಸಭಾ ಸಾರ್ವತ್ರಿಕ ಚುನಾವಣೆ-2019ರಲ್ಲಿ ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರವಾರು ಕಡಿಮೆ ಮತದಾನವಾಗಿರುವ ಮತಗಟ್ಟೆಗಳಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ಕೆಲಸವಾಗಬೇಕು. ಹಾಗೆಯೇ ನಗರ/ಗ್ರಾಮೀಣ ಮತಗಟ್ಟೆ ಮತದಾನದ ಅರಿವು ಮೂಡಿಸುವ ಕಾರ್ಯಕ್ರಮಗಳ ಆಯೋಜನೆ ಮಾಡುವಂತೆ ಜಿ.ಪಂ.ಸಿಇಒ ಅವರು ಹೇಳಿದರು.
ತಾಲೂಕು ಮಟ್ಟದ ಕಾರ್ಯಕ್ರಮ ಆಯೋಜನೆ ಸಂಬಂಧ ಕೂಡಲೇ ಪಟ್ಟಿ ವಿವರ ನೀಡುವಂತೆ ತಾಲೂಕು ಪಂಚಾಯತ್ ಇಒ ಗಳಿಗೆ ಜಿ.ಪಂ. ಸಿಇಒ ಅವರು ಸೂಚಿಸಿದರು. ಕಾರ್ಯಕ್ರಮ ಆಯೋಜನೆ ಸಂಬಂಧ ಹತ್ತಿರದ ಪೊಲೀಸ ಠಾಣೆಯ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಮಾಹಿತಿ ನೀಡಬೇಕು. ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿ ಜೊತೆಗೆ ಎಲ್ಲ ಇಲಾಖೆಗಳ ಸಹಕಾರ ಪಡೆದು ಕಾರ್ಯಕ್ರಮ ಆಯೋಜನೆಗೆ ಮುಂದಾಗಬೇಕು ಎಂದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸ್ಥಳೀಯ ಸಂಸ್ಥೆಗಳು ಹೀಗೆ ಎಲ್ಲರೂ ಕೈಜೋಡಿಸಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವುದರ ಮೂಲಕ ಜಿಲ್ಲೆಯಲ್ಲಿ ಶೇಕಡಾವಾರು ಮತದಾನ ಹೆಚ್ಚಳಕ್ಕೆ ಶ್ರಮಿಸಬೇಕು ಎಂದು ಜಿ.ಪಂ.ಸಿಇಒ ಅವರು ಸೂಚಿಸಿದರು. ಜಿ.ಪಂ. ಉಪಕಾರ್ಯದರ್ಶಿ ಹಾಗೂ ಸ್ವೀಪ್ ಸಮಿತಿ ಜಿಲ್ಲಾ ನೋಡಲ್ ಅಧಿಕಾರಿ ಸಿ. ಬಿ. ದೇವರಮನಿ ಅವರು ಸ್ವೀಪ್ ಸಮಿತಿ ವತಿಯಿಂದ ಏರ್ಪಡಿಸಲಾಗಿರುವ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಹಲವು ಮಾಹಿತಿ ನೀಡಿದರು.
ಜಿ.ಪಂ. ಮುಖ್ಯ ಲೆಕ್ಕಾಧಿಕಾರಿ, ಅಮಿನಸಾಬ್ ಅತ್ತಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಎಂ.ಎ. ರಡ್ಡೇರ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಜಿ.ಎನ್. ಕುರ್ತಕೋಟಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಶರಣು ಗೋಗೇರಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ. ಎಸ್.ಎಸ್.ನೀಲಗುಂದ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ರವಿ ಗುಂಜೀಕರ್ , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ಪಿ.ವೈ. ಶೆಟ್ಟೆಪ್ಪನವರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
ಮತದಾನ ಜಾಗೃತಿ ನಿಮಿತ್ತ ಮಾನವ ಸರಪಳಿ ಕಾರ್ಯಕ್ರಮ
ಗದಗ: ಲೋಕಸಭಾ ಚುನಾವಣೆಗಳು-2024 ರ ಸಂಬಂಧ ಗದಗ ಜಿಲ್ಲೆಯ ವ್ಯಾಪ್ತಿಯಲ್ಲಿ ಮೇ-07 ರಂದು ಮತದಾನ ಜರುಗಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಪ್ರೇರೇಪಿಸುವ ಸಲುವಾಗಿ ಜಿ.ಪಂ. ಸಿಇಒ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರ ನಿರ್ದೇಶನದಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಸ್ವೀಪ್ ಕಾರ್ಯಕ್ರಮವಾಗಿ ಏಪ್ರಿಲ್ 19 ರಂದು ಬೆಳಿಗ್ಗೆ 9 ಗಂಟೆಗೆ ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದ ಆವರಣದಲ್ಲಿ ಯುವ ಮತದಾರರಿಂದ ಮತದಾನದ ಜಾಗೃತಿ ನಿಮಿತ್ಯ ಮಾನವ ಸರಪಳಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಜಿಲ್ಲೆಯಲ್ಲಿನ ಪದವಿ ಮಹಾವಿದ್ಯಾಲಯಗಳ ವಿದ್ಯಾರ್ಥಿಗಳು, ಬಿ.ಇ.ಡಿ. ಕಾಲೇಜು ವಿದ್ಯಾರ್ಥಿಗಳು, ಎನ್.ಎಸ್.ಎಸ್. ವಿದ್ಯಾರ್ಥಿಗಳು, ಎನ್.ಸಿ.ಸಿ. ವಿದ್ಯಾರ್ಥಿಗಳು, ಯುವ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ವಿನಂತಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ.ಸಿ.ಇ.ಒ, ಜಿಲ್ಲಾ ಪೆÇೀಲೀಸ್ ವರಿಷ್ಠಾಧಿಕಾರಿಗಳು ಹಾಗೂ ಗದಗ ಜಿಲ್ಲೆಯ ಚುನಾವಣಾ ರಾಯಭಾರಿಗಳು ಭಾಗವಹಿಸಲಿದ್ದಾರೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ಶರಣು ಗೋಗೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.