SSLC ಪರೀಕ್ಷೆಗೆ ಯೋಜನಾಬದ್ಧ ತಯಾರಿ ಇರಲಿ

SSLC
SSLC
Published on
ಲಕ್ಷ್ಮೇಶ್ವರ: ಸಾಧನೆ ಸಾಧಕನ ಸ್ವತ್ತು. ಆದರೆ ಸಾಧನೆ ಮಾಡುವ ಛಲ ವಿದ್ಯಾರ್ಥಿಗಳಲ್ಲಿ ಬರಬೇಕು. ವಿದ್ಯಾರ್ಥಿಗಳು (SSLC ) ವಿದ್ಯಾಭ್ಯಾಸಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.
ಪಟ್ಟಣದ ಕರೆಗೋರಿ ಸಮೀಪದ ಜ.ವೀರಗಂಗಾಧರ ಸರ್ಕಾರಿ ಪ್ರೌಢಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮತ್ತು ಜ. ವೀರಗಂಗಾಧರ ಸರ್ಕಾರಿ ಪ್ರೌಢಶಾಲೆಯ ಸಹಯೋಗದಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿರುವ ಪ್ರೇರಣಾ ಶಿಬಿರ ಬುಧವಾರ ಉದ್ಘಾಟಿಸಿ ಮಾತನಾಡಿದರು.
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಉತ್ತಮ ಸಾಧನೆ ಮಾಡುವ ನಿಟ್ಟನಲ್ಲಿ ಇಲಾಖೆ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಿದೆ. ವಿದ್ಯಾರ್ಥಿಗಳ ಸಾಧನೆಯ ಉದ್ದೇಶದಿಂದ ಎನ್ನುವುದನ್ನು ವಿದ್ಯಾರ್ಥಿಗಳು ಅರ್ಥ ಮಾಡಿಕೊಳ್ಳಬೇಕು. ವಿದ್ಯಾರ್ಥಿಗಳು ಶ್ರಮಪಟ್ಟು ಓದುವ, ನಿರಂತರ ಅಧ್ಯಯನ ಮೂಲಕ ಸಾಮಾನ್ಯರ ಗುಂಪಿನಿಂದ ಸಾಧಕರ ಗುಂಪಿಗೆ ಸೇರಬೇಕು, ಏಕಾಗ್ರತೆ ಮತ್ತು ಯೋಜನಾಬದ್ಧವಾಗಿ ತಯಾರಿ ಮಾಡಿಕೊಳ್ಳಬೇಕು. ಎಸ್ಸೆಸ್ಸೆಲ್ಸಿ ಪರೀಕ್ಷಾ ಸಿದ್ಧತೆಗೆ ಕ್ಷಣಕಾಲವೂ ವ್ಯಯ ಮಾಡದೆ ಉನ್ನತ ಗುರಿಯೊಂದಿಗೆ ಸಾಗಿದರೆ ಸಾಧನೆ ಸಾಧ್ಯ ಎಂದು ಹೇಳಿದರು.
ಪ್ರತಿ ಅಂಕವು ಹೆಚ್ಚು ಮಹತ್ವದ್ದಾಗಿದ್ದು, ರಾಜ್ಯಮಟ್ಟದಲ್ಲಿ ಸ್ಪರ್ಧೆ ಮಾಡುವ ನಿಟ್ಟಿನಲ್ಲಿ ಇಲ್ಲಿನ ಮಕ್ಕಳು ಪರೀಕ್ಷೆಗೆ ಸಿದ್ಧರಾಗಬೇಕು, ಕ್ಷೇತ್ರದಲ್ಲಿ ಎಸ್ಸೆಸ್ಸೆಲ್ಸಿಯಲ್ಲಿ ಅತಿ ಹೆಚ್ಚು ಅಂಕಗಳಿಸುವ ವಿದ್ಯಾರ್ಥಿಗಳಿಗೆ ಉತ್ತಮ ನಗದು ಬಹುಮಾನ ನೀಡುವ ಮೂಲಕ ಪ್ರೋತ್ಸಾಹ ನೀಡಲಾಗುತ್ತಿದೆ. ಬಹುಮಾನದ ಮೊತ್ತ ಅಧಿಕವಾಗಿರಲಿದ್ದು, ಇದು ಮುಂದಿನ ವಿದ್ಯಾಭ್ಯಾಸಕ್ಕೆ ನೆರವು ನೀಡಲಿದೆ ಎಂದು ಹೇಳಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯಕ್ ಮಾತನಾಡಿ, ಈ ಬಾರಿ ಪರೀಕ್ಷಾ ಫಲಿತಾಂಶ ಸುಧಾರಣೆಗಾಗಿ ಹಲವು ಕ್ರಿಯಾ ಯೋಜನೆಗಳನ್ನು ರೂಪಿಸಲಾಗಿದೆ, ಇಂದು ಅನೇಕರು ಕನ್ನಡ ಶಾಲೆ, ಕನ್ನಡ ಮಾಧ್ಯಮದಲ್ಲಿಯೇ ಓದಿ ಸಾಧನೆ ಮಾಡಿರುವ ಅನೇಕರು ನಿಮ್ಮ ಎದುರಿನಲ್ಲಿಯೇ ಇದ್ದಾರೆ. ಅವರು ನಿಮಗೆ ಮಾದರಿ ವ್ಯಕ್ತಿಗಳಾಗಬೇಕು ಎಂದು ಹೇಳಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net