ಸತ್ಯ ಹಾಗೂ ಅಹಿಂಸಾ ಮಾರ್ಗ ಪ್ರತಿಪಾದಿಸಿದ ಮಹಾನ್ ಚೇತನ ಮಹಾತ್ಮ ಗಾಂಧೀಜಿ

gandhi
Published on

ಮಡಿಕೇರಿ:

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಸತ್ಯ ಹಾಗೂ ಅಹಿಂಸೆಯ ಮೂಲಕ ಇಡೀ ವಿಶ್ವಕ್ಕೆ ಬೆಳಕು ತೊರಿಸಿದ ಮಾಹಾನ್ ಚೇತನ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ಪ್ರತಿಪಾದಿಸಿದ್ದಾರೆ.

ಸತ್ಯ ಹಾಗೂ ಅಹಿಂಸೆ ಎಂಬ ಅಸ್ತ್ರಗಳಿಂದ ಬ್ರಿಟೀಷರ ವಿರುದ್ದ ಹೋರಾಡಿದ ಮಹಾತ್ಮ ಗಾಂಧೀಜಿ, ಈ ಎರಡೂ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡಿದ್ದರು. ಇವರ ಹಾದಿಯಲ್ಲೇ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀಯವರು ನಡೆದರು. ನೈತಿಕತೆಗೆ ಗಾಂಧೀಜಿ ಹಾಗೂ ಶಾಸ್ತ್ರೀಜಿಯವರು ಮಾದರಿಯಾಗಿದ್ದರು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅವರು ನುಡಿದರು.

ಜಿಲ್ಲಾಡಳಿತ, ಜಿ.ಪಂ. ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ, ಕನ್ನಡ ಮತ್ತು ಸಂಸ್ಕೃತಿ, ಶಾಲಾ ಶಿಕ್ಷಣ, ಪದವಿ ಪೂರ್ವ ಶಿಕ್ಷಣ, ಕಾಲೇಜು ಶಿಕ್ಷಣ, ನಗರಸಭೆ, ಕನ್ನಡ ಸಾಹಿತ್ಯ ಪರಿಷತ್ತು, ಸರ್ವೋದಯ ಸಮಿತಿ, ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಜಾನಪದ ಪರಿಷತ್ತು ಇವರ ಸಹಕಾರದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 156 ನೇ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ 121 ನೇ ಜನ್ಮ ವರ್ಷಾಚರಣೆ ಕಾರ್ಯಕ್ರಮವು ನಗರದ ಗಾಂಧಿ ಭವನದಲ್ಲಿ ಗುರುವಾರ ನಡೆದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಭಗವಾನ್ ಬುದ್ದ ಅವರು ಇಡೀ ಮನುಕುಲಕ್ಕೆ ಸತ್ಯ ಹೇಳಿದರು, ಅದೇ ರೀತಿ ಗಾಂಧೀಜಿ ಅವರು ಶಾಂತಿ ಮತ್ತು ಅಹಿಂಸೆಯನ್ನು ಪ್ರತಿಪಾದಿಸಿದರು ಎಂದರು. ವಿಶ್ವದ ಎಲ್ಲಾ ರಾಷ್ಟ್ರಗಳಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆ ಇರುವುದನ್ನು ಕಾಣುತ್ತೇವೆ. ಗಾಂಧೀಜಿ ಅವರ ಸಂದೇಶಗಳು ಇಡೀ ಜಗತ್ತಿಗೆ ಅನುಕರಣೀಯವಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅವರು ತಿಳಿಸಿದರು.

ವಿವಿಧೆತೆಯಲ್ಲಿ ಏಕತೆ ಹೊಂದಿರುವ ರಾಷ್ಟ್ರದಲ್ಲಿ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಉಳಿಸಿಕೊಂಡು ಹೋಗಬೇಕು. ಗಾಂಧೀಜಿ ಅವರು ಕರ್ಮ ಸಿದ್ಧಾಂತ ನಂಬಿ ಬದುಕಿದವರು. ಇವರೊಬ್ವ ಮನ್ವಂತರ ಯುಗ ಪುರುಷ, ಆ ನಿಟ್ಟಿನಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ತತ್ವ ಮತ್ತು ಸಂದೇಶಗಳನ್ನು ರೂಢಿಸಿಕೊಳ್ಳಬೇಕು ಎಂದರು.

ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಸರಳತೆ, ರಾಷ್ಟ್ರದ ಬಗ್ಗೆ ಇದ್ದ ಗೌರವ ಮತ್ತು ಭಕ್ತಿ ಮಾದರಿ ಎಂದು ಆರ್.ಐಶ್ವರ್ಯ ಅವರು ತಿಳಿಸಿದರು.

ವಿರಾಜಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ ಪ್ರೊ.ಕೆ.ಸಿ.ದಯಾನಂದ ಅವರು ಮಾತನಾಡಿ ಮಹಾತ್ಮ ಗಾಂಧೀಜಿ ಅವರು ಸತ್ಯ ಮತ್ತು ಅಹಿಂಸೆಯನ್ನು ಇಡೀ ವಿಶ್ವಕ್ಕೆ ಸಾರಿದ್ದಾರೆ ಎಂದರು.

ಮಹಾತ್ಮ ಗಾಂಧೀಜಿ ಅವರ ಭವ್ಯ ಭಾರತ ನಿರ್ಮಾಣಕ್ಕೆ ಹಲವು ಚಳವಳಿಯಲ್ಲಿ ಪಾಲ್ಗೊಂಡು ಉಪವಾಸ ಸತ್ಯಾಗ್ರಹ ಮಾಡಿದ್ದಾರೆ. ಹಾಗೆಯೇ ಯಂಗ್ ಇಂಡಿಯಾ ಸೇರಿದಂತೆ ಹಲವು ಪತ್ರಿಕೆಗಳ ಮೂಲಕ ಜಾಗೃತಿ ಮೂಡಿಸಿದ್ದಾರೆ ಎಂದರು.

ತತ್ವ ರಹಿತ ರಾಜಕೀಯ, ದುಡಿಮೆ ಇಲ್ಲದ ಸಂಪತ್ತು, ಆತ್ಮ‌ಸಾಕ್ಷಿ ಇಲ್ಲದ ಕಾರ್ಯಗಳು, ತ್ಯಾಗ ಇಲ್ಲದ ಪೂಜೆ ಈ ಸಪ್ತ ಸೂತ್ರಗಳು ರಾಷ್ಟ್ರದ ದುಸ್ಥಿಗೆ ಕಾರಣ ಆಗಿದೆ ಎಂದು ಕೆ.ಸಿ.ದಯಾನಂದ ಅವರು ಹೇಳಿದರು.

ರಾಮರಾಜ್ಯ ಮತ್ತು ಗ್ರಾಮ ಸ್ವರಾಜ್ಯದ ಪರಿಕಲ್ಪನೆಯನ್ನು ಗಾಂಧೀಜಿ ಅವರು ಕಂಡಿದ್ದರು. ಸರ್ವೋದಯ ಹಾಗೂ ವಿಕೇಂದ್ರೀಕರಣಕ್ಕೆ ಒತ್ತು ನೀಡಿದ್ದರು. ಖಾದಿ ಗ್ರಾಮೋದ್ಯೋಗ ಹಾಗೂ ಮಹಿಳಾ ಸಬಲೀಕರಣ ಪ್ರತಿಪಾದಿಸಿದ್ದರು ಎಂದರು.

ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಅತ್ಯಂತ ಪಾರದರ್ಶಕ ವ್ಯಕ್ತಿತ್ವ ಹೊಂದಿದ್ದ ಮಹಾನ್ ಚೇತನ ಎಂದರು.

ಜೈ ಜವಾನ್, ಜೈ ಕಿಸಾನ್ ಸಂದೇಶ ಸಾರಿದ್ದರು ಎಂದು ನುಡಿದರು.

ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷರಾದ ಮಂದ್ರೀರ ಮೋಹನ್ ದಾಸ್ ಅವರು ಮಾತನಾಡಿ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಸಂದೇಶ ಮತ್ತು ಆದರ್ಶಗಳನ್ನು ಪ್ರತಿಯೊಬ್ಬರೂ ಮೈಗೂಡಿಕೊಳ್ಳಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net