

ಮಡಿಕೇರಿ:
ಮಹಾತ್ಮ ಗಾಂಧೀಜಿಯವರು ‘ನನ್ನ ಜೀವನವೇ, ನನ್ನ ಸಂದೇಶ’ ವೆಂದು ಸಾರಿದ್ದಾರೆ. ಆ ನಿಟ್ಟಿನಲ್ಲಿ ಪ್ರತಿಯೊಬ್ಬರ ಬದುಕು ಜೀವನದ ಸಂದೇಶವಾಗುವಂತೆ ಬಾಳಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಪ್ರತಿಪಾದಿಸಿದರು.
ಜಿಲ್ಲಾಡಳಿತ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಸಹಕಾರದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ 155 ನೇ ಮತ್ತು ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ 120 ನೇ ಜನ್ಮ ವರ್ಷಾಚರಣೆ ಪ್ರಯುಕ್ತ ನಗರದ ಗಾಂಧಿ ಭವನದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ನುಡಿದಂತೆ ನಡೆಯುವ ಶಿಸ್ತನ್ನು ಮಹಾತ್ಮ ಗಾಂಧೀಜಿಯವರಂತೆ ಎಲ್ಲರೂ ಜೀವನದಲ್ಲಿ ಪಾಲಿಸಬೇಕು. ಹಾಗಾಗಿ ವಿಶ್ವಸಂಸ್ಥೆ ಸೇರಿದಂತೆ ದೇಶ ವಿದೇಶಗಳಲ್ಲಿಯೂ ಸಹ ಮಹಾತ್ಮ ಗಾಂಧೀಜಿಯವರ ಪುತ್ಥಳಿಯನ್ನು ಕಾಣಬಹುದಾಗಿದೆ.
ವಿಶ್ವ ಸಂಸ್ಥೆ ಗಾಂಧೀಜಿ ಜನ್ಮ ದಿನವನ್ನು ವಿಶ್ವ ಅಹಿಂಸಾ ದಿನವನ್ನಾಗಿ ಘೋಷಿಸಿ, ಆಚರಿಸುತ್ತಿದೆ. ವಿಶ್ವ ನಾಯಕರು ಮಹಾತ್ಮ ಗಾಂಧೀಜಿಯವರ ಜೀವನ ಬೋಧನೆಯನ್ನು ಪಾಲಿಸುತ್ತಾರೆ. ಮಾಹತ್ಮ ಗಾಂಧೀಜಿಯವರ ಜೀವನ ಹಾಗೂ ಲಾಲ್ ಬಹದ್ದೂರು ಶಾಸ್ತ್ರಿ ಅವರ ಸರಳ ಜೀವನ ಎಲ್ಲರಿಗೂ ಮಾದರಿ ಎಂದರು.
ಸರ್ವೋದಯ ಸಮಿತಿ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ ಭಾರತಕ್ಕೆ ಅಹಿಂಸಾ ಮಾರ್ಗದ ಮೂಲಕ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮ ಗಾಂಧೀಜಿ ಇಡೀ ವಿಶ್ವಕ್ಕೆ ಶಾಂತಿ ಸ್ಥಾಪಿಸಿದ್ದರು. ಮಹಾತ್ಮ ಗಾಂಧೀಜಿ ಎಲ್ಲರನ್ನೂ ಒಟ್ಟುಗೂಡಿಸಿ ಸ್ವಾತಂತ್ರ್ಯ ಪಡೆಯಲು ಶ್ರಮಿಸಿದರು. ಸ್ವಾತಂತ್ರ್ಯಕ್ಕಾಗಿ ರಾಷ್ಟ್ರದಾದ್ಯಂತ ಸಂಚರಿಸಿ ಜಾಗೃತಿ ಮೂಡಿಸಿದರು. ಗಾಂಧೀಜಿಯವರು ಜಗತ್ತು ಕಂಡ ಒಬ್ಬ ಶ್ರೇಷ್ಠ ಸಮಾಜ ಸುಧಾರಕ, ಸತ್ಯಾಗ್ರಹಿ, ಪತ್ರಕರ್ತರಾಗಿ ಗ್ರಾಮ ಸ್ವರಾಜ್ಯದ ಹರಿಕಾರರಾಗಿ ವಿವಿಧ ಕ್ಷೇತ್ರಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಲಾಲ್ ಬಹದ್ದೂರು ಶಾಸ್ತ್ರಿ ಅವರು ಭಾರತದ ಎರಡನೇ ಪ್ರಧಾನಮಂತ್ರಿಯಾಗಿ ಸರಳ, ಸಜ್ಜನಿಕೆಗೆ ಹೆಸರು ವಾಸಿಯಾಗಿದ್ದರು. ಸೇನೆ ಮತ್ತು ಕೃಷಿಗೆ ಹೆಚ್ಚಿನ ಮಹಾತ್ವಾಕಾಂಕ್ಷೆ ನೀಡಿದ್ದರು ಎಂದು ಹೇಳಿದರು.
ಜಾನಪದ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷ ಬಿ.ಜಿ. ಅನಂತಶಯನ ಮಾತನಾಡಿ ಗಾಂಧೀಜಿಯವರ ವಿಚಾರಧಾರೆಗಳನ್ನು ತಿಳಿದುಕೊಳ್ಳಲು ಪ್ರತಿಯೊಬ್ಬರೂ ಪುಸ್ತಕ ಹಾಗೂ ಪತ್ರಿಕೆಗಳನ್ನು ಅಧ್ಯಯನ ಮಾಡುವಂತಾಗಬೇಕು.
ಭಾರತ ಸ್ವಾತಂತ್ರ್ಯಕ್ಕಾಗಿ ಮಹಾತ್ಮ ಗಾಂಧೀಜಿಯವರು ಅಹಿಂಸಾ ಮಾರ್ಗದ ಮೂಲಕ ಹೋರಾಡಿದ್ದಾರೆ. ಸತ್ಯಕ್ಕಾಗಿ ಹೋರಾಟ ಗಾಂಧೀಜಿಯವರು ಕಲಿಸಿದ ಪಾಠವಾಗಿದೆ ಎಂದರು.
ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಮಾತನಾಡಿ ಮಹಾತ್ಮ ಗಾಂಧೀಜಿಯವರು ಸ್ವಾತಂತ್ರ್ಯದ ಪ್ರತೀಕ, ಗ್ರಾಮ ಸ್ವರಾಜ್ಯದ ಸಾಕಾರ ಮೂರ್ತಿ, ಎಲ್ಲರ ಮೆಚ್ಚಿನ ಬಾಪು ಎಂದು ವರ್ಣಿಸಿದರು.
ಸ್ಕೌಟ್ಸ್ ಮತ್ತು ಗೈಡ್ಸ್‍ನ ಪ್ರಧಾನ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯೂ ಮಾತನಾಡಿದರು.
ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ರಾಣಿ ಮಾಚಯ್ಯ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರರಾಜ್, ಸರ್ವೋದಯ ಸಮಿತಿ ಅಧ್ಯಕ್ಷ ಅಂಬೆಕಲ್ಲು ಕುಶಾಲಪ್ಪ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಉಪ ನಿರ್ದೇಶಕ ಸಿ.ರಂಗಧಾಮಪ್ಪ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ಮಂಜುಳಾ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶೇಖರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ ಮತ್ತಿತರರು ಇದ್ದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಮಹಾತ್ಮ ಗಾಂಧೀಜಿಯವರ ಕುರಿತು ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಪ್ರೌಢಶಾಲಾ, ಪದವಿ ಪೂರ್ವ ಹಾಗೂ ಪದವಿ/ಸ್ನಾತಕೋತ್ತರ ಪದವಿ ಈ ಮೂರು ವಿಭಾಗದಲ್ಲಿ ವಿಜೇತರಾದ ತಲಾ ಮೂವರು ವಿದ್ಯಾರ್ಥಿಗಳಿಗೆ ನಗದು ಬಹುಮಾನವನ್ನು ಗಣ್ಯರು ವಿತರಿಸಿದರು.
ಸಭಾ ಕಾರ್ಯಕ್ರಮಕ್ಕೂ ಮೊದಲು ಜಿಲ್ಲಾಧಿಕಾರಿ ವೆಂಕಟ್ ರಾಜಾ ಧ್ವಜಾರೋಹಣ ನೆರವೇರಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಪ್ರತಿಜ್ಞಾ ವಿಧಿ ಬೋಧಿಸಿದರು. ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಿಂದ ಗಾಂಧಿಭವನ ವರೆಗೆ ಸ್ವಚ್ಛತಾ ಜಾಥಾ ನಡೆಯಿತು. ಭಾರತ ಸೇವಾದಳ, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಏರ್ಪಡಿಸಿರುವ ಬೀದಿನಾಟಕ ಹಾಗೂ ಸಂಗೀತ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೇರಿದಂತೆ ಗಣ್ಯರು ಚಾಲನೆ ನೀಡಿದರು.