

ಮಡಿಕೇರಿ: ಗಾಂಧೀಜಿ ಅವರ ತತ್ವಗಳು ಇಡೀ ವಿಶ್ವಕ್ಕೆ ಮಾದರಿಯಾಗಿದ್ದು, ಅವರ ಚಿಂತನೆಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ ಹೇಳಿದರು.
ನಗರದ ಜಿಲ್ಲಾಧಿಕಾರಿರವರ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಭಾನುವಾರ ಆಯೋಜಿಸಿದ್ದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್‌ಬಹದ್ದೂರ್ ಶಾಸ್ತ್ರಿ ಅವರ ಜನ್ಮ ವರ್ಷಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಸತ್ಯ, ಅಹಿಂಸೆ ಮತ್ತು ಶಾಂತಿ ಮಾರ್ಗದ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟರು. ಸತ್ಯ ಶೋಧನೆಯಿಂದ ಮಾತ್ರ ಗುರಿ ತಲುಪಲು ಸಾಧ್ಯ ಎಂಬುದನ್ನು ಸಾರಿ ಹೇಳಿದ್ದರು. ಮಾಜಿ ಪ್ರಧಾನಿ ಲಾಲ್ ಬಹುದ್ದೂರ್ ಶಾಸ್ತ್ರಿ ಅವರು ಪ್ರಧಾನಮಂತ್ರಿ ಆಗಿದ್ದ ಅವಧಿಯಲ್ಲಿ ಇಡೀ ದೇಶಕ್ಕೆ ಮಾದರಿಯಾಗಿ ಆಡಳಿತ ನಡೆಸಿದರು ಎಂದರು.
ವಕೀಲ ಎಂ.ಎ.ನಿರಂಜನ ಮಾತನಾಡಿ, ಮಹಾತ್ಮ ಗಾಂಧೀಜಿ ಅವರು ಎಲ್ಲರನ್ನೂ ಒಟ್ಟುಗೂಡಿಸಿ ಸ್ವಾತಂತ್ರ್ಯ ಪಡೆಯಲು ಶ್ರಮಿಸಿದರು. ಸ್ವಾತಂತ್ರ್ಯಕ್ಕಾಗಿ ರಾಷ್ಟ್ರದಾದ್ಯಂತ ಸಂಚರಿಸಿ ಜಾಗೃತಿ ಮೂಡಿಸಿದರು. ಸತ್ಯ ಮತ್ತು ಅಹಿಂಸೆಯ ಮೂಲಕ ಜೀವಿಸಿದ ವ್ಯಕ್ತಿ ಗಾಂಧೀಜಿಯವರಾಗಿದ್ದಾರೆ. ಜೀವನದ ಪ್ರತಿಯೊಂದು ಸಮಸ್ಯೆಗೂ ಶಾಂತಿ ಅಹಿಂಸೆಯ ಮೂಲಕ ಮುಕ್ತ ಮಾರ್ಗ ಪಡೆಯಬಹುದಾಗಿದೆ ಎಂದು ತೋರಿಸಿಕೊಟ್ಟವರು ಎಂದು ನುಡಿದರು.
ಸ್ಕೌಟ್ಸ್ ಮತ್ತು ಗೈಡ್ಸ್‌ನ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯು ಮಾತನಾಡಿ, ಮಹಾತ್ಮ ಗಾಂಧೀಜಿ ಅವರು ವಿಶ್ವದಲ್ಲಿ ನಿರಂತರ ಶಾಂತಿಗಾಗಿ ಶ್ರಮಿಸಿದರು. ಗಾಂಧೀಜಿ ಅವರು ಸತ್ಯ ದರ್ಶನದ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟರು. ಗಾಂಧೀಜಿಯವರ ಬದುಕಿನ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು ಎಂದರು.
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್‌ಬಹದ್ದೂರು ಶಾಸ್ತ್ರಿರವರ ಭಾವಚಿತ್ರಕ್ಕೆ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಉಪ ವಿಭಾಗಾಧಿಕಾರಿ ಯತೀಶ್ ಉಲ್ಲಾಳ್, ವಕೀಲ ಎಂ.ಎ.ನಿರಂಜನ, ತಹಶೀಲ್ದಾರ್ ಮಹೇಶ್, ಇತರರು ಪುಷ್ಪಾರ್ಚನೆ ಮಾಡಿ, ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ತಾಲೂಕು ವೈದ್ಯಾಧಿಕಾರಿ ಡಾ.ಚೇತನ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಕೃಷ್ಣಪ್ಪ, ಸ್ಕೌಟ್ಸ್ ಮತ್ತು ಗೈಡ್ಸ್‌ನ ಸಂಘಟಕರಾದ ದಮಯಂತಿ, ಸ್ಕೌಟ್ಸ್ ಮತ್ತು ಗೈಡ್ಸ್‌ನ ಸಂಪಾಜೆ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಕೆ.ಬಿ.ಉಷಾರಾಣಿ ಇತರರು ಇದ್ದರು.
ಜಿಲ್ಲಾಡಳಿತ, ಸರ್ವೋದಯ ಸಮಿತಿ ಹಾಗೂ ನಗರಸಭೆ ವತಿಯಿಂದ ಮಹಾತ್ಮ ಗಾಂಧಿ ಜಯಂತಿ ಪ್ರಯುಕ್ತ ನಗರದ ಗಾಂಧಿ ಮಂಟಪದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆಗೆ ಮಡಿಕೇರಿ ಶಾಸಕರು, ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಸರ್ವೋದಯ ಸಮಿತಿ ಅಧ್ಯಕ್ಷ ಅಂಬೆಕಲ್ಲು ಕುಶಾಲಪ್ಪ, ನಿಕಟಪೂರ್ವ ಅಧ್ಯಕ್ಷ ಟಿ.ಪಿ.ರಮೇಶ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಉಪ ವಿಭಾಗಾಧಿಕಾರಿ ಯತೀಶ್ ಉಲ್ಲಾಳ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ವೇದಮೂರ್ತಿ, ತಹಶೀಲ್ದಾರ್ ಪಿ.ಎಸ್.ಮಹೇಶ್, ನಗರಸಭೆ ಪೌರಾಯುಕ್ತ ವಿಜಯ, ಕೊಡಗು ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ.ಅನಂತಶಯನ, ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಪ್ರಧಾನ ಆಯುಕ್ತ ಕೆ.ಟಿ.ಬೇಬಿ.ಮ್ಯಾಥ್ಯು, ಇತರರು ಮಾಲಾರ್ಪಣೆ ಮಾಡಿ, ಗೌರವ ನಮನ ಸಲ್ಲಿಸಿದರು. ಮಹಾತ್ಮ ಗಾಂಧೀಜಿ ಜಯಂತಿ ಪ್ರಯುಕ್ತ ಸರ್ವೋದಯ ಸಮಿತಿ ಮತ್ತು ಲಯನ್ಸ್ ಸಂಸ್ಥೆ ವತಿಯಿಂದ ವಿದ್ಯಾರ್ಥಿಗಳಿಗೆ ಏರ್ಪಡಿಸಲಾಗಿದ್ದ ದೇಶಭಕ್ತಿಗೀತೆ ಹಾಗೂ ಭಾಷಣ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನು ಮಡಿಕೇರಿ ಶಾಸಕರು ಇದೇ ಸಂದರ್ಭದಲ್ಲಿ ವಿತರಿಸಿದರು.