ಗಾಂಧೀಜಿಯವರ ನಡೆ-ನುಡಿ, ಆದರ್ಶಗಳು ಪ್ರತಿಯೊಬ್ಬರಿಗೂ ಮಾದರಿ; ಕೆ.ಬಿ.ಪ್ರಸಾದ್

MDK04
Published on

ಮಡಿಕೇರಿ: ಮಹಾತ್ಮ ಗಾಂಧೀಜಿ ಅವರ ನಡೆ-ನುಡಿಗಳು ಎಲ್ಲರಿಗೂ ಆದರ್ಶವಾಗಿದ್ದು, ಪ್ರತಿಯೊಬ್ಬರೂ ಗಾಂಧೀಜಿಯವರ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವಂತಾಗಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್ ಮಕ್ಕಳಿಗೆ ಕಿವಿ ಮಾತು ಹೇಳಿದರು.


ನಗರದ ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ರಾಜ್ಯಬಾಲ ಭವನ ಸೊಸೈಟಿ ಬೆಂಗಳೂರು, ಜಿಲ್ಲಾ ಬಾಲಭವನ ಸಮಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಗಾಂಧಿ ಜಯಂತಿ ಪ್ರಯುಕ್ತ ಮಕ್ಕಳಿಗೆ ಆಯೋಜಿಸಿದ್ದ ಸ್ಪರ್ಧಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


ಸಮಾಜದಲ್ಲಿ ಮಹಾನ್ ವ್ಯಕ್ತಿಗಳು ಅವರ ಸಂದೇಶ ನಡೆ-ನುಡಿ, ಸರಳತೆಯಿಂದ ಎಲ್ಲರಿಗೂ ಆದರ್ಶವಾಗಿದ್ದಾರೆ. ಗಾಂಧೀಜಿ ಅವರು ’ನನ್ನ ಜೀವನವೇ ನನ್ನ ಸಂದೇಶ’ ಎಂದು ಹೇಳಿದ್ದಾರೆ. ಗಾಂಧೀಜಿ ಅವರ ಸರಳತೆ ನಡೆ-ನುಡಿ ಅವರ ಆದರ್ಶಗಳಿಗೆ ವಿಶ್ವವೇ ಗೌರವಿಸುತ್ತಿದೆ ಎಂದು ತಿಳಿಸಿದರು.


ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ಪ್ರಸಾದ್‌ಗೌಡ ಮಾತನಾಡಿ, ಗಾಂಧೀಜಿ ಅವರ ಜೀವನಶೈಲಿ ನಡೆನುಡಿ ಆದರ್ಶಗಳು ಪ್ರತಿಯೊಬ್ಬರಿಗೂ ಮಾದರಿಯಾಗಿದೆ. ಆ ನಿಟ್ಟಿನಲ್ಲಿ ಗಾಂಧೀಜಿ ಅವರ ಗುಣಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮಾಜಕ್ಕೆ, ದೇಶಕ್ಕೆ ಪ್ರತಿಯೊಬ್ಬರೂ ಕೊಡುಗೆ ನೀಡುವಂತಾಗಬೇಕು ಎಂದರು.


ಜಿಲ್ಲಾ ವಿಶೇಷಚೇತನರ ಕಲ್ಯಾಣಾಧಿಕಾರಿ ಕೆ.ಜಿ.ವಿಮಲ ಮಾತನಾಡಿ, ಜಿಲ್ಲಾ ಬಾಲಭವನ ಸಮಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ೨೦೨೨-೨೩ ನೇ ಸಾಲಿನ ಗಾಂಧಿ ಜಯಂತಿ ಪ್ರಯುಕ್ತ ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯಲ್ಲಿ ೫ ರಿಂದ ೧೬ ವರ್ಷದೊಳಗಿನ ಮಕ್ಕಳಿಗೆ ಚಿತ್ರಕಲೆ ಮತ್ತು ಪ್ರಬಂಧ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದರು.


ಕಾರ್ಯಕ್ರಮದಲ್ಲಿ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಪ್ರಮೋದ್, ಎಸಿಎಫ್ ಮೊಹಿಸಿನ್ ಪಾಷ, ನಿರೂಪಣಾಧಿಕಾರಿ ಪೂಣಚ್ಚ, ಜಿಲ್ಲಾ ಬಾಲಭವನ ಸಮಿತಿಯ ಪೂಜಾ, ಶಾಲಾ ಮಕ್ಕಳು, ಶಿಕ್ಷಕರು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net