

ಬೆಂಗಳೂರು: ಪಶ್ಚಿಮ ಬಂಗಳಾದ ರಾಜಧಾನಿ ಕಲ್ಕತ್ತಾದ ಆರ್ಜಿಕಾರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದು, ವ್ಯಾಪಕ ಪ್ರತಿಭಟನೆಗಳು ನಡೆಯುತ್ತಿವೆ. ಇದರ ನಡುವೆಯೇ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬೆಳಕಿಗೆ ಬಂದಿದ್ದು, ಮತ್ತಷ್ಟು ಆಕ್ರೋಶಕ್ಕೆ ಕಾರಣವಾಗಿದೆ.
ನಗರದ ಎಚ್ಎಸ್ಆರ್ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸಂತ್ರಸ್ತೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳಿಗಾಗಿ ಹುಡುಕಾಡುತ್ತಿದ್ದಾರೆ.
ಸಂತ್ರಸ್ತೆ ಕೋರಮಂಗಲದ ಪಬ್ ಒಂದರಿಂದ ಪಾನಮತ್ತರಾಗಿ ಹೊರಬಂದಿದ್ದಾರೆ. ಬಳಿಕ ದ್ವಿಚಕ್ರ ವಾಹನ ಓಡಿಸಿಕೊಂಡು ಮನೆಗೆ ತೆರಳುತ್ತಿದ್ದರು. ಈ ವೇಳೆ ವಾಹನ ಅಪಘಾತವಾಗಿದ್ದು ಸಂತ್ರಸ್ತೆ ವಾಹನ ಬಿಟ್ಟು ಆಟೋದಲ್ಲಿ ಪ್ರಯಾಣ ಬೆಳೆಸಿದ್ದಾರೆ. ಸಂತ್ರಸ್ತೆ ಪಾನಮತ್ತರಾದ ಸ್ಥಿತಿಯಲ್ಲಿರುವುದನ್ನು ಕಂಡು ಪರಿಸ್ಥಿತಿಯನ್ನು ದುರ್ಬಳಕೆ ಮಾಡಿಕೊಂಡ ಆಟೋ ಚಾಲಕ ಆಕೆಯನ್ನು ಎಚ್ಎಸ್ಆರ್ ಲೇಔಟ್ಗೆ ಕರೆದೊಯ್ದು ತನ್ನ ಸ್ನೇಹಿತರ ಜತೆಗೂಡಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾನೆ. ಸಂತ್ರಸ್ತ ಯುವತಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.