ಊಹಾಪೋಹಗಳಿಗೆ ಹೈಕಮಾಂಡ್ ಮಣೆ ಹಾಕಲ್ಲ: ಶಾಸಕ ಪರಣ್ಣ ಮುನವಳ್ಳಿ ಹೇಳಿಕೆ

130223 Paranna Munavalli Kalakanagouda
Published on

ಗಂಗಾವತಿ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರಿಗೂ ಸ್ಪರ್ಧಿಸುವ ಹಕ್ಕಿದ್ದು, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಶಾಸಕ ಪರಣ್ಣ ಮುನವಳ್ಳಿ ಹೇಳಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಜನಾರ್ದನ ರೆಡ್ಡಿ ಸ್ಪರ್ಧೆಯಿಂದ ಬಿಜೆಪಿಗೆ ಯಾವುದೇ ನಷ್ಟವಿಲ್ಲ. ಪಕ್ಷಕ್ಕೆ ತನ್ನದೇ ಕಾರ್ಯಕರ್ತರ ಪಡೆಯಿದ್ದು, ರಾಜ್ಯ ಮತ್ತು ಕೇಂದ್ರ ಸರ್ಕಾರದ ಆಡಳಿತ ಬಗ್ಗೆ ಮತದಾರರಿಗೆ ವಿಶ್ವಾಸವಿದೆ. ಬಿಜೆಪಿಯಿಂದಲೇ ಸ್ಪರ್ಧಿಸುವುದು ಶೇ.100 ಖಚಿತವಾಗಿದ್ದು, ಗೆಲ್ಲುವ ವಿಶ್ವಾಸವಿದೆ. ಪಕ್ಷ ಬಿಟ್ಟು ಹೋಗುವವರ ಬಗ್ಗೆ ಮಾತನಾಡಲ್ಲ. ಬಿಜೆಪಿಯಲ್ಲಿ ಊಹಾಪೋಹಗಳಿಗೆ ಹೈಕಮಾಂಡ್ ಮಣೆ ಹಾಕಲ್ಲ. ಪಕ್ಷದ ಶಿಸ್ತಿನ ಸಿಪಾಯಿಯಾಗಿದ್ದು, ಹೈಕಮಾಂಡ್ ಆದೇಶಕ್ಕೆ ಬದ್ಧನಾಗಿದ್ದೇನೆ ಎಂದರು.

ನಗರದ ಬಾಲಕರ ಜೂನಿಯರ್ ಕಾಲೇಜು ಮೈದಾನದಲ್ಲಿ ೆ.14ರಂದು ಬಿಜೆಪಿ ಪೇಜ್ ಪ್ರಮುಖರ ಸಮಾವೇಶ ಹಮ್ಮಿಕೊಂಡಿದ್ದು, ಪಕ್ಷದ ರಾಜ್ಯಾಧ್ಯಕ್ಷರೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವರು ಸೇರಿ ಪ್ರಮುಖರು ಭಾಗವಹಿಸಲಿದ್ದಾರೆ. ಶಿಕ್ಷಣ ಪ್ರೇಮಿ ಹಾಗೂ ಉದ್ಯಮಿ ನೆಕ್ಕಂಟಿ ಸೂರಿಬಾಬು ಮತ್ತು ಬೆಂಬಲಿಗರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಮಾಜಿ ಸಂಸದ ಎಸ್.ಶಿವರಾಮಗೌಡ ಪಕ್ಷ ಸೇರ್ಪಡೆ ಕುರಿತು ಈಗಾಗಲೇ ಸಂಪರ್ಕಿಸಿದ್ದೂ, ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿಸಿದರು. ರೈತ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಕಳಕನಗೌಡ ಜಮಾಪುರ ಮಾತನಾಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ನರಸಿಂಗರಾವ್ ಕುಲಕರ್ಣಿ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಶಿವಕುಮಾರ ಅರಕೇರಿ, ತಾಲೂಕು ಅಧ್ಯಕ್ಷ ವೆಂಕಟೇಶ ಜಂತಕಲ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net