ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಕುಖ್ಯಾತ ಆರೋಪಿ ವಿಖ್ಯಾತ್ ಬಪ್ಪಾಲ್ ದಂಪತಿ ಬಂಧನ

Ganja acused
Published on

ಮಂಗಳೂರು: ನಗರದದಲ್ಲಿ ಸಾರ್ವಜನಿಕರಿಗೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಹಾಗೂ ಗಾಂಜಾ ಸಂಗ್ರಹಿಸಿಟ್ಟಿದ್ದ ಕುಖ್ಯಾತ ಆರೋಪಿ ಹಾಗೂ ಆತನ ಪತ್ನಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಕಾವೂರು ಶಂಕರ ನಗರ, ಕೆ.ಸಿ. ಆಳ್ವ ಬಡಾವಣೆಯ ವಿಖ್ಯಾತ್ ಯಾನೆ ವಿಕ್ಕಿ ಬಪ್ಪಾಲ್ (28) ಹಾಗೂ ಆತನ ಪತ್ನಿ ಅಂಜನಾ (21) ಬಂಧಿತರು. ಕಾಲೇಜಿನ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಹಾಗೂ ಸೇವನೆ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಇನ್‌ಸ್ಪೆಕ್ಟರ್ ಮಹೇಶ್ ಪ್ರಸಾದ್ ಮತ್ತು ಪಿಎಸ್‌ಐ ರಾಜೇಂದ್ರ ಬಿ. ನೇತೃತ್ವದ ಮಂಗಳೂರು ಸಿಸಿಬಿ ಪೊಲೀಸರು ಆತನ ಮನೆಗೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ 22,000 ರೂ. ಮೌಲ್ಯದ ಒಟ್ಟು 2.2 ಕೆಜಿ ತೂಕದ ಗಾಂಜಾ, ನಗದು 1,500 ರೂ., ಮೊಬೈಲ್ ಫೋನ್ 1 ಮತ್ತು ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 92,000 ರೂ. ಆಗಬಹುದು. ಈ ಗಾಂಜಾ ಮಾರಾಟ ಜಾಲದಲ್ಲಿ ಇನ್ನೂ ಹಲವು ಆರೋಪಿಗಳು ಭಾಗಿಯಾಗಿದ್ದು ಪತ್ತೆ ಕಾರ್ಯ ಮುಂದುವರಿದಿದೆ.

ಆರೋಪಿಗಳನ್ನು ಮಾದಕ ವಸ್ತುಗಳ ಸೇವನೆ ಬಗ್ಗೆ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದ್ದು, ಮಾದಕ ವಸ್ತು ಗಾಂಜಾವನ್ನು ಸೇವನೆ ಮಾಡಿರುವ ಬಗ್ಗೆ ದೃಢಪಟ್ಟಿರುತ್ತದೆ. ಆರೋಪಿಗಳ ಪೈಕಿ ವಿಖ್ಯಾತ್ ವಿರುದ್ದ ಈ ಹಿಂದೆ ಮಂಗಳೂರು ನಗರದ ದಕ್ಷಿಣ, ಉತ್ತರ, ಬರ್ಕೆ, ಉರ್ವಾ, ಗ್ರಾಮಾಂತರ, ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಹಲ್ಲೆ, ಕೊಲೆ ಯತ್ನ, ಜೀವ ಬೆದರಿಕೆ, ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಹಾಗೂ ಅಪಹರಣಕ್ಕೆ ಸಂಬಂಧಪಟ್ಟಂತೆ ಒಟ್ಟು 13 ಪ್ರಕರಣಗಳು ದಾಖಲಾಗಿರುತ್ತದೆ.

ಅಂಜನಾ ಎಂಬಾಕೆಯ ವಿರುದ್ಧ ಈ ಹಿಂದೆ ಕಂಕನಾಡಿ ನಗರ ಹಾಗೂ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಹಲ್ಲೆ ಹಾಗೂ ಕೊಲೆ ಯತ್ನ ಪ್ರಕರಣ ದಾಖಲಾಗಿರುತ್ತದೆ. ಆರೋಪಿ ಹಾಗೂ ಆತನ ಪತ್ನಿ ಜೊತೆ ಸೇರಿಕೊಂಡು ಮಂಗಳೂರು ನಗರದ ಎಂ.ಜಿ. ರಸ್ತೆಯಲ್ಲಿರುವ ವಿದ್ಯಾಸಂಸ್ಥೆಗಳ ಪರಿಸರದಲ್ಲಿ, ಕೆಪಿಟಿ, ಕದ್ರಿ, ಜೆಪ್ಪು ಬಪ್ಪಾಲ್ ಪರಿಸರದಲ್ಲಿ ಗಾಂಜಾವನ್ನು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದರು. ಆರೋಪಿಗಳ ವಿರುದ್ಧ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net