

ಹನೂರು: ಇಲ್ಲಿನ ಪಟ್ಟಣ ಪಂಚಾಯಿತಿಗೆ ಸೇರಿದ ತ್ಯಾಜ್ಯ ವಿಲೇವಾರಿ ವಾಹನವನ್ನು ಖಾಸಗಿಯಾಗಿ ದುರ್ಬಳಕೆ ಮಾಡಿಕೊಳ್ಳುವುದರ ಜತೆಗೆ ಪೌರಕಾರ್ಮಿಕರನ್ನು ಕೆಲಸಕ್ಕೆ ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ.
ಪಟ್ಟಣದಲ್ಲಿ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಮನೆ ಮನೆಗೆ ತೆರಳಿ ಹಸಿ ಹಾಗೂ ಒಣ ಕಸವನ್ನು ಸಂಗ್ರಹಿಸಿ ವಿಲೇವಾರಿಗೆ ಪ್ರತ್ಯೇಕ ವಾಹನ ನಿಯೋಜಿಸಲಾಗಿದೆ. ಆದರೆ, ಈ ವಾಹನ ಪ್ರತಿನಿತ್ಯ ವಾರ್ಡ್‌ಗಳಿಗೆ ಬರುತ್ತಿಲ್ಲ. ಚಾಲಕರು ನಿರ್ಲಕ್ಷ್ಯ ವಹಿಸಿದ್ದಾರೆ. ಇತ್ತ ಪಪಂ ಅಧಿಕಾರಿಗಳು ಗಮನಹರಿಸುತ್ತಿಲ್ಲ. ಇದರಿಂದ ಸಮರ್ಪಕವಾಗಿ ಕಸ ವಿಲೇವಾರಿಯಾಗುತ್ತಿಲ್ಲ. ಹಾಗಾಗಿ ಅಲಲ್ಲಿ ಕಸದ ರಾಶಿ ಬಿದ್ದಿದ್ದು, ಅನೈರ್ಮಲ್ಯಕ್ಕೆ ಕಾರಣವಾಗಿದೆ.
ಹೋಟೆಲ್, ಬಾರ್, ವರ್ಕ್‌ಷಾಪ್ ಹಾಗೂ ಇನ್ನಿತರ ಖಾಸಗಿ ಮಳಿಗೆಗಳ ಮಾಲೀಕರಿಂದ ಹಣ ಪಡೆದು ಹೆಚ್ಚಿನ ಆದ್ಯತೆ ನೀಡಿ ಅಲ್ಲಿ ಸಂಗ್ರಹವಾಗುವ ತ್ಯಾಜ್ಯವನ್ನು ಆಗಾಗ್ಗೆ ವಿಲೇವಾರಿ ಮಾಡಲಾಗುತ್ತಿದೆ. ಈ ಕಾರ್ಯಕ್ಕೆ ಪೌರಕಾರ್ಮಿಕರನ್ನು ಬಳಸಿಕೊಳ್ಳುತ್ತಿದ್ದಾರೆ. ಆದರೆ ವಾರ್ಡ್‌ಗಳಲ್ಲಿ ಮಾತ್ರ ಸಮರ್ಪಕವಾಗಿ ಕಸ ವಿಲೇವಾರಿಯಾಗುತ್ತಿಲ್ಲ. ಆದ್ದರಿಂದ ಪಪಂ ಮುಖ್ಯಾಧಿಕಾರಿ ಕೂಡಲೇ ಗಮನಹರಿಸಿ ಸಂಬಂಧಪಟ್ಟವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಪಟ್ಟಣ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಬಸವರಾಜು ಒತ್ತಾಯಿಸಿದ್ದಾರೆ.