ಗೌರಿ-ಗಣೇಶ ಹಬ್ಬ ಆಚರಣೆ; ನಿಯಮ ಪಾಲಿಸಿ, ಜಿಲ್ಲಾಡಳಿತ ಜತೆ ಸಹಕರಿಸಲು ಮನವಿ

14adarshkdga3
Published on

ಮಡಿಕೇರಿ: ಗೌರಿ-ಗಣೇಶ ಹಬ್ಬ ಆಚರಣೆಯ ನಿಯಮ ಪಾಲಿಸುವುದರ ಜತೆಗೆ ಜಿಲ್ಲಾಡಳಿತ ಜತೆ ಸಹಕರಿಸುವಂತೆ ಜಿ.ಪಂ.ಸಿಇಒ ವರ್ಣಿತ್ ನೇಗಿ ಮನವಿ ಮಾಡಿದರು.


ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗೌರಿ-ಗಣೇಶ ಹಬ್ಬ ಆಚರಣೆ ಸಂಬಂಧ ಅಗತ್ಯ ಮುಂಜಾಗ್ರತೆ ವಹಿಸುವ ನಿಟ್ಟಿನಲ್ಲಿ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜತೆಗೆ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದರು.


ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಗೌರಿ-ಗಣೇಶ ಹಬ್ಬ ಆಚರಿಸುವ ಸಂಬಂಧ ಹಲವು ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಅದನ್ನು ಪಾಲಿಸುವಂತೆ ಮನವಿ ಮಾಡಿದರು.


ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮಾತನಾಡಿ, ಪೊಲೀಸ್ ಇಲಾಖೆಯಿಂದ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು. ಆ ನಿಟ್ಟಿನಲ್ಲಿ ಕಾನೂನು ಮತ್ತು ನಿಯಮಗಳನ್ನು ಚಾಚು ತಪ್ಪದೆ ಪಾಲಿಸಬೇಕು. ಏನಾದರೂ ಸಮಸ್ಯೆಗಳು ಇದ್ದಲ್ಲಿ ಗಮನಕ್ಕೆ ತರುವಂತೆ ಸಲಹೆ ಮಾಡಿದರು.


ಈ ಸಂದರ್ಭದಲ್ಲಿ ಮಾತನಾಡಿದ ಮಡಿಕೇರಿ ನಗರದ ಚೇತನ್, ನಗರದ ಗೌರಿ ಕೆರೆಯಲ್ಲಿ ಹೂಳು ತುಂಬಿದ್ದು, ಹೂಳು ತೆಗೆಯಬೇಕಿದೆ. ಜತೆಗೆ ಸ್ವಚ್ಚತಾ ಕಾರ್ಯ ಆಗಬೇಕು. ವಿದ್ಯುತ್ ವ್ಯವಸ್ಥೆ ಮಾಡಬೇಕು. ಹದಗೆಟ್ಟಿರುವ ರಸ್ತೆಯನ್ನು ಸರಿಪಡಿಸಬೇಕು ಎಂದು ಮನವಿ ಮಾಡಿದರು.


ನಗರಸಭೆ ಸದಸ್ಯ ಅರುಣ್ ಶೆಟ್ಟಿ ಮಾತನಾಡಿ, ಗೌರಿ-ಗಣೇಶ ವಿಸರ್ಜನೆ ಸಂದರ್ಭದಲ್ಲಿ ನಗರದ ಗಣಪತಿ ಬೀದಿಯಿಂದ ಮಹದೇವ ಪೇಟೆ ಮತ್ತು ಬನ್ನಿ ಮಂಟಪದವರೆಗೆ ಸಂಚಾರ ದಟ್ಟಣೆಯನ್ನು ನಿಯಂತ್ರಣ ಮಾಡಬೇಕು ಎಂದು ಕೋರಿದರು.


ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ.ಸುಕುಮಾರ್ ಮಾತನಾಡಿ, ಹಾಕತ್ತೂರು ಬಳಿಯ ತೊಂಬತ್ತುಮನೆಯ ಭಜನಾ ಮಂದಿರ ಬಳಿ ವಿದ್ಯುತ್ ಮಾರ್ಗ ಹಾದು ಹೋಗಿದ್ದು, ವಿದ್ಯುತ್ ತಂತಿ ತಾಗುವಂತಿದೆ. ಇದನ್ನು ಸರಿಪಡಿಸಬೇಕು ಎಂದರು.


ಈ ಸಂದರ್ಭದಲ್ಲಿ ಮಾತನಾಡಿದ ಜಿ.ಪಂ.ಸಿಇಒ, ಸ್ಥಳೀಯವಾಗಿ ಕೆಲವು ಕಾಮಗಾರಿಗಳು ಆಗಬೇಕಿದ್ದಲ್ಲಿ, ಸ್ಥಳೀಯ ಗ್ರಾ.ಪಂ., ಪುರಸಭೆ, ಪಟ್ಟಣ ಪಂಚಾಯಿತಿ, ನಗರಸಭೆ ಗಮನಕ್ಕೆ ತರುವಂತೆ ಸಲಹೆ ಮಾಡಿದರು.


ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮಾತನಾಡಿ, ಗೌರಿ ಗಣೇಶ ಹಬ್ಬ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಅತೀ ಮುಖ್ಯವಾಗಿದೆ. ವೇಗವಾಗಿ ವಾಹನ ಚಲಾಯಿಸುವುದು ಸೇರಿದಂತೆ ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಅವಕಾಶ ಮಾಡಬಾರದು. ಬ್ಯಾನರ್ ಮತ್ತು ಪೋಸ್ಟರ್ ಅಳವಡಿಸಲು ಸ್ಥಳೀಯ ಸಂಸ್ಥೆ ಹಾಗೂ ಪೊಲೀಸ್ ಇಲಾಖೆಯಿಂದ ಅನುಮತಿ ಪಡೆಯಬೇಕು. ಧ್ವನಿವರ್ಧಕ ಸಂಬಂಧಿಸಿದಂತೆ ಸುಪ್ರಿಂ ಕೋರ್ಟ್ ನಿಯಮಗಳನ್ನು ಪಾಲಿಸಬೇಕು. ರಾತ್ರಿ ೧೦ ಗಂಟೆಯ ನಂತರ ಧ್ವನಿವರ್ಧಕ ಬಳಸಬಾರದು ಎಂದು ಹೇಳಿದರು.


ನಗರದ ಚೇತನ್ ಮಾತನಾಡಿ, ಗಣೇಶೋತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಗುತ್ತದೆ. ಆದರೆ, ಪೊಲೀಸ್ ಇಲಾಖೆಯವರು ೫ ಲಕ್ಷ ರೂ.ಬಾಂಡ್‌ನ್ನು ಬರೆಸಿಕೊಳ್ಳುವುದು ಏಕೆ ಎಂದು ಪ್ರಶ್ನಿಸಿದರು. ಈ ಕುರಿತು ಪ್ರತಿಕ್ರಿಯಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಯಮವನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ಹೇಳಿದರು.


ಈ ಸಂದರ್ಭದಲ್ಲಿ ಮಾತನಾಡಿದ ಪಿ.ಪಿ.ಸುಕುಮಾರ್, ಧ್ವನಿವರ್ಧಕ ಬಳಕೆ ಸಂಬಂಧಿಸಿದಂತೆ ನಿಯಮವನ್ನು ಸರಳೀಕರಣ ಮಾಡಬೇಕು ಎಂದು ಕೋರಿದರು.


ಸಭೆಯ ಆರಂಭದಲ್ಲಿ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ, ಗೌರಿ ಗಣೇಶ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರು ಬಣ್ಣ ರಹಿತ ಮಣ್ಣಿನ ಗಣೇಶ ಮೂರ್ತಿಗಳೊಂದಿಗೆ ಹಬ್ಬ ಆಚರಿಸಿ, ಸ್ಥಳೀಯ ಸಂಸ್ಥೆಗಳು ನಿಗದಿಪಡಿಸಿದ ಸ್ಥಳಗಳಲ್ಲಿಯೇ ಮೂರ್ತಿ ವಿಸರ್ಜಿಸಬೇಕು. ನಗರ ಪಟ್ಟಣಗಳಲ್ಲಿ ಅನಧಿಕೃತ ಪ್ಲೆಕ್ಸ್, ಪ್ಲಾಸ್ಟಿಕ್ ಬ್ಯಾನರ್‌ಗಳನ್ನು ಅಳವಡಿಸಲು ಅನುಮತಿ ಪಡೆಯಬೇಕು. ಸಾರ್ವಜನಿಕವಾಗಿ ಗಣೇಶ ವಿಗ್ರಹಗಳನ್ನು ಇಡಲು ಇಚ್ಚಿಸುವ ಸಮಿತಿಯವರು ಉತ್ಸವ ಆಚರಿಸಲು ಬೇಕಾಗುವ ಪೂರ್ವ ತಯಾರಿಗೆ ಸಂಬಂಧಿಸಿದಂತೆ, ಧ್ವನಿವರ್ಧಕಗಳಿಗೆ ಸಂಬಂಧಿಸಿದಂತೆ ಹಾಗೂ ಇತರೆ ಪರವಾನಗಿಗಳಿಗೆ ಸಂಬಂಧಿಸಿದಂತೆ ಸಕ್ಷಮ ಪ್ರಾಧಿಕಾರಗಳಿಂದ ಅನುಮೋದನೆ ಪಡೆಯುವುದು ಕಡ್ಡಾಯವಾಗಿದೆ ಎಂದು ಹೆಚ್ಚುವರಿ ಜಿಲ್ಲಧಿಕಾರಿ ತಿಳಿಸಿದರು.


ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರರಾಜ್, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net