

ಮಂಡ್ಯ: ಜಿಲ್ಲೆಯಲ್ಲಿ ಆ.27ರಂದು ಕರ್ನಾಟಕ ಲೋಕಸೇವಾ ಆಯೋಗದಿಂದ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ಎ ಮತ್ತು ಗ್ರೂಪ್ ಬಿ ಹುದ್ದೆಗಳ ಪೂರ್ವಭಾವಿ ಪರೀಕ್ಷೆ ಆಯೋಜಿಸಲಾಗಿದೆ. ಆದ್ದರಿಂದ ಪಾರದರ್ಶಕವಾಗಿ ಯಾವುದೇ ಅವ್ಯವಹಾರಗಳಿಗೆ ಆಸ್ಪದ ನೀಡದೆ ನಿಷ್ಪಕ್ಷಪಾತವಾಗಿ ನಡೆಸಲು ಸಿದ್ಧತೆ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, 384 ಹುದ್ದೆಗಳಿಗೆ ಪೂರ್ವಭಾವಿ ಪರೀಕ್ಷೆ ನಡೆಯಲಿದೆ. ಜಿಲ್ಲೆಯಲ್ಲಿ 12 ಪರೀಕ್ಷಾ ಕೇಂದ್ರ ಗುರುತಿಸಲಾಗಿದ್ದು, 6,617 ಅಭ್ಯರ್ಥಿಗಳು ಪರೀಕ್ಷೆಗೆ ಬರೆಯಲಿದ್ದಾರೆ. ಬೆಳಗ್ಗೆ 10 ರಿಂದ 12 ಗಂಟೆವರೆಗೆ ಪತ್ರಿಕೆ-1 ಮತ್ತು ಮಧ್ಯಾಹ್ನ 2 ರಿಂದ ಸಂಜೆ 4 ಗಂಟೆವರೆಗೆ ಪತ್ರಿಕೆ-2 ಪರೀಕ್ಷೆ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಪರೀಕ್ಷೆ ಗೌಪ್ಯತೆಯಲ್ಲಿ ಯಾವುದೇ ರಾಜಿಯಿಲ್ಲದಂತೆ ನ್ಯಾಯ ಸಮ್ಮತವಾಗಿ ನಡೆಸಿ. ಪರೀಕ್ಷೆಯು ನಡೆಯುವ ದಿನದಂದು ಕೇಂದ್ರದ ಸುತ್ತಲೂ 200 ಮೀ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶ ಎಂದು ಘೋಷಿಸಿ ಮತ್ತು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿ ಮುಚ್ಚಿಸಿ. ಕೊಠಡಿಯ ಒಳಗೆ ಯಾವುದೇ ರೀತಿಯ ಕೈಗಡಿಯಾರ, ಆಧುನಿಕ ಎಲೆಕ್ಟ್ರಾನಿಕ್ ಉಪಕರಣ, ಮೊಬೈಲ್ ಫೋನ್, ಬ್ಲೂಟೂತ್, ವೈಟ್ ಫ್ಲೂಯಿಡ್, ವೈರ್‌ಲೆಸ್ ಸೆಟ್ಸ್, ಕ್ಯಾಲ್ಕುಲೇಟರ್ ತರುವುದನ್ನು ನಿಷೇಧಿಸಲಾಗಿದೆ ಎಂದರು.
ಪ್ರತಿ ಪರೀಕ್ಷಾ ಕೇಂದ್ರಕ್ಕೆ ಒಬ್ಬರು ವೈದ್ಯರು/ಆರೋಗ್ಯ ಸಿಬ್ಬಂದಿ ನೇಮಕ ಮಾಡಬೇಕು. ಕೇಂದ್ರಗಳ ಸುತ್ತಮುತ್ತ ಸ್ವಚ್ಛತೆ ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳಿಗೆ ಮೂಲ ಸೌಕರ್ಯ, ಸೂಕ್ತ ಆಸನ ವ್ಯವಸ್ಥೆ ಹಾಗೂ ಕುಡಿಯುವ ನೀರಿನ ಸೌಲಭ್ಯವನ್ನು ಕಲ್ಪಿಸಬೇಕು. ಕೊಠಡಿ ಸಂವಿಕ್ಷಕರು ಅಭ್ಯರ್ಥಿಗಳ ಚಲನ-ವಲನಗಳನ್ನು ಆಗಿಂದಾಗ್ಗೆ ಸೂಕ್ಷ್ಮವಾಗಿ ಗಮನಿಸಿ. ಯಾವುದೇ ಅಭ್ಯರ್ಥಿ ಸಂಶಯಾತ್ಮಕವಾಗಿ ವರ್ತಿಸುತ್ತಿದ್ದಲ್ಲಿ ತಕ್ಷಣ ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಹಾಗೂ ಪರೀಕ್ಷಾ ಕೇಂದ್ರದ ಸ್ಥಳೀಯ ನಿರೀಕ್ಷಣಾಧಿಕಾರಿಗಳ ಗಮನಕ್ಕೆ ತಂದು ಸೂಕ್ತ ಕ್ರಮವಹಿಸಿ ಎಂದರು.
ಪರೀಕ್ಷಾ ಕೊಠಡಿಗಳಲ್ಲಿನ ಸಿ.ಸಿ ಕ್ಯಾಮೆರಾ ಮತ್ತು ಬಾಡಿ ಕ್ಯಾಮೆರಾಗಳು ಪರೀಕ್ಷಾ ಪ್ರಕ್ರಿಯೆ ಮತ್ತು ಎಲ್ಲ ಅಭ್ಯರ್ಥಿ ಹಾಗೂ ಸಂವೀಕ್ಷಕರ ಚಲನ-ವಲನಗಳನ್ನು ಸ್ಪಷ್ಟವಾಗಿ ಸೆರೆಹಿಡಿಯುವಂತೆ ಅಳವಡಿಸುವ ಸಲುವಾಗಿ ಸೂಕ್ತ ಕ್ರಮವಹಿಸುವಂತೆ ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಮತ್ತು ಸಂಬಂಧಪಟ್ಟ ಅಧಿಕಾರಿ/ಸಿಬ್ಬಂದಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕು. ಅಂಧ/ದೃಷ್ಟಿಮಾಂದ್ಯ ಅಭ್ಯರ್ಥಿಗಳು ಹಂಚಿಕೆಯಾದಲ್ಲಿ ಅವರು ಪರೀಕ್ಷೆಯನ್ನು ಬರೆಯಲು ಸ್ವಂತ ಲಿಪಿಕಾರರೊಂದಿಗೆ ಬರುವುದರಿಂದ ಅಭ್ಯರ್ಥಿಯಿಂದ ಅಂಗವಿಕಲತೆಯ ಪ್ರಮಾಣ ಪತ್ರ ಹಾಗೂ ಲಿಪಿಕಾರರ ಭಾವಚಿತ್ರ ಮತ್ತು ಗುರುತಿನ ಚೀಟಿ, ಇತರೆ ವಿವರಗಳೊಂದಿಗೆ ದೃಢೀಕರಣವನ್ನು ನಿಗದಿತ ನಮೂನೆಗಳಲ್ಲಿ ಪರೀಕ್ಷಾ ಕೇಂದ್ರದಲ್ಲಿ ಪಡೆದುಕೊಂಡು ಆಯೋಗಕ್ಕೆ ಸಲ್ಲಿಸುವುದು ಕಡ್ಡಾಯವಾಗಿರುತ್ತದೆ ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕ ಕೃಷ್ಣಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಸ್.ರಾಜಮೂರ್ತಿ ಇತರರಿದ್ದರು.