ಜಯಂತಿಗಳಿಗೆ ಸಾರ್ವತ್ರಿಕ ರಜೆ ರದ್ದುಗೊಳಿಸಬೇಕು : ಶಾಸಕ ಜಿ.ಟಿ. ದೇವೇಗೌಡ

GTD_2
Published on

ಮೈಸೂರು: ವಿವಿಧ ಜಯಂತಿಗಳಿಗೆ ನೀಡುತ್ತಿರುವ ಸಾರ್ವತ್ರಿಕ ರಜೆಯನ್ನು ರದ್ದುಗೊಳಿಸುವುದು ಉತ್ತಮ ಎಂದು ಶಾಸಕ ಜಿ.ಟಿ.ದೇವೇಗೌಡ ಅಭಿಪ್ರಾಯಪಟ್ಟರು.

ಜಿಲ್ಲಾಡಳಿತ, ಮೈಸೂರು-ಚಾಮರಾಜನಗರ ಜಿಲ್ಲಾ ಒಕ್ಕಲಿಗರ ಸಂಘ, ನಾಡಪ್ರಭು ಕೆಂಪೇಗೌಡ ಜಯಂತ್ಯುತ್ಸವ ಸಮಿತಿ ವತಿಯಿಂದ ನಗರದ ಕಲಾಮಂದಿರದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಬೆಂಗಳೂರು ನಿರ್ಮಾತೃ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ, ಈಗಾಗಲೇ ಸರ್ಕಾರಿ ರಜೆಗಳು ಸಾಕಷ್ಟು ಇವೆ. ಇದರ ಜತೆಗೆ ವಿವಿಧ ಜಯಂತಿಗಳ ರಜೆಯಿಂದ ಸರ್ಕಾರಿ ಕಚೇರಿಗಳಲ್ಲಿ ಜನರ ಕೆಲಸ ಕಾರ್ಯಗಳು ಸರಿಯಾಗಿ ನಡೆಯುತ್ತಿಲ್ಲ. ಹೀಗಾದರೆ ಜನರ ಸಮಸ್ಯೆಗಳನ್ನು ಆಲಿಸುವುದು ಯಾವಾಗ? ಬಗೆಹರಿಸುವುದು ಯಾವಾಗ? ಜಯಂತಿಯನ್ನು ಮಧ್ಯಾಹ್ನವರೆಗೆ ಆಚರಿಸಿ ಮಧ್ಯಾಹ್ನ ನಂತರ ಕೆಲಸದಲ್ಲಿ ತೊಡಗುವಂತೆ ಮಾಡಬೇಕು ಎಂದು ಸಲಹೆ ನೀಡಿದರು.

ಬೆಂಗಳೂರು ನಿರ್ಮಾತೃ ಕೆಂಪೇಗೌಡ 55 ಪೇಟೆಗಳನ್ನು ಕಟ್ಟಿ ಬೆಂಗಳೂರಿನ ಬೆಳವಣಿಗೆಗೆ ಅಡಿಪಾಯ ಹಾಕಿದರು. ಅವರು ಬೆಂಗಳೂರು ಬೆಳವಣಿಗೆಗೆ ನೀಡಿದ ಕೊಡುಗೆಯನ್ನು ಯುವ ಸಮುದಾಯಕ್ಕೆ ತಿಳಿಸುವ ಕಾರ್ಯ ಆಗಬೇಕು. 16ನೇ ಶತಮಾನದಲ್ಲಿ ವಿಜಯನಗರ ಸಾಮ್ರಾಜ್ಯದಲ್ಲಿ ಆಡಳಿತ ನಡೆಸಿದ ಕೆಂಪೇಗೌಡ ಹಾಗೂ ಅವರ ವಂಶಸ್ಥರ ಕುರಿತು ಸಂಶೋಧನೆ ನಡೆಸುವ ಅವಶ್ಯಕತೆ ಇದೆ ಎಂದು ಹೇಳಿದರು.

ಬಾಲಗಂಗಧರನಾಥ ಸ್ವಾಮೀಜಿ ಸ್ಮಾರಕ ನಿರ್ಮಾಣ, ಅಭಿವೃದ್ಧಿ ನಿಗಮಕ್ಕೆ ಅನುದಾನ ಇತರೆ ಸಮುದಾಯದ ಬೇಡಿಕೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಗಮನಕ್ಕೆ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಗಮನಕ್ಕೆ ತಂದಿದ್ದಾರೆ. ಸ್ಮಾರಕ ನಿರ್ಮಾಣದ ಕೆಲಸ ಆರಂಭವಾಗಿದೆ. ಆದರೆ, ಅಭಿವೃದ್ಧಿ ನಿಗಮಕ್ಕೆ ಪೂರ್ಣ ಪ್ರಮಾಣದಲ್ಲಿ ಅನುದಾನ ಬಂದಿಲ್ಲ ಎಂದರು.

ಸಾನ್ನಿಧ್ಯ ವಹಿಸಿದ್ದ ಶ್ರೀ ಆದಿಚುಂಚನಗಿರಿ ಮೈಸೂರು ಶಾಖಾ ಮಠದ ಶ್ರೀ ಸೋಮೇಶ್ವರನಾಥ ಸ್ವಾಮೀಜಿ ಮಾತನಾಡಿ, ಕೆಂಪೇಗೌಡ ಎಲ್ಲರ ಅಭಿವೃದ್ಧಿಗಾಗಿ ಶ್ರಮಿಸಿದರು. ಅಂತಹ ನಾಯಕರ ಅವಶ್ಯಕತೆ ಪ್ರಸ್ತುತ ಇದೆ. ಕೆಂಪೇಗೌಡರು ಇಂದಿನ ಮಕ್ಕಳಿಗೆ ಮಾದರಿಯಾಗಲಿ. ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಪ್ರತಿಮೆ ಸ್ಥಾಪಿಸಿ ಅವರ ಕೊಡುಗೆಯನ್ನು ಶಾಶ್ವತವಾಗಿ ಸ್ಮರಿಸುವಂತೆ ಮಾಡಿರುವುದಕ್ಕೆ ಅಭಿನಂದಿಸೋಣ ಎಂದರು.
ವಿಧಾನ ಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ ಮಾತನಾಡಿ, ಪ್ರಪಂಚದ ಭೂಪಟದಲ್ಲಿ ಬೆಂಗಳೂರು ನಗರ ಪ್ರಮುಖವಾಗಿ ಗುರುತಿಸಿಕೊಳ್ಳಲು ಕೆಂಪೇಗೌಡ ಕಾರಣ. ಕೆಂಪೇಗೌಡರನ್ನು ಮುಂದಿನ ಪೀಳಿಗೆಗೆ ತಲುಪಿಸುವ ಉದ್ದೇಶದಿಂದ ಪ್ರತಿ ಗ್ರಾಮದಲ್ಲಿಯೂ ಕೆಂಪೇಗೌಡ ಜಯಂತಿ ಆಚರಿಸಬೇಕು ಎಂದರು.

ಮೈಸೂರು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಡಿ.ಕೆ. ರಾಜೇಂದ್ರ ಮಾತನಾಡಿ, ಕೆಂಪೇಗೌಡ ಒಕ್ಕಲಿಗ ಸಮುದಾಯದಲ್ಲಿ ಜನಿಸಿದರೂ ಅವರು ಎಲ್ಲ ಸಮುದಾಯಗಳ ಅಭಿವೃದ್ಧಿಗೆ ಶ್ರಮಿಸಿದರು. ಅವರು ಕೈಗೊಂಡ ಜನಪರ ಕಾರ್ಯಗಳ ಮೂಲಕ ಚಿರಸ್ಥಾಯಿಯಾಗಿ ಉಳಿದಿದ್ದಾರೆ. ಬೆಂಗಳೂರು ಮಾದರಿ ನಗರವಾಗಿ ಬೆಳೆಯಲು ಕೆಂಪೇಗೌಡರು ಕಾರಣ. ಕೆರೆಗಳು, ದೇವಾಲಯ, ಪೇಟೆಗಳನ್ನು ವ್ಯವಸ್ಥಿತವಾಗಿ ನಿರ್ಮಾಣ ಮಾಡಿದರು. ಅವರು ನಿರ್ಮಾಣ ಮಾಡಿದ ಕೆರೆಗಳು ಇಂದಿಗೂ ಇವೆ ಎಂದರು.

ವೇದಿಕೆಯಲ್ಲಿ ವಿಧಾನ ಪರಿಷತ್ ಸದಸ್ಯ ಕೆ.ವಿವೇಕಾನಂದ, ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ. ಗಾಯತ್ರಿ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಡಾ.ಪುಷ್ಪಾ ಅಮರ್‌ನಾಥ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್ ಹಾಗೂ ಇತರರು ಇದ್ದರು.

ಕೆಂಪೇಗೌಡ ಜಯಂತಿ ಪ್ರಯುಕ್ತ ನಗರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನ ಆವರಣದಿಂದ ಕಲಾಮಂದಿರವರೆಗೆ ಆಕರ್ಷಕ ಮೆರವಣಿಗೆ ನಡೆಯಿತು. ಕೆಂಪೇಗೌಡರ ಭಾವಚಿತ್ರದೊಂದಿಗೆ ಜಾನಪದ ಕಲಾತಂಡಗಳ ಮೆರವಣಿಗೆ ಪ್ರತಿಯೊಬ್ಬರ ಕಣ್ಮನ ಸೆಳೆಯಿತು.
ಮೆರವಣಿಗೆಗೆ ಚಾಲನೆ ನೀಡುವ ಸಂದರ್ಭ ಶ್ರೀ ಆದಿಚುಂಚನಗಿರಿ ಮೈಸೂರು ಶಾಖಾ ಮಠದ ಶ್ರೀ ಸೋಮೇಶ್ವರನಾಥ ಸ್ವಾಮೀಜಿ, ಶಾಸಕರಾದ ಜಿ.ಟಿ.ದೇವೇಗೌಡ, ಜಿ.ಡಿ.ಹರೀಶ್‌ಗೌಡ, ಕೆ.ಹರೀಶ್‌ಗೌಡ, ವಿಧಾನ ಪರಿಷತ್ ಸದಸ್ಯ ಕೆ.ವಿವೇಕಾನಂದ, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ನಗರ ಪೊಲೀಸ್ ಆಯುಕ್ತ ಬಿ.ರಮೇಶ್, ಮುಡಾ ಆಯುಕ್ತ ಜಿ.ಟಿ.ದಿನೇಶ್ ಕುಮಾರ್ ಹಾಗೂ ಇತರರು ಇದ್ದರು.

ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಿಂದ ಹೊರಟ ಮೆರವಣಿಗೆಯು ಕೆ.ಆರ್.ವೃತ್ತ, ಡಿ.ದೇವರಾಜ ಅರಸು ರಸ್ತೆ, ಜೆಎಲ್‌ಬಿ ರಸ್ತೆ,ಮೆಟ್ರೋಪೋಲ್ ವೃತ್ತ, ಹುಣಸೂರು ರಸ್ತೆಯ ಮೂಲಕ ಕಲಾಮಂದಿರ ತಲುಪಿತು. ಡೊಳ್ಳು ಕುಣಿತ, ಬ್ಯಾಂಡ್‌ಸೆಟ್, ಕೋಲು ವರಸೆ, ವೀರಗಾಸೆ, ತಮಟೆ, ನಾದಸ್ವರ, ಗಾರುಡಿ ಗೊಂಬೆ, ಗೊರವರ ಕುಣಿತ, ಪೂಜಾ ಕುಣಿತ, ಪಟದ ಕುಣಿತ ಮೆರವಣಿಗೆಗೆ ಮೆರಗು ನೀಡಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net