

ಹಾಸನ: ಇತ್ತೀಚಿನ ದಿನಗಳಲ್ಲಿ ಮಕ್ಕಳು ಮೊಬೈಲ್‌ನಲ್ಲಿ ಹೆಚ್ಚು ಸಮಯ ಕಳೆಯುತ್ತಿರುವುದರಿಂದ ಹೃದಯಾಘಾತ ಪ್ರಕರಣ ಹೆಚ್ಚುತ್ತಿದೆ. ಹಾಗಾಗಿ ಪಾಲಕರು ಮಕ್ಕಳನ್ನು ಕ್ರೀಡಾಕೂಟಗಳಲ್ಲಿ ಹೆಚ್ಚಿಗೆ ತೊಡಗಿಸಬೇಕೆಂದು ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ರವಿ ನಾಕಲಗೂಡು ಹೇಳಿದರು.
ಜಿಲ್ಲಾ ಕ್ರೀಡಾಂಗಣದಲ್ಲಿ ಟಾರ್ಗೆಟ್ ಕಾಲೇಜು ಸಹಯೋಗದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿ, ಮಕ್ಕಳು ದೈಹಿಕವಾಗಿ ಸದೃಢರಾಗಲು ಕ್ರೀಡೆ ಅತ್ಯಂತ ಮುಖ್ಯ. ಓದು ಮತ್ತು ಮೊಬೈಲ್‌ನಲ್ಲಿ ಮಾತ್ರ ಕಾಲ ಕಳೆಯುವ ಪ್ರವೃತ್ತಿ ಆರೋಗ್ಯಕ್ಕೆ ಅಪಾಯಕಾರಿ. ವಿದ್ಯಾರ್ಥಿಗಳು ಸೋಲು-ಗೆಲುವನ್ನು ಸಮನಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಸರ್ಕಾರಿ ಬಾಲಕಿಯರ ವಿಭಜಿತ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಗಣಪತಿ ಮಾತನಾಡಿ, ಕ್ರೀಡಾ ಚಟುವಟಿಕೆಯಿಂದ ವಿದ್ಯಾರ್ಥಿಗಳು ದೈಹಿಕ ಹಾಗೂ ಮಾನಸಿಕವಾಗಿ ಸದೃಢರಾಗುತ್ತಾರೆ. ಪ್ರತಿಯೊಬ್ಬರೂ ಯಾವುದಾದರೂ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.
ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಬಾಳ್ಳು ಗೋಪಾಲ್, ದೀಪಕ್, ಸುರೇಶ್, ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ಮಂಜುನಾಥ್, ಪ್ರಶಾಂತ್ ಕುಮಾರ್, ವಿಜಯ್, ರಾಹುಲ್ ಇತರರು ಇದ್ದರು.