ರಾಜ್ಯೋತ್ಸವ ಆಚರಣೆಗೆ ಸಿದ್ಧತೆ ಮಾಡಿಕೊಳ್ಳಿ

oppo_2
oppo_2
Published on

ಹನೂರು: ನವೆಂಬರ್ 1ರಂದು ಆಚರಿಸುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಎಲ್ಲರ ನೆನಪಿನಲ್ಲಿ ಉಳಿಯುವಂತಾಗಬೇಕು. ಆದ್ದರಿಂದ ಈ ಬಗ್ಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಶಾಸಕ ಎಂ.ಆರ್.ಮಂಜುನಾಥ್ ತಿಳಿಸಿದರು.


ಪಟ್ಟಣದ ಲೋಕೋಪಯೋಗಿ ಇಲಾಖೆಯ ಅತಿಥಿ ಗೃಹದ ಸಭಾಂಗಣದಲ್ಲಿ ಶನಿವಾರ ಕನ್ನಡ ರಾಜ್ಯೋತ್ಸವ ಆಚರಣೆ ಸಂಬಂಧ ಅಗತ್ಯ ಸಿದ್ಧತೆ ಕುರಿತು ಆಯೋಜಿಸಿದ್ದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಪ್ರಗತಿಪರ ಸಂಘಟನೆಗಳ ಪದಾಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.


ಕಳೆದ ವರ್ಷ 50ನೇ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ತಾಲೂಕು ಕೇಂದ್ರದಲ್ಲಿ ಅರ್ಥಪೂರ್ಣ ಹಾಗೂ ವಿಜೃಂಭಣೆಯಿಂದ ಆಚರಿಸಲಾಗಿತ್ತು. ಅದರಂತೆಯೇ ಈ ವರ್ಷವೂ ಮುಂದುವರಿಸಯಬೇಕು. ಆದ್ದರಿಂದ ಪ್ರಗತಿಪರ ಸಂಘಟನೆಗಳು ಅಗತ್ಯ ಸಲಹೆ, ಸೂಚನೆಗಳನ್ನು ನೀಡಬೇಕು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ವಿಜೃಂಭಣೆಯ ಆಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಪಾಲಿಸಬೇಕು, ಶಾಲಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು.


ಎಸ್ಸೆಸ್ಸೆಲ್ಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಬೇಕು. ಸಂಪನ್ಮೂಲ ವ್ಯಕ್ತಿಗಳಿಂದ ಉಪನ್ಯಾಸ ಆಯೋಜಿಸಬೇಕು. ಪಟ್ಟಣದ ಪೊಲೀಸ್ ಠಾಣೆಯಿಂದ ಬಸ್ ನಿಲ್ದಾಣದವರೆಗೆ ಅಳವಡಿಸುವ ವಿದ್ಯುತ್ ದೀಪಾಲಂಕಾರ ಅಚ್ಚುಕಟ್ಟಾಗಿ ಇರಬೇಕು. ಇದರಲ್ಲಿ ಯಾವುದೇ ನಿರ್ಲಕ್ಷ್ಯ ಸಲ್ಲದು. ಇನ್ನು ಮೆರವಣಿಗೆಯಲ್ಲಿ ಕಲಾತಂಡಗಳು ಹೆಚ್ಚು ಭಾಗವಹಿಸಬೇಕು. ಈ ಮೂಲಕ ಸ್ಥಳೀಯ ಕಲಾವಿದರಿಗೆ ಅವಕಾಶ ನೀಡಬೇಕು. ಪ್ರವಾಸಿ ತಾಣಗಳ ಸ್ತಬ್ಧಚಿತ್ರವಿರಬೇಕು. ವರನಟ ಡಾ.ರಾಜ್‌ಕುಮಾರ್ ಅವರ ಜೀವನ ಚರಿತ್ರೆಯ ಬಗ್ಗೆ ಅರಿವು ಮೂಡಿಸುವ ಕೆಲಸವಾಗಬೇಕು. ಈ ಸಂಬಂಧ ಪ್ರತಿಯೊಬ್ಬರೂ ಜವಾಬ್ದಾರಿ ವಹಿಸಿಕೊಳ್ಳುವ ಮೂಲಕ ರೂಪುರೇಷಗಳನ್ನು ಸಿದ್ಧಪಡಿಸಿಕೊಂಡು ವಿಜೃಂಭಣೆಯ ರಾಜ್ಯೋತ್ಸವ ಆಚರಣೆಗೆ ಕಾರ್ಯೋನ್ಮುಖರಾಗಬೇಕು ಎಂದು ತಿಳಿಸಿದರು.


ತಹಸೀಲ್ದಾರ್ ವೈ.ಕೆ.ಗುರುಪ್ರಸಾದ್ ಮಾತನಾಡಿ, ಕಳೆದ ವರ್ಷದಂತೆಯೇ ಈ ವರ್ಷವೂ ವಿಜೃಂಭಣೆಯಿಂದ ಆಚರಿಸುವಂತಾಗಬೇಕು. ಹಾಗಾಗಿ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದರು.


ಕಾರ್ಯಕ್ರಮ ಆಯೋಜನೆ ಸ್ಥಳ, ಮೆರವಣಿಗೆಯ ಸಿದ್ಧತೆ ಹಾಗೂ ಯಶಸ್ವಿ ಕಾರ್ಯಕ್ರಮ ಆಯೋಜನೆ ಕುರಿತು ಚರ್ಚಿಸಲಾಯಿತು.
ಸಭೆಯಲ್ಲಿ ಪಪಂ ಅಧ್ಯಕ್ಷೆ ಮಮ್ತಾಜ್‌ಬಾನು, ಉಪಾಧ್ಯಕ್ಷ ಆನಂದ್‌ಕುಮಾರ್, ಸದಸ್ಯರಾದ ಮಹೇಶ್, ಸೋಮಶೇಖರ್, ತಾಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ನಂಜಮ್ಮಣಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಕೇಶವಮೂರ್ತಿ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ರಾಜೇಶ್, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಮಹಾದೇವ, ತಾಲೂಕು ಆರೋಗ್ಯಾಧಿಕಾರಿ ಡಾ.ಪ್ರಕಾಶ್, ಸೆಸ್ಕ್ ಎಇ ರಂಗಸ್ವಾಮಿ, ಪಪಂ ಮುಖ್ಯಾಧಿಕಾರಿ ಅಶೋಕ್, ಆರ್‌ಐ ಶೇಷಣ್ಣ ಹಾಗೂ ಪ್ರಗತಿಪರ ಸಂಘಟನೆಯ ಪದಾಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net