

ಮೈಸೂರು: ಮೇಯರ್ ಸ್ಥಾನಕ್ಕೆ ಜೆಡಿಎಸ್ ಸದಸ್ಯರ ಅಭಿಪ್ರಾಯ ಪಡೆದು ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು ಎಂದು ಶಾಸಕ ಸಾ.ರಾ. ಮಹೇಶ್ ತಿಳಿಸಿದರು.
ಮೇಯರ್ ಸ್ಥಾನದ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಜವಾಬ್ದಾರಿಯನ್ನು ಪಕ್ಷದ ವರಿಷ್ಠರು ನಮಗೆ ನೀಡಿದ್ದಾರೆ. ಹೀಗಾಗಿ ಪಾಲಿಕೆ ಸದಸ್ಯರ ಅಭಿಪ್ರಾಯ ಪಡೆದು ಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಪಾಲಿಕೆಯಲ್ಲಿ ಜೆಡಿಎಸ್ ಕಾಂಗ್ರೆಸ್‌ನೊಂದಿಗೆ ಮೈತ್ರಿ ಮುಂದುವರಿಸಲಿದೆ. ಇದರಲ್ಲಿ ಯಾವುದೇ ಗೊಂದಲ ಇಲ್ಲ. ಮೊದಲ ಅವಧಿಯಲ್ಲಿ ಕಾಂಗ್ರೆಸ್‌ಗೆ ಮೇಯರ್ ಸ್ಥಾನ ಬಿಟ್ಟುಕೊಡಲಾಗಿತ್ತು. ಇದೀಗ ಎರಡನೇ ಅವಧಿಯಲ್ಲಿ ಜೆಡಿಎಸ್‌ಗೆ ಮೇಯರ್ ಸ್ಥಾನ ದೊರೆತಿದೆ. ಕಾಂಗ್ರೆಸ್‌ನವರು ಉಪ ಮೇಯರ್ ಸ್ಥಾನ ಪಡೆಯಲಿದ್ದಾರೆ ಎಂದು ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ಧರ್ಮಸೇನ ಮಾತನಾಡಿ, ಮೇಯರ್ ಹಾಗೂ ಉಪಮೇಯರ್ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹಾಗೂ ಜೆಡಿಎಸ್ ಮುಖಂಡರು ಎರಡು ಬಾರಿ ಸಭೆ ಸೇರಿ ಚರ್ಚೆ ನಡೆಸಿದ್ದೇವೆ. ಎರಡನೇ ಅವಧಿಯಲ್ಲೂ ನಮ್ಮ ಮೈತ್ರಿ ಮುಂದುವರಿಯಲಿದೆ ಎಂದರು.
ಜೆಡಿಎಸ್ ಮುಖಂಡ ಕೆ.ಎಸ್.ರಂಗಪ್ಪ ಮಾತನಾಡಿ, ಅಖಿಲ ಭಾರತ ವಿಜ್ಞಾನ ಕಾಂಗ್ರೆಸ್ ಸಮಾವೇಶದ ಹಿನ್ನೆಲೆಯಲ್ಲಿ ಒಂದೂವರೆ ವರ್ಷಗಳಿಂದ ರಾಜಕೀಯದಲ್ಲಿ ಗುರುತಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಇದೀಗ ಸಮ್ಮೇಳನ ಮುಗಿದಿದ್ದು, ಸಕ್ರಿಯ ರಾಜಕಾರಣಕ್ಕೆ ಮರಳಿದ್ದೇನೆ ಎಂದರು.
ಸುದ್ದಿಗೋಷ್ಠಿಯಲ್ಲಿ ಮೇಯರ್ ಪುಷ್ಪಲತಾ ಜಗನ್ನಾಥ್, ಜೆಡಿಎಸ್ ನಗರಾಧ್ಯಕ್ಷ ಕೆ.ಟಿ. ಚೆಲುವೇಗೌಡ, ಕಾಂಗ್ರೆಸ್ ನಗರಾಧ್ಯಕ್ಷ ಆರ್.ಮೂರ್ತಿ, ವಿಧಾನ ಪರಿಷತ್ ಸದಸ್ಯ ಕೆ.ಟಿ. ಶ್ರೀಕಂಠೇಗೌಡ, ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಇದ್ದರು.
ಜಿಟಿಡಿ ಅವರಷ್ಟು ಅನುಭವ ನನಗಿಲ್ಲ: ಮೈಸೂರು: ಶಾಸಕ ಜಿ.ಟಿ. ದೇವೇಗೌಡರಷ್ಟು ರಾಜಕೀಯ ಅನುಭವ ನನಗೆ ಇಲ್ಲ. ಅವರ ಅನುಭವ ಪಡೆದು, ಅವರು ನೀಡುವ ಮಾರ್ಗದರ್ಶನ ಪಾಲಿಸುತ್ತೇನೆ ಎಂದು ಶಾಸಕ ಸಾ.ರಾ. ಮಹೇಶ್ ಹೇಳಿದರು.
ಯಾವುದೇ ಪಕ್ಷದಲ್ಲಾದರೂ ಸಣ್ಣಪುಟ್ಟ ಭಿನ್ನಾಭಿಪ್ರಾಯ ಇರುವುದು ಸಹಜ. ಆ ಸಣ್ಣಪುಟ್ಟ ಭಿನ್ನಾಭಿಪ್ರಾಯವನ್ನು ಬಗೆಹರಿಸಿಕೊಂಡು ಸಾಗುತ್ತೇವೆ. ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಜಿ.ಟಿ. ದೇವೇಗೌಡರನ್ನು ಭೇಟಿಯಾದ ಸಂದರ್ಭ ಅವರೊಂದಿಗೆ ಮೇಯರ್ ಚುನಾವಣೆಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದ್ದೇನೆ. ಉತ್ತಮ ವ್ಯಕ್ತಿಯನ್ನು ಆಯ್ಕೆ ಮಾಡಿ ಎಂದು ಅವರು ಸಲಹೆ ನೀಡಿದ್ದಾರೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಮೇಯರ್ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ಬೆಂಬಲಿಸುತ್ತೇನೆ ಎಂದು ಜಿ.ಟಿ. ದೇವೇಗೌಡರು ಭರವಸೆ ನೀಡಿದ್ದಾರೆ. ಅವರು ಕೆಲಕಾಲ ತಟಸ್ಥರಾಗಿರುವ ಮಾತುಗಳನ್ನು ಆಡಿದ್ದಾರೆ. ಈ ಕಾರಣಕ್ಕೆ ಅವರು ಮೇಯರ್ ಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುತ್ತಿಲ್ಲ ಎಂದು ತಿಳಿಸಿದರು.